ಡಿ.9ಕ್ಕೆ ಸಚಿವ ಸಂಪುಟ ವಿಸ್ತರಣೆ ಸಾಧ್ಯತೆ
ಬೆಂಗಳೂರು, ಡಿ. 3: ಬೆಳಗಾವಿಯಲ್ಲಿ ಡಿ.10ರಿಂದ ಆರಂಭಗೊಳ್ಳಲಿರುವ ಚಳಿಗಾಲದ ಅಧಿವೇಶನಕ್ಕೂ ಮೊದಲೇ ಮುಖ್ಯಮಂತ್ರಿ ಕುಮಾರಸ್ವಾಮಿ ನೇತೃತ್ವದ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರಕಾರದ ಸಂಪುಟ ವಿಸ್ತರಣೆಯಾಗುವುದು ಬಹುತೇಕ ಖಚಿತವಾಗಿದೆ.
ಮಾಜಿ ಮುಖ್ಯಮಂತ್ರಿ ಹಾಗೂ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯನವರ ಅಧ್ಯಕ್ಷತೆಯಲ್ಲಿ ಡಿ.5ಕ್ಕೆ ನಡೆಯಲಿರುವ ಸಮನ್ವಯ ಸಮಿತಿ ಸಭೆಯಲ್ಲಿ ಸಂಪುಟ ವಿಸ್ತರಣೆ ದಿನಾಂಕ ನಿಗದಿಪಡಿಸಲಿದ್ದು, ಡಿ.9ರಂದು ಸಂಪುಟ ವಿಸ್ತರಣೆಯಾಗುವ ಸಾಧ್ಯತೆಗಳಿವೆ ಎಂದು ತಿಳಿದು ಬಂದಿದೆ.
ಸಚಿವ ಸಂಪುಟದಲ್ಲಿ ಖಾಲಿರುವ ಸ್ಥಾನಗಳಿಗೆ ಕಾಂಗ್ರೆಸ್ ಪಕ್ಷದಿಂದ ಆರು ಮತ್ತು ಜೆಡಿಎಸ್ ಕಡೆಯಿಂದ (ಬಿಎಸ್ಪಿ ಶಾಸಕ ಎನ್.ಮಹೇಶ್ ರಾಜೀನಾಮೆಯಿಂದ ತೆರವಾಗಿರುವ) ಒಂದು ಸ್ಥಾನ ಸೇರಿದಂತೆ ಒಟ್ಟು ಏಳು ಸಚಿವ ಸ್ಥಾನಗಳನ್ನು ಭರ್ತಿ ಮಾಡಲು ಉಭಯ ಪಕ್ಷಗಳ ನಾಯಕರು ಸಮ್ಮತಿಸಿದ್ದಾರೆಂದು ಹೇಳಲಾಗಿದೆ.
ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಈಗಾಗಲೇ ಸಂಪುಟ ವಿಸ್ತರಣೆ ಸಂಬಂಧ ಸಮಾಲೋಚನೆ ನಡೆಸಿದ್ದು, ವಿಧಾನ ಮಂಡಲ ಅಧಿವೇಶನಕ್ಕೆ ಮೊದಲೇ ಸಂಪುಟ ವಿಸ್ತರಣೆ ಮೂಲಕ ಅತೃಪ್ತ ಶಾಸಕರ ಸಮಾಧಾನಕ್ಕೆ ಪಕ್ಷದ ನಾಯಕರು ಮುಂದಾಗಿದ್ದಾರೆಂದು ಗೊತ್ತಾಗಿದೆ.