ಪ್ರಚೋದನಕಾರಿ ಭಾಷಣ ಆರೋಪ: ಕಲ್ಲಡ್ಕ ಭಟ್ ವಿಚಾರಣೆಗೆ ಹೈಕೋರ್ಟ್ ತಡೆ
ಬೆಂಗಳೂರು, ಆ.22: ಪ್ರಚೋದನಕಾರಿ ಭಾಷಣ ಮಾಡಿದ ಆರೋಪ ಸಂಬಂಧ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧದ ಬೆಳ್ತಂಗಡಿ ಸಿವಿಲ್ ಜೆಎಂಎಫ್ ನ್ಯಾಯಾಲಯದಲ್ಲಿನ ವಿಚಾರಣೆಗೆ ಹೈಕೋರ್ಟ್ ಮಂಗಳವಾರ ತಡೆಯಾಜ್ಞೆ ನೀಡಿದೆ.
ಈ ಪ್ರಕರಣ ಸಂಬಂಧ ತಮ್ಮ ವಿರುದ್ಧದ ಅಭಿಯೋಜನೆಗೆ ರಾಜ್ಯ ಗೃಹ ಇಲಾಖೆ ಕಾರ್ಯದರ್ಶಿ ನೀಡಿದ್ದ ಪೂರ್ವಾನುಮತಿ ಮತ್ತು ಬೆಳ್ತಂಗಡಿ ಸಿವಿಲ್ ಜೆಎಂಎಫ್ ನ್ಯಾಯಾಲಯದಲ್ಲಿ ನೀಡಿದ್ದ ಸಮನ್ಸ್ ರದ್ದು ಕೋರಿ ಡಾ.ಕಲ್ಲಡ್ಕ ಪ್ರಭಾಕರ್ ಭಟ್ ಹೈಕೋರ್ಟ್ಗೆ ಕ್ರಿಮಿನಲ್ ಅರ್ಜಿ ಸಲ್ಲಿಸಿದ್ದರು.
ಬುಧವಾರ ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅರವಿಂದ ಕುಮಾರ್ ಅವರಿದ್ದ ಏಕಸದಸ್ಯ ಪೀಠ, ಅರ್ಜಿಯ ಮುಂದಿನ ಆದೇಶದವರೆಗೆ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧದ ಬೆಳ್ತಂಗಡಿ ಸಿವಿಲ್ ಜೆಎಂಎಫ್ ನ್ಯಾಯಾಲಯದ ವಿಚಾರಣೆಗೆ ತಡೆಯಾಜ್ಞೆ ನೀಡಿತು. ಅಲ್ಲದೆ, ರಾಜ್ಯ ಗೃಹ ಇಲಾಖೆ ಕಾರ್ಯದರ್ಶಿ, ಅಧೀನ ಕಾರ್ಯದರ್ಶಿ ಮತ್ತು ಬಂಟ್ವಾಳ ಟೌನ್ ಠಾಣೆಯ ಪೊಲೀಸ್ ಸಬ್ ಇನ್ಸ್ಸ್ಪೆಕ್ಟರ್ಗೆ ನೋಟಿಸ್ ಜಾರಿ ಮಾಡಿ ವಿಚಾರಣೆ ಮುಂದೂಡಿತು. ಇದರೊಂದಿಗೆ ಕೋಮು ಪ್ರಚೋದನಕಾರಿ ಭಾಷಣ ಮಾಡಿದ ಆರೋಪ ಸಂಬಂಧ ಡಾ.ಕಲ್ಲಡ್ಕ ಭಟ್ ವಿರುದ್ಧದ ಪ್ರತ್ಯೇಕ ನಾಲ್ಕು ದೂರುಗಳ ಕುರಿತ ಅಧೀನ ನ್ಯಾಯಾಲಯದ ವಿಚಾರಣೆಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದಂತಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ ಹಿಂದೂ ಹಿತರಕ್ಷಣಾ ವೇದಿಕೆ 2014ರ ಫೆ.26ರಂದು ಆಯೋಜಿಸಿದ್ದ ತರುಣ ಸಮಾವೇಶ ಮತ್ತು ಭಾರತ ಮಾತಾ ಪೂಜನ ಉತ್ಸವದಲ್ಲಿ ಕೋಮು ಪ್ರಚೋದನಕಾರಿ ಭಾಷಣ ಮಾಡಿದ ಆರೋಪ ಸಂಬಂಧ ಬಂಟ್ವಾಳ ಟೌನ್ ಪೊಲೀಸರು ಆರೆಸ್ಸೆಸ್ ಮುಖಂಡ ಡಾ.ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ದೂರು ದಾಖಲಿಸಿದ್ದರು.
ಪ್ರಕರಣ ಸಂಬಂಧ ದೋಷಾರೋಪ ಪಟ್ಟಿ ಸಲ್ಲಿಸಲು ಗೃಹ ಇಲಾಖೆ ಕಾರ್ಯದರ್ಶಿ ಮತ್ತು ಅಧೀನ ಕಾರ್ಯದರ್ಶಿ 2017ರ ಮಾ.10ರಂದು ಪೂರ್ವಾನುಮತಿ ನೀಡಿದ್ದರು. ಪೂರ್ವಾನುಮತಿಯೊಂದಿಗೆ ಮಾರ್ಚ್ 10ರಂದು ಪೊಲೀಸರು ಪ್ರಭಾಕರ್ ಭಟ್ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಬೆಳ್ತಂಗಡಿ ಸಿವಿಲ್ ಜೆಎಂಎಫ್ ನ್ಯಾಯಾಲಯದಲ್ಲಿನ ವಿಚಾರಣೆಗೆ ಹಾಜರಾಗಲು ಸೂಚಿಸಿ ಜುಲೈ 12ರಂದು ಸಮನ್ಸ್ ಜಾರಿ ಮಾಡಿತ್ತು. ಅರ್ಜಿದಾರರ ಪರ ಅರುಣ್ ಶ್ಯಾಮ್ ವಾದ ಮಂಡಿಸಿದರು.