ಪ್ರಶಾಂತ್ ಸಂಬರಗಿ ವಿರುದ್ಧ ಶ್ರುತಿ ಹರಿಹರನ್ ದೂರು
ಶ್ರುತಿ ಹರಿಹರನ್
ಬೆಂಗಳೂರು, ಅ.26: ನಟ ಅರ್ಜುನ್ ಸರ್ಜಾ ಆಪ್ತ ಪ್ರಶಾಂತ್ ಸಂಬರಗಿ ನನಗೆ ಜೀವ ಬೆದರಿಕೆ ಹಾಕಿದ್ದಾರೆ ಎಂದು ನಟಿ ಶ್ರುತಿ ಹರಿಹರನ್ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
ನಟ ಅರ್ಜುನ್ ಸರ್ಜಾ ವಿರುದ್ಧ ಮೀಟೂ ಆರೋಪದ ಹಿನ್ನೆಲೆಯಲ್ಲಿ ಗುರುವಾರ ಕರ್ನಾಟಕ ಚಲನಚಿತ್ರ ವಾಣಿಜ್ಯಮಂಡಳಿಯಲ್ಲಿ ಸಂಧಾನ ಸಭೆ ನಡೆಯಿತು. ಈ ಸಂದರ್ಭದಲ್ಲಿ ಪ್ರಶಾಂತ್ ಸಂಬರಗಿ ಹಾಗೂ ಸಹಚರರು ನನಗೆ ಕೊಲೆ ಬೆದರಿಕೆ ಹಾಕಿದ್ದಾರೆ. ಈ ಬಗ್ಗೆ ಸೂಕ್ತ ತನಿಖೆ ನಡೆಸಿ, ಕ್ರಮ ಕೈಗೊಳ್ಳಬೇಕೆಂದು ದೂರಿನಲ್ಲಿ ಮನವಿ ಮಾಡಿದ್ದಾರೆ.
ಶ್ರುತಿ ಹರಿಹರನ್ ಹಿಂದೂ ಧರ್ಮಕ್ಕೆ ಕಳಂಕ ತರುವ ರೀತಿಯಲ್ಲಿ ವರ್ತನೆ ಮಾಡುತ್ತಿದ್ದಾರೆ ಎಂದು ಪ್ರಶಾಂತ್ ಸಂಬರಗಿ ಒಂದು ಧರ್ಮದ ಜನತೆಯನ್ನು ನನ್ನ ವಿರುದ್ದ ಎತ್ತಿಕಟ್ಟುವ ಕೆಲಸ ಮಾಡುತ್ತಿದ್ದಾರೆ. ಹಾಗೂ ನನ್ನ ಫೇಸ್ಬುಕ್ ಅಕೌಂಟಿನ ದಾಖಲೆಗಳು ತಮ್ಮ ಬಳಿ ಇವೆ ಎಂದು ಹೇಳಿಕೊಂಡಿದ್ದಾರೆ. ಇದು ನನ್ನ ಖಾಸಗಿತನಕ್ಕೆ ಧಕ್ಕೆ ತರುವಂತಹದ್ದಾಗಿದೆ. ಈ ಸಂಬಂಧ ಸೂಕ್ತ ತನಿಖೆ ನಡೆಸಿ ನನಗೆ ರಕ್ಷಣೆ ಕೊಡಬೇಕೆಂದು ದೂರಿನಲ್ಲಿ ಒತ್ತಾಯಿಸಿದ್ದಾರೆ.