ಉಡುಪಿ: ಹಿರಿಯ ನಾಗರಿಕರಿಗೆ ಸಾಂಸ್ಕೃತಿಕ, ಕ್ರೀಡಾ ಸ್ಪರ್ಧೆ
ಉಡುಪಿ, ಸೆ.15: ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಅಂಗವಾಗಿ ಜಿಲ್ಲೆಯ ಹಿರಿಯ ನಾಗರಿಕರಿಗೆ ಇಲಾಖೆಯಿಂದ ವಿವಿಧ ಸಾಂಸ್ಕೃತಿಕ ಮತ್ತು ಕ್ರೀಡಾ ಸ್ಪರ್ಧೆಗಳನ್ನು ಅಜ್ಜರಕಾಡಿನಲ್ಲಿರುವ ಜಿಲ್ಲಾ ರೆಡ್ಕ್ರಾಸ್ ಭವದಲ್ಲಿ ಇತ್ತೀಚೆಗೆ ಏರ್ಪಡಿಸಲಾಗಿತ್ತು.
ತೀರ್ಪುಗಾರರಿಗೆ ಕ್ರೀಡಾ ಸಾಮಾಗ್ರಿಗಳನ್ನು ವಿತರಿಸುವ ಮೂಲಕ ಭಾರತೀಯ ರೆಡ್ಕ್ರಾಸ್ ಸಂಸ್ಥೆಯ ರಾಜ್ಯ ಅಧ್ಯಕ್ಷ ಬಸ್ರೂರು ರಾಜೀವ ಶೆಟ್ಟಿ ಸ್ಪರ್ಧೆಗಳನ್ನು ಉದ್ಘಾಟಿಸಿದರು. ಜಿಲ್ಲಾ ವಿಕಲಚೇತನ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ನಿರಂಜನ್ ಭಟ್ ಭಾಗವಹಿಸಿದ ಅತಿಥಿಗಳು ಮತ್ತು ಹಿರಿಯ ನಾಗರಿಕರನ್ನು ಸ್ವಾಗತಿಸಿದರು.
ವಿವಿಧ ಸಾಂಸ್ಕೃತಿಕ ಮತ್ತು ಕ್ರೀಡಾ ಸ್ಪರ್ಧೆಗಳಲ್ಲಿ ಸುಮಾರು 125 ಹಿರಿಯ ನಾಗರಿಕರು ಉತ್ಸಾಹದಿಂದ ಭಾಗವಹಿಸಿದ್ದರು. ಇವರಲ್ಲಿ 15 ಮಂದಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟದಲ್ಲಿ ಬೆಂಗಳೂರಿನಲ್ಲಿ ನಡೆಯುವ ಸ್ಪರ್ಧೆಗೆ ಆಯ್ಕೆಯಾದರು.
ಮೊದಲ ಮೂರು ಸ್ಥಾನಗಳನ್ನು ಪಡೆದ ಹಿರಿಯ ನಾಗರಿಕರಿಗೆ ಅ.1ರಂದು ಜಿಲ್ಲಾ ಮಟ್ಟದಲ್ಲಿ ನಡೆಯುವ ವಿಶ್ವ ಹಿರಿಯ ನಾಗರಿಕರ ದಿನಾಚರಣೆಯಂದು ಬಹುಮಾನ ನೀಡಿ ಗೌರವಿಸಲಾಗುವುದು ಎಂದು ಜಿಲ್ಲಾ ವಿಕಲಚೇತನರ ಸಬಲೀಕರಣ ಅಧಿಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.