ಆನಂದ್ ಸಿಂಗ್ ಆರೋಗ್ಯ ವಿಚಾರಿಸಿದ ಮುಖ್ಯಮಂತ್ರಿ ಕುಮಾರಸ್ವಾಮಿ
ಬೆಂಗಳೂರು, ಜ. 26: ರೆಸಾರ್ಟ್ನಲ್ಲಿ ಹಲ್ಲೆಗೀಡಾಗಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಳ್ಳಾರಿಯ ವಿಜಯನಗರ ಕ್ಷೇತ್ರದ ಶಾಸಕ ಆನಂದ್ ಸಿಂಗ್ ಅವರನ್ನು ಭೇಟಿ ಮಾಡಿದ ಮುಖ್ಯಮಂತ್ರಿ ಕುಮಾರಸ್ವಾಮಿ ಆರೋಗ್ಯ ವಿಚಾರಿಸಿದರು.
ಆಪರೇಷನ್ ಕಮಲ ಭೀತಿ ಹಿನ್ನೆಲೆಯಲ್ಲಿ ಬೆಂಗಳೂರು ಹೊರವಲಯದ ಬಿಡದಿ ಬಳಿಯ ಈಗಲ್ಟನ್ ರೆಸಾರ್ಟ್ನಲ್ಲಿ ಕಾಂಗ್ರೆಸ್ ಶಾಸಕರು ವಾಸ್ತವ್ಯ ಹೂಡಿದ್ದರು. ಜ.19ರ ರಾತ್ರಿ ಕಂಪ್ಲಿ ಕ್ಷೇತ್ರದ ಶಾಸಕ ಗಣೇಶ್ ಹಾಗೂ ಆನಂದ್ ಸಿಂಗ್ ಮಧ್ಯೆ ಹೊಡೆದಾಟ ನಡೆದಿತ್ತು.
ಇದರ ಪರಿಣಾಮ ಆನಂದ್ ಸಿಂಗ್ ಬಲಗಣ್ಣಿನ ಮೂಳೆ ಮುರಿದಿತ್ತು. ಹೀಗಾಗಿ ಅವರನ್ನು ಜ.20ರ ಬೆಳಗ್ಗೆ ನಗರದ ಶೇಷಾದ್ರಿಪುರಂನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆ ಬಳಿಕ ಶಾಸಕ ಗಣೇಶ್ ವಿರುದ್ಧ ಬಿಡದಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಿದ್ದು, ಗಣೇಶ್ ಬಂಧನಕ್ಕೆ ಪೊಲೀಸರು ಶೋಧ ಕಾರ್ಯ ಕೈಗೊಂಡಿದ್ದಾರೆ.
ಶನಿವಾರ ಸಂಜೆ ಶೇಷಾದ್ರಿಪುರಂನಲ್ಲಿರುವ ಆಸ್ಪತ್ರೆಗೆ ಭೇಟಿ ನೀಡಿದ ಸಿಎಂ ಕುಮಾರಸ್ವಾಮಿ, ಆನಂದ್ ಸಿಂಗ್ ಆರೋಗ್ಯ ವಿಚಾರಿಸಿದರು. ಅವರು ಕುಟುಂಬದ ಸದಸ್ಯರಿಗೆ ಸಿಎಂ ಇದೇ ವೇಳೆ ಸಾಂತ್ವನ ಹೇಳಿದರು. ಈ ವೇಳೆ ರಾಜರಾಜೇಶ್ವರಿ ನಗರ ಕ್ಷೇತ್ರದ ಶಾಸಕ ಮುನಿರತ್ನ ಹಾಜರಿದ್ದರು.