ಅಂತರ್ ಕಾಲೇಜು ಪುರುಷರ ಕಬಡ್ಡಿ ಪಂದ್ಯಕೂಟಕ್ಕೆ ಚಾಲನೆ
ಉಡುಪಿ, ಜ.15: ಉಡುಪಿ ಜಿಲ್ಲಾಡಳಿತ, ಜಿಪಂ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಅಜ್ಜರಕಾಡು ಜಿ.ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರಗಳ ಸಂಯುಕ್ತ ಆಶ್ರಯದಲ್ಲಿ ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆ ಅಂಗವಾಗಿ ಉಡುಪಿ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾದ ಅಂತರ್ ಕಾಲೇಜು ಮಟ್ಟದ ಪುರುಷರ ಕಬಡ್ಡಿ ಪಂದ್ಯಕೂಟಕ್ಕೆ ಇಂದು ಸಂಜೆ ಚಾಲನೆ ನೀಡಲಾಯಿತು.
ಕ್ರೀಡಾಕೂಟವನ್ನು ಉದ್ಘಾಟಿಸಿದ ಉಡುಪಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ದಿನಕರ ಬಾಬು ಮಾತನಾಡಿ, ಜಿಪಂ ವತಿಯಿಂದ ಕ್ರೀಡೆಗೆ ಹೆಚ್ಚಿನ ಪ್ರೋತ್ಸಾಹ ನೀಡಲಾಗುತ್ತಿದೆ. ಯುವಕರಲ್ಲಿ ಕ್ರೀಡಾ ಸ್ಪೂರ್ತಿ ಬೆಳೆಯಬೇಕು. ಆ ಮೂಲಕ ತಮ್ಮ ದೈಹಿಕ ಕ್ಷಮತೆಯನ್ನು ಹೆಚ್ಚಿಸಬೇಕು ಎಂದು ಹೇಳಿದರು.
ಉಡುಪಿ ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಶನ್ ಅಧ್ಯಕ್ಷ ರಾಜೇಂದ್ರ ಸುವರ್ಣ ಮಾತನಾಡಿ, ಕರ್ನಾಟಕದಲ್ಲಿ ಕಬಡ್ಡಿಗೆ ಉತ್ತಮ ಪ್ರೋತ್ಸಾಹ ದೊರೆ ಯುತ್ತಿದ್ದು, ಹೆಚ್ಚು ಹೆಚ್ಚು ಕ್ರೀಡಾಪಟುಗಳು ಬರುತ್ತಿದ್ದಾರೆ. ದೃಢಕಾಯ ಹಾಗೂ ದೈಹಿಕ ಕ್ಷಮತೆ ಇರುವ ಯುವಕರು ಮುಂದೆ ಬಂದರೆ ಅವರಿಗೆ ಸೂಕ್ತ ತರಬೇತಿ ನೀಡಿ ಕಬಡ್ಡಿ ಕ್ರೀಡಾಪಟುಗಳಾಗಿ ಸಿದ್ಧಪಡಿಸಲಾಗುವುದು ಎಂದರು.
ಮುಖ್ಯ ಅತಿಥಿಗಳಾಗಿ ದ.ಕ. ಮತ್ತು ಉಡುಪಿ ಜಿಲ್ಲಾ ಮೀನು ಮಾರಾಟ ಮಹಾಮಂಡಲದ ಅಧ್ಯಕ್ಷ ಯಶ್ಪಾಲ್ ಸುವರ್ಣ, ಮಹಿಳಾ ಕಾಲೇಜಿನ ಪ್ರಾಂಶುಪಾಲ ಡಾ.ಭಾಸ್ಕರ್ ಶೆಟ್ಟಿ ಕೆ., ಮಂಗಳೂರು ವಿವಿ ದೈಹಿಕ ಶಿಕ್ಷಣ ನಿರ್ದೇಶಕರ ಸಂಘದ ಅಧ್ಯಕ್ಷ ಅಧ್ಯಕ್ಷ ವೇಣುಗೋಪಾಲ ನೊಂಡ ಉಪಸ್ಥಿತ ರಿದ್ದರು.
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ.ರೋಶನ್ ಕುಮಾರ್ ಶೆಟ್ಟಿ ಸ್ವಾಗತಿಸಿದರು. ಪ್ರಶಾಂತ್ ಶೆಟ್ಟಿ ಹಾವಂಜೆ ಕಾರ್ಯಕ್ರಮ ನಿರೂಪಿಸಿದರು. ಈ ಪಂದ್ಯಾಟದಲ್ಲಿ ಅವಿಭಜಿತ ದ.ಕ. ಜಿಲ್ಲೆ ಗಳ ಒಟ್ಟು 24 ಕಾಲೇಜು ತಂಡಗಳು ಭಾಗವಹಿಸಿವೆ.