ಗುಣಮಟ್ಟದ ಶಿಕ್ಷಣ ಅಗತ್ಯ: ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್
ಬೆಂಗಳೂರು, ಅ. 4: ವಿಶ್ವದ ಪ್ರಮುಖ ಹತ್ತು ವಿಶ್ವ ವಿದ್ಯಾಲಯಗಳ ಪೈಕಿ ಕರ್ನಾಟಕ ರಾಜ್ಯದ ವಿಶ್ವ ವಿದ್ಯಾಲಯಗಳು ಸ್ಥಾನ ಪಡೆಯದೇ ಇರುವುದು ನಮ್ಮಲ್ಲಿ ಗುಣಮಟ್ಟದ ಶಿಕ್ಷಣ ಸಿಗುತ್ತಿಲ್ಲ ಎಂಬುದನ್ನು ತೋರಿಸುತ್ತಿದೆ ಎಂದು ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಬೇಸರ ವ್ಯಕ್ತಪಡಿಸಿದ್ದಾರೆ.
ಗುರುವಾರ ಬೆಂಗಳೂರು ವಿಶ್ವವಿದ್ಯಾಲಯದ ವತಿಯಿಂದ ಹಮ್ಮಿಕೊಂಡಿರುವ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 127ನೆ ಜಯಂತೋತ್ಸವದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ನಮ್ಮಲ್ಲಿ ಸಾಕಷ್ಟು ವಿಶ್ವವಿದ್ಯಾಲಯಗಳಿದ್ದರೂ ಗುಣಮಟ್ಟದ ಶಿಕ್ಷಣದ ಕೊರತೆ ಎದ್ದು ಕಾಣುತ್ತಿದೆ ಎಂದರು.
ವಿಶ್ವದ ಪ್ರಮುಖ 10 ವಿಶ್ವವಿದ್ಯಾಲಯದಲ್ಲಿ ಸರಕಾರದ ವಿವಿಗಳು ಸ್ಥಾನ ಗಳಿಸಿಲ್ಲ. ನಮ್ಮಲ್ಲಿ ಗುಣಮಟ್ಟದ ಶಿಕ್ಷಣ ನೀಡುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವ ಅಗತ್ಯವಿದೆ ಎಂದು ಅವರು, ಮೈತ್ರಿ ಸರಕಾರದ ಆದ್ಯತೆಯಲ್ಲಿ ಶಿಕ್ಷಣ ಪ್ರಮುಖವಾಗಿದೆ. ಈ ಕ್ಷೇತ್ರಕ್ಕೆ ಅನುದಾನ ನೀಡುವಲ್ಲಿ ಧಾರಾಳತೆ ತೋರಲಾಗಿದೆ. ಇದರ ಸದುಪಯೋಗ ಶಿಕ್ಷಣ ಸಂಸ್ಥೆಗಳು ಪಡೆದುಕೊಳ್ಳಬೇಕು ಎಂದು ಅವರು ಸಲಹೆ ಮಾಡಿದರು.
ಇಂದು ದೇಶದಲ್ಲಿ ಜಾತಿ ವ್ಯವಸ್ಥೆ ಜೀವಂತವಾಗಿದೆ. ಎಷ್ಟೇ ಎತ್ತರದ ಸ್ಥಾನಕ್ಕೇರಿದರೂ ಜಾತಿಯಿಂದ ಗುರುತಿಸುವ ಸ್ಥಿತಿ ಈಗಲೂ ಇದೆ. ನಮ್ಮೆ ದೇಶ ಮುಂದುವರೆಯಬೇಕಿದ್ದರೆ ಈ ವ್ಯವಸ್ಥೆಯನ್ನು ಬುಡಸಮೇತ ಕಿತ್ತು ಹಾಕಬೇಕು. ಇಲ್ಲದಿದ್ದರೆ ಅಭಿವೃದ್ಧಿ ಅಸಾಧ್ಯ ಎಂದು ಪರಮೇಶ್ವರ್ ಇದೇ ವೇಳೆ ಪ್ರತಿಪಾದಿಸಿದರು. ಕಾರ್ಯಕ್ರಮದಲ್ಲಿ ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ, ಗಾಯಕ ಗೊಲ್ಲಹಳ್ಳಿ ಶಿವಪ್ರಸಾದ್ ಸೇರಿದಂತೆ ಇನ್ನಿತರ ಮುಖಂಡರು ಹಾಜರಿದ್ದರು.