ಲಾರಿ ಹರಿದು ಆಟವಾಡುತ್ತಿದ್ದ ಬಾಲಕಿ ಮೃತ್ಯು
ಬೆಂಗಳೂರು, ಫೆ.20: ಲಾರಿ ಹರಿದು ಆಟವಾಡುತ್ತಿದ್ದ ನಾಲ್ಕು ವರ್ಷದ ಬಾಲಕಿ ಸಾವನ್ನಪ್ಪಿದ ಘಟನೆ ಬಿಡದಿಯ ಉರಗಹಳ್ಳಿಯಲ್ಲಿ ನಡೆದಿದೆ ಎನ್ನಲಾಗಿದೆ.
ಹುಚ್ಚಮ್ಮನದೊಡ್ಡಿ ಕಗ್ಗಲಯ್ಯ ಹಾಗೂ ಲತಾ ದಂಪತಿಯ ಪುತ್ರಿ ವರ್ಷಿತಾ ಮೃತ ಬಾಲಕಿ ಎಂದು ಪೊಲೀಸರು ಗುರುತಿಸಿದ್ದಾರೆ.
ಕೂಲಿ ಕೆಲಸ ಮಾಡುತ್ತಿದ್ದ ದಂಪತಿಯು ಉರುಗಹಳ್ಳಿಗೆ ಮಗಳನ್ನು ಕರೆದುಕೊಂಡು ಬಂದಿದ್ದರು. ಪೋಷಕರು ಕೆಲಸ ಮಾಡುತ್ತಿದ್ದಾಗ ರಸ್ತೆಯ ಪಕ್ಕದಲ್ಲಿ ಆಟವಾಡುತ್ತಿದ್ದ ಬಾಲಕಿ ಮೇಲೆ ಲಾರಿ ಹರಿದು ಸ್ಥಳದಲ್ಲಿಯೇ ಬಾಲಕಿ ಮೃತಪಟ್ಟಿದ್ದಾಳೆ ಎನ್ನಲಾಗಿದೆ.
ಲಾರಿಗಳ ಸಂಚಾರ ಹೆಚ್ಚಾಗಿದ್ದು, ಇದರಿಂದ ರಸ್ತೆ ಅಪಘಾತಗಳು ಹೆಚ್ಚಾಗುತ್ತಿವೆ ಎಂದು ಆಕ್ರೋಶಗೊಂಡ ಗ್ರಾಮಸ್ಥರು ಮೃತದೇಹವನ್ನು ರಸ್ತೆಯಲ್ಲಿಟ್ಟು ಪ್ರತಿಭಟನೆ ನಡೆಸಿದ್ದಾರೆ. ಸ್ಥಳಕ್ಕೆ ಬಿಡದಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರತಿಭಟನಾಕಾರರ ಮನವೊಲಿಸಿ ಪ್ರಕರಣ ದಾಖಲಿಸಿ ಲಾರಿ ಚಾಲಕನನ್ನು ಬಂಧಿಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ.
Next Story