ರಾಜ್ಯದಲ್ಲಿ ಮೀಸಲಾತಿ ಪ್ರಮಾಣ ಶೇ.70ಕ್ಕೆ ಹೆಚ್ಚಿಸಲು ಚಿಂತನೆ:ಮುಖ್ಯಮಂತ್ರಿ
ಬೆಂಗಳೂರು, ಅ.5: ರಾಜ್ಯದಲ್ಲಿ ಈಗಾಗಲೇ ಆರ್ಥಿಕ ಮತ್ತು ಸಾಮಾಜಿಕ ಸಮೀಕ್ಷೆ ನಡೆಸಲಾಗಿದ್ದು, ವರದಿ ಬಂದ ಬಳಿಕ ರಾಜ್ಯದಲ್ಲಿ ಹಾಲಿ ಇರುವ ಮೀಸಲಾತಿಯನ್ನು ಶೇ.50 ರಿಂದ 70ಕ್ಕೆ ಹೆಚ್ಚಿಸುವ ಸಂಬಂಧ ಸರಕಾರ ಗಂಭೀರ ಚಿಂತನೆ ನಡೆಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಗುರುವಾರ ವಿಧಾನಸೌಧದ ಮುಂಭಾಗದಲ್ಲಿ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಯೋಜಿಸಿದ್ದ ರಾಜ್ಯಮಟ್ಟದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತ್ಯುತ್ಸವವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ತಮಿಳುನಾಡು ಮಾದರಿಯಲ್ಲಿ ರಾಜ್ಯದಲ್ಲೂ ಮೀಸಲಾತಿ ಹೆಚ್ಚಿಸಬೇಕೆಂಬ ಗುರಿ ಹೊಂದಲಾಗಿದೆ. ರಾಜ್ಯದಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗದ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಸಿಕ್ಕಿಲ್ಲ. ಅದಕ್ಕೆ ಹಲವಾರು ಕಾರಣಗಳಿವೆ ಎಂದು ಅವರು ಹೇಳಿದರು.
ಪರಿಶಿಷ್ಟ ಪಂಗಡದವರಿಗೆ ಶೇ.7.5ರಷ್ಟು ಹಾಗೂ ಪರಿಶಿಷ್ಟ ಜಾತಿಗೆ ಶೇ.17ರಷ್ಟು ಮೀಸಲಾತಿ ತರಲು ನಮ್ಮ ಸರಕಾರ ಯೋಚಿಸಿದೆ. ನಮ್ಮ ಸರಕಾರ ಅಧಿಕಾರಕ್ಕೆ ಬಂದ ಮೇಲೆ ಪರಿಶಿಷ್ಟ ವರ್ಗದವರ ಅಭಿವೃದ್ಧಿಗಾಗಿ ಈಗಾಗಲೇ 25 ಸಾವಿರ ಕೋಟಿ ರೂ.ಗಳನ್ನು ಖರ್ಚು ಮಾಡಲಾಗಿದ್ದು, ಈ ವರ್ಷ 7 ಸಾವಿರ ಕೋಟಿ ರೂ.ಗಳನ್ನು ಮೀಸಲಿರಿಸಲಾಗಿದೆ ಎಂದು ಮುಖ್ಯಮಂತ್ರಿ ತಿಳಿಸಿದರು.
ನಮ್ಮ ಸರಕಾರ ಎಸ್ಸಿ-ಎಸ್ಟಿ, ಅಲ್ಪಸಂಖ್ಯಾತರು, ರೈತರು, ಮಹಿಳೆಯರು ಹಾಗೂ ಕಾರ್ಮಿಕ ವರ್ಗಗಳ ಹಿತ ಕಾಪಾಡುವಲ್ಲಿ ಹೆಚ್ಚಿನ ಆದ್ಯತೆ ನೀಡಿ ಕೆಲಸ ಮಾಡುತ್ತಿದೆ. ವಾಸಿಸುವವನೆ ಮನೆಯ ಒಡೆಯ ಕಾನೂನನ್ನು ಈಗಾಗಲೆ ಜಾರಿಗೆ ತರಲಾಗಿದೆ ಎಂದು ಅವರು ಹೇಳಿದರು.