ತಮಿಳುನಾಡು ಮುಖ್ಯ ಕಾರ್ಯದರ್ಶಿ ಜೊತೆ ಅರವಿಂದ ಜಾಧವ್ ಮಾತುಕತೆ
ತಮಿಳುನಾಡಿನಲ್ಲಿ ಕನ್ನಡಿಗರ ಮೇಲೆ ದೌರ್ಜನ್ಯ
ಬೆಂಗಳೂರು, ಸೆ.12: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಪಟ್ಟಂತೆ ತಮಿಳುನಾಡಿನಲ್ಲಿ ಕನ್ನಡಿಗರ ಮೇಲೆ ದೌರ್ಜನ್ಯ ನಡೆಯುತ್ತಿದ್ದು, ಕರ್ನಾಟಕದ ನೋಂದಣಿ ಸಂಖ್ಯೆಯ ವಾಹನಗಳ ಗಾಜುಗಳನ್ನು ಪುಡಿಗೈದಿರುವ ಘಟನೆಗಳು ಸಂಭವಿಸಿವೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ಮೇರೆಗೆ ತಮಿಳುನಾಡು ರಾಜ್ಯದ ಮುಖ್ಯ ಕಾರ್ಯದರ್ಶಿ ಜೊತೆ ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಅರವಿಂದ ಜಾಧವ್ ಮಾತುಕತೆ ನಡೆಸಿದ್ದಾರೆ.
ಇದೇ ಸಂದರ್ಭದಲ್ಲಿ ತಮಿಳುನಾಡಿನ ಪೊಲೀಸ್ ಮಹಾ ನಿರ್ದೇಶಕರೊಂದಿಗೆ ರಾಜ್ಯ ಡಿಜಿಪಿ ಓಂ ಪ್ರಕಾಶ್ ದೂರವಾಣಿ ಮೂಲಕ ಮಾತುಕತೆ ನಡೆಸಿದ್ದಾರೆ. ಬೆಂಗಳೂರಿನಲ್ಲಿ ತಮಿಳುನಾಡು ಯುವಕನ ಮೇಲೆ ಹಲ್ಲೆ ನಡೆಸಿದವರ ಮೇಲೆ ಎಫ್ಐಆರ್ ದಾಖಲಾಗಿದ್ದು, ಶೀಘ್ರವೇ ಆರೋಪಿಗಳನ್ನು ಬಂಧಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ ಎಂದು ತಿಳಿದುಬಂದಿದೆ.
ಇದಕ್ಕೆ ಪ್ರತಿಕ್ರಿಯಿಸಿದ ತಮಿಳುನಾಡು ಡಿಜಿಪಿ, ತಮಿಳುನಾಡಿನಲ್ಲಿ ಕನ್ನಡಿಗರ ಮೇಲೆ ಹಲ್ಲೆ ಮಾಡಿದವರ ಬಂಧನಕ್ಕೆ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ ಎನ್ನಲಾಗಿದೆ.