ಕಟ್ಟಡ ಕಾರ್ಮಿಕರ ಮಕ್ಕಳಿಗೆ ಉಚಿತ ಪುಸ್ತಕ ವಿತರಣೆ
ಗಂಗೊಳ್ಳಿ, ಜೂ.9: ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘ ಗಂಗೊಳ್ಳಿ ಘಟಕ ಮತ್ತು ಉಡುಪಿ ಜನಸೇವಾ ಕ್ರೆಡಿಟ್ ಸೌಹಾರ್ದ ಸಹಕಾರಿ ಆಶ್ರಯದಲ್ಲಿ ಕಟ್ಪಡ ಕಾರ್ಮಿಕರ ನೂರಾರು ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ ಹಾಗು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ ಸಮಾರಂಭವನ್ನು ಗಂಗೊಳ್ಳಿ ಶಾರದ ಮಂಟಪದಲ್ಲಿ ರವಿವಾರ ಆಯೋಜಿಸಲಾಗಿತ್ತು.
ಸಮಾರಂಭವನ್ನು ಉದ್ಘಾಟಿಸಿದ ಸಿಐಟಿಯು ಜಿಲ್ಲಾ ಕಾರ್ಯದರ್ಶಿ ಕೆ. ಶಂಕರ್ ಮಾತನಾಡಿ, ಕಾರ್ಮಿಕ ಸಂಘಟನೆಯಾಗಿ ಶಿಕ್ಷಣ ಪ್ರೇಮಿ ಸಂಘ ಸಂಸ್ಥೆಗಳ ಜೊತೆ ಶಿಕ್ಷಣಕ್ಕೆ ಪ್ರೊತ್ಸಾಹ ಮಾಡುವ ನಿಟ್ಟಿನಲ್ಲಿ ಕಳೆದ 4 ವರ್ಷಗಳಿಂದ ಊರಿನ ವಿದ್ಯಾರ್ಥಿಗಳಿಗೆ ಸಹಕಾರ ನೀಡುತ್ತಿರುವುದು ಶ್ಲಾಘನೀಯ ಕಾರ್ಯ ಎಂದು ಹೇಳಿದರು.
ಮುಖ್ಯ ಅತಿಥಿಗಳಾಗಿ ಶರ್ಮಿಳಾ ಸತೀಶ್ ಜಿ., ಕುಂದಾಪುರ ತಾಲೂಕು ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘದ ಪ್ರಧಾನ ಕಾರ್ಯದರ್ಶಿ ಸುರೇಶ್ ಕಲ್ಲಾಗರ, ಸಂಘದ ಪ್ರಮುಖರಾದ ಸಾವಿತ್ರಿ ಹೆಮ್ಮಾಡಿ, ಬೈಂದೂರು ಕಟ್ಟಡ ಕಾರ್ಮಿಕರ ಸಂಘದ ಮುಖಂಡ ಗಣೇಶ್ ಮೊಗವೀರ ಕುಂದಾಪುರ ಸಂಘದ ಉಪಾಧ್ಯಕ್ಷ ಚಿಕ್ಕ ಮೊಗವೀರ ಮಾತನಾಡಿದರು.
ಅಧ್ಯಕ್ಷತೆಯನ್ನು ಶಾರದೋತ್ಸವ ಸಮಿತಿ ಅಧ್ಯಕ್ಷ ಶ್ರೀಧರ ಎನ್.ಸಕ್ಲಾತಿ ವಹಿಸಿದ್ದರು. ಈ ಸಂದರ್ಭದಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿ ಗಳನ್ನು ಸನ್ಮಾನಿಸಲಾಯಿತು. ಕುಂದಾಪುರ ಕಟ್ಟಡ ಕಾರ್ಮಿಕರ ಸಂಘದ ಕಾರ್ಯದರ್ಶಿ ಅರುಣ್ ಕುಮಾರ್ ಗಂಗೊಳ್ಳಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಿವಾನಂದ ಸ್ವಾತಿಸಿದರು. ಅಭಿನಂದನ್ ವಂದಿಸಿದರು.