ರೌಡಿಶೀಟರ್ ನಾಗರಾಜ್ ವಿರುದ್ಧ ಎಫ್ಐಆರ್
ಬೆಂಗಳೂರು, ಎ.9: ಬೆಂಗಳೂರು ಪ್ರೆಸ್ ಕ್ಲಬ್ನಲ್ಲಿ ಸುದ್ದಿಗೋಷ್ಠಿಯಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ರೌಡಿಶೀಟರ್ ನಾಗರಾಜ್ ವಿರುದ್ಧ ಇಲ್ಲಿನ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಆತ್ಮಹತ್ಯೆ ಯತ್ನ ಆರೋಪ ಪ್ರಕರಣ ಸಂಬಂಧ ಐಪಿಸಿ ಸೆಕ್ಷನ್ 309ರ ಅಡಿ ಮೊಕದ್ದಮೆ ದಾಖಲಾಗಿದ್ದು, ಆತ್ಮಹತ್ಯೆ ಯತ್ನ ಅಪರಾಧ ಎಂಬುವುದನ್ನು ತಿಳಿದಿರುವ ನಾಗರಾಜ್ ವಿಷ ಸೇವಿಸಿರುವುದರಿಂದ ಆತನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ನಾಗರಾಜ್ ಆತ್ಮಹತ್ಯೆಗೆ ಯತ್ನಿಸಿರುವ ದೃಶ್ಯಗಳು ಮಾಧ್ಯಮಗಳಲ್ಲಿ ಪ್ರಸಾರವಾಗಿದ್ದವು. ಈ ದೃಶ್ಯಗಳ ಆಧಾರದ ಮೇಲೆ ಪೊಲೀಸರು ಸುಮೋಟೋ ಕೇಸ್ ದಾಖಲಿಸಿಕೊಂಡಿದ್ದಾರೆ.
ಎ.6 ರಂದು ಪ್ರೆಸ್ಕ್ಲಬ್ನಲ್ಲಿ ಸುದ್ದಿಗೋಷ್ಠಿ ನಡೆಸಿದ್ದ ನಾಗರಾಜ್, ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದ. ಬಳಿಕ ನೃಪತುಂಗ ರಸ್ತೆಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು. ಸದ್ಯ ಆತ ಪ್ರಾಣಾಪಾಯದಿಂದ ಪಾರಾಗಿ ಆಸ್ಪತ್ರೆಯಿಂದ ಬಿಡುಗಡೆ ಆಗಿದ್ದಾನೆ.
Next Story