ಅವಾಚ್ಯ ಶಬ್ದಗಳಿಂದ ನಿಂದಿಸಿ ಮಲ್ಲಿಕಾರ್ಜುನ ಖರ್ಗೆಗೆ ಜೀವ ಬೆದರಿಕೆ: ಡಿಜಿಗೆ ಪ್ರಿಯಾಂಕ್ ಖರ್ಗೆ ದೂರು
ಪ್ರಿಯಾಂಕ್ ಖರ್ಗೆ
ಬೆಂಗಳೂರು, ಜೂ.9: ಕಾಂಗ್ರೆಸ್ ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ ಅವರಿಗೆ ದುಷ್ಕರ್ಮಿಯೊರ್ವ ಆವಾಚ್ಯ ಶಬ್ದಗಳಿಂದ ನಿಂದಿಸಿ, ಜೀವ ಬೆದರಿಕೆ ಹಾಕಿದ್ದಾನೆ ಎಂದು ಆರೋಪಿಸಿ ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಅವರಿಗೆ ಶಾಸಕ ಪ್ರಿಯಾಂಕ್ ಖರ್ಗೆ ದೂರು ಸಲ್ಲಿಸಿ, ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.
ರವಿವಾರ ತಡರಾತ್ರಿ ಇಲ್ಲಿನ ಸದಾಶಿವ ನಗರದಲ್ಲಿರುವ ನಿವಾಸಕ್ಕೆ ದೂರವಾಣಿ ಸಂಖ್ಯೆಗೆ ವ್ಯಕ್ತಿಯೊರ್ವ ಕರೆ ಮಾಡಿದ್ದು, ಮಲ್ಲಿಕಾರ್ಜುನ ಖರ್ಗೆ ಅವರು ಸ್ವೀಕರಿಸಿದ್ದಾರೆ. ಈ ಸಂದರ್ಭದಲ್ಲಿ ಹಿಂದಿ ಮತ್ತು ಆಂಗ್ಲ ಭಾಷೆಯಲ್ಲಿ ಮಾತನಾಡಿದ ವ್ಯಕ್ತಿ, ಆವಾಚ್ಯ ಶಬ್ದಗಳಿಂದ ನಿಂದಿಸಿ, ಜೀವ ಬೆದರಿಕೆ ಹಾಕಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಬಳಿಕ ಪ್ರಿಯಾಂಕ್ ಖರ್ಗೆ ಅವರ ಮೊಬೈಲ್ ಸಂಖ್ಯೆಗೂ ಕರೆ ಮಾಡಿದ ವ್ಯಕ್ತಿ, ಆವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ. ಈ ಸಂಬಂಧ ಸೂಕ್ತ ರೀತಿಯಲ್ಲಿ ತನಿಖೆ ನಡೆಸಿ, ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ದೂರಿನಲ್ಲಿ ಮನವಿ ಮಾಡಲಾಗಿದೆ.