ಕುತೂಹಲ ಕೆರಳಿಸಿದ ಸಿಎಂ ಯಡಿಯೂರಪ್ಪ- ಕಾಂಗ್ರೆಸ್ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಭೇಟಿ
ಬೆಂಗಳೂರು, ನ. 13: ಬೆಳಗಾವಿ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಅಚ್ಚರಿಯ ಬೆಳವಣಿಗೆಯೊಂದರಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರನ್ನು ಭೇಟಿ ಮಾಡಿ ಚರ್ಚಿಸಿರುವುದು ರಾಜಕೀಯ ವಲಯದಲ್ಲಿ ಕುತೂಹಲಕ್ಕೆ ಕಾರಣವಾಗಿದೆ.
ಬುಧವಾರ ಇಲ್ಲಿನ ಡಾಲರ್ಸ್ ಕಾಲನಿಯಲ್ಲಿರುವ ಸಿಎಂ ಬಿಎಸ್ವೈ ಅವರ ಧವಳಗಿರಿ ನಿವಾಸಕ್ಕೆ ದಿಢೀರ್ ಭೇಟಿ ನೀಡಿದ ಲಕ್ಷ್ಮಿ ಹೆಬ್ಬಾಳ್ಕರ್ ಸುಮಾರು 20 ನಿಮಿಷಗಳ ಕಾಲ, ಮುಖ್ಯಮಂತ್ರಿ ಯಡಿಯೂರಪ್ಪ ಅವರೊಂದಿಗೆ ಸಮಾಲೋಚನೆ ನಡೆಸಿದ್ದಾರೆಂದು ಗೊತ್ತಾಗಿದೆ.
ಈ ಸಂಬಂಧ ಪ್ರತಿಕ್ರಿಯೆಗೆ ನಿರಾಕರಿಸಿರುವ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್, ತನ್ನ ಇನ್ಸ್ಟಾ ಗ್ರಾಮ್ನಲ್ಲಿ ಕ್ಷೇತ್ರದ ಅಭಿವೃದ್ಧಿ ಕಾರ್ಯ ನಿಮಿತ್ತ ಮುಖ್ಯಮಂತ್ರಿ ಯಡಿಯೂರಪ್ಪನವರನ್ನು ಭೇಟಿ ಮಾಡಿದ್ದೇನೆಂದು ಬರೆದುಕೊಂಡಿದ್ದಾರೆ. ಆದರೆ, ಲಕ್ಷ್ಮಿ ಹೆಬ್ಬಾಳ್ಕರ್ ಮತ್ತು ಬಿಎಸ್ವೈ ಭೇಟಿ ಬಗ್ಗೆ ರಾಜಕೀಯ ವಲಯದಲ್ಲಿ ಹಲವು ರೀತಿಯ ಚರ್ಚೆಗಳು ನಡೆಯುತ್ತಿವೆ.
ಬೆಳಗಾವಿ ಜಿಲ್ಲೆಯ ಗೋಕಾಕ್ ಕ್ಷೇತ್ರದ ಉಪಚುನಾವಣೆಯಲ್ಲಿ ಟಿಕೆಟ್ ಸೇರಿದಂತೆ ಬೆಳಗಾವಿ ಜಿಲ್ಲಾ ರಾಜಕಾರಣದ ಬಗ್ಗೆ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಮುಖ್ಯಮಂತ್ರಿ ಯಡಿಯೂರಪ್ಪನವರ ಜತೆ ಸಮಾಲೋಚನೆ ನಡೆಸಲಿದ್ದಾರೆಂದು ಹೇಳಲಾಗಿದೆ.