ಜೆಡಿಎಸ್ ರಾಜ್ಯಾಧ್ಯಕ್ಷರ ಬದಲಾವಣೆಗೆ ಸಮಿತಿ: ಎಚ್.ಡಿ.ದೇವೇಗೌಡ
ಬೆಂಗಳೂರು, ಜು.21: ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿರುವುದರಿಂದ ರಾಜ್ಯಾಧ್ಯಕ್ಷರಾಗಿ ಪಕ್ಷ ಸಂಘಟನೆ ಮಾಡುವುದು ಕಷ್ಟ. ಹಾಗಾಗಿ, ರಾಜ್ಯಾಧ್ಯಕ್ಷರ ಜೊತೆ ಪದಾಧಿಕಾರಿಗಳ ನೇಮಕಕ್ಕೆ ಸಮಿತಿ ರಚಿಸಲಾಗುವುದು ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ತಿಳಿಸಿದ್ದಾರೆ.
ಶನಿವಾರ ನಗರದ ಜೆ.ಪಿ.ಭವನ(ಜೆಡಿಎಸ್ ಕಚೇರಿ)ದಲ್ಲಿ ನಡೆದ ಪಕ್ಷದ ಪದಾಧಿಕಾರಿಗಳ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷದ ನಿಯಮಾವಳಿಗಳನ್ನು ಗಮನದಲ್ಲಿಟ್ಟುಕೊಂಡು ಸಮಿತಿಯನ್ನು ರಚನೆ ಮಾಡಲಾಗುವುದು ಎಂದರು.
ಹೊಸ ಸಮಿತಿಯಲ್ಲಿ ಪದಾಧಿಕಾರಿಗಳ ಆಯ್ಕೆ ಕುರಿತು ಚರ್ಚಿಸಲಾಗುವುದು. ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಪಕ್ಷ ಸಂಘಟನೆಗೆ ತೊಂದರೆಯಾಗಬಾರದು. ಲೋಕಸಭಾ ಚುನಾವಣೆಗೆ ಮೈತ್ರಿ ಸರಕಾರದಲ್ಲಿ ನಮ್ಮಿಂದ ತೊಂದರೆಯಾಗಬಾರದು ಎಂದು ದೇವೇಗೌಡ ಸೂಚಿಸಿದರು.
ಮುಂದಿನ ತಿಂಗಳು ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ನಡೆಸಲಾಗುವುದು. ಲೋಕಸಭೆ ಚುನಾವಣೆಯಲ್ಲಿ ಸೀಟು ಬಿಟ್ಟು ಕೊಡುವ ಬಗ್ಗೆ ಯಾವುದೇ ಚರ್ಚೆಯಾಗಿಲ್ಲ. ಕಾಂಗ್ರೆಸ್ ಆಗಲಿ ಜೆಡಿಎಸ್ ಆಗಲಿ ಸೀಟು ಬಿಟ್ಟುಕೊಡುವ ಬಗ್ಗೆ ಚರ್ಚೆ ನಡೆಸಿಲ್ಲ ಎಂದು ಅವರು ಹೇಳಿದರು.