ಲೋಕಸಭೆ ಚುನಾವಣೆ: ದೇವೇಗೌಡ ಅಧ್ಯಕ್ಷತೆಯಲ್ಲಿ ಜ.3 ರಂದು ಮುಖಂಡರ ಸಭೆ
ಬೆಂಗಳೂರು, ಜ. 2: ಸ್ಥಳೀಯ ಸಂಸ್ಥೆಗಳು ಹಾಗೂ ಮುಂಬರುವ ಲೋಕಸಭೆ ಚುನಾವಣೆ ಸಿದ್ಧತೆ ಮತ್ತು ಪಕ್ಷ ಸಂಘಟನೆ ಸೇರಿದಂತೆ ಇನ್ನಿತರ ವಿಚಾರಗಳ ಬಗ್ಗೆ ಚರ್ಚೆಗೆ ನಾಳೆ(ಜ.3) ಶೇಷಾದ್ರಿಪುರಂನಲ್ಲಿರುವ ಪಕ್ಷದ ಕಚೇರಿ ಜೆಪಿ ಭವನದಲ್ಲಿ ಮುಖಂಡರ ಸಭೆ ಕರೆಯಲಾಗಿದೆ.
ನಾಳೆ ಬೆಳಗ್ಗೆ 11ಗಂಟೆಗೆ ಸಭೆಯ ಉದ್ಘಾಟನೆಯನ್ನು ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಿ ದೇವೇಗೌಡ ನೆರವೇರಿಸಲಿದ್ದು, ಮುಖ್ಯಮಂತ್ರಿ ಕುಮಾರಸ್ವಾಮಿ ಸೇರಿದಂತೆ ಸಚಿವರು, ಶಾಸಕರು, ಮಾಜಿ ಸಚಿವರು ಮತ್ತು ಪಕ್ಷದ ಪದಾಧಿಕಾರಿಗಳು ಭಾಗವಹಿಸಲಿದ್ದಾರೆ.
ಸಭೆಯಲ್ಲಿ ಮುಂದಿನ ಲೋಕಸಭೆ ಚುನಾವಣೆ ಸಿದ್ಧತೆ, ಕಾಂಗ್ರೆಸ್ನೊಂದಿಗೆ ಚುನಾವಣಾ ಪೂರ್ವ ಸೀಟು ಹಂಚಿಕೆ ಹಾಗೂ ಸ್ಥಳೀಯ ಸಂಸ್ಥೆಗಳ ಚುನಾವಣಾ ತಯಾರಿ ಬಗ್ಗೆ ಗಂಭೀರ ಚರ್ಚೆ ನಡೆಸಲಾಗುವುದು ಎಂದು ಪಕ್ಷದ ಅಧ್ಯಕ್ಷ ಎಚ್.ವಿಶ್ವನಾಥ್ ತಿಳಿಸಿದ್ದಾರೆ.
ಕಳೆದ ವಿಧಾನಸಭೆ, ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಅಭ್ಯರ್ಥಿಗಳಿಗೂ ಸಭೆಗೆ ಆಹ್ವಾನ ನೀಡಲಾಗಿದೆ. ಸಭೆಯಲ್ಲಿ ಚುನಾವಣೆ ಸಿದ್ಧತೆಯಲ್ಲದೆ, ಪಕ್ಷ ಸಂಘಟನೆ, ಅಭ್ಯರ್ಥಿಗಳ ಆಯ್ಕೆ, ಕಾರ್ಯಾಧ್ಯಕ್ಷರು ಸೇರಿದಂತೆ ವಿವಿಧ ಪದಾಧಿಕಾರಿಗಳ ನೇಮಕ ಸೇರಿ ಹಲವು ಮಹತ್ವದ ವಿಚಾರಗಳ ಚರ್ಚೆ ನಡೆಯಲಿದೆ ಎಂದು ಹೇಳಲಾಗಿದೆ.
ಇದೇ ವೇಳೆ ನಿಗಮ ಮಂಡಳಿ ಅಧ್ಯಕ್ಷ-ಉಪಾಧ್ಯಕ್ಷರ ನೇಮಕ ಸಂಬಂಧವೂ ಚರ್ಚೆ ನಡೆಯಲಿದೆ. ಅಲ್ಲದೆ, ಲೋಕಸಭೆ ಚುನಾವಣೆಗೆ ಪಕ್ಷ ಸಜ್ಜುಗೊಳಿಸಲು ರಾಜ್ಯ ಪ್ರವಾಸ ಕೈಗೊಳ್ಳುವ ಸಂಬಂಧ ಜೆಡಿಎಸ್ ವರಿಷ್ಟ ದೇವೇಗೌಡ ಮುಖಂಡರ ಅಭಿಪ್ರಾಯಗಳನ್ನು ಸ್ವೀಕರಿಸಿದ್ದಾರೆಂದು ಗೊತ್ತಾಗಿದೆ.