ಫರಂಗಿಪೇಟೆಯಲ್ಲಿ ರಸ್ತೆ ಅಪಘಾತ: ದ್ವಿಚಕ್ರ ವಾಹನ ಸವಾರನಿಗೆ ಗಾಯ
ಬಂಟ್ವಾಳ, ಮೇ 28: ಕಾರೊಂದು ಎರಡು ದ್ವಿಚಕ್ರ ವಾಹನಗಳಿಗೆ ಢಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನವೊಂದರ ಸವಾರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಫರಂಗಿಪೇಟೆ ಸಮೀಪದ ಪೆಟ್ರೋಲ್ ಬಂಕ್ ಬಳಿ ಸೋಮವಾರ ಬೆಳಗ್ಗೆ ಸಂಭವಿಸಿದೆ.
ಗಾಯಾಳುವನ್ನು ವಾಮಂಜೂರಿನ ತಿಲಕ್ ಎಂದು ಗುರುತಿಸಲಾಗಿದೆ. ತಿಲಕ್ ಅವರು ದ್ವಿಚಕ್ರ ವಾಹನದಲ್ಲಿ ಮಂಗಳೂರು ಕಡೆಗೆ ತೆರಳುತ್ತಿದ್ದ ಸಂದರ್ಭ ವಿರುದ್ಧ ದಿಕ್ಕಿನಿಂದ ಬಂದ ಕಾರು ನಿಯಂತ್ರಣ ತಪ್ಪಿ ಢಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ ಎಂದು ಹೇಳಲಾಗಿದೆ. ಈ ವೇಳೆ ರಸ್ತೆಗೆಸೆಯಲ್ಪಟ್ಟ ತಿಲಕ್ ಅವರ ಕಾಲಿಗೆ ಗಾಯಗಳಾಗಿದ್ದು, ತುಂಬೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನೊಂದು ದ್ವಿಚಕ್ರ ಸವಾರನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರ ಬಗ್ಗೆ ಹೆಚ್ಚಿನ ವಿವರ ತಿಳಿದುಬಂದಿಲ್ಲ.
ಅಪಘಾತದಿಂದ ದ್ವಿಚಕ್ರ ವಾಹನ ಸಂಪೂರ್ಣ ಜಖಂಗೊಂಡಿದ್ದರೆ, ಕಾರಿನ ಮುಂಭಾಗವು ಜಖಂಗೊಂಡಿದೆ.
Next Story