ಚಿಕ್ಕಮಗಳೂರು: ಉರುಳಿಬಿದ್ದ ಕಾರು; ಇಬ್ಬರು ಯುವಕರು ಮೃತ್ಯು, ಇನ್ನಿಬ್ಬರು ಗಂಭೀರ
ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಬರುತ್ತಿದ್ದ ವೇಳೆ ಸಂಭವಿಸಿದ ಅಪಘಾತ
ಚಿಕ್ಕಮಗಳೂರು, ಜೂ.27: ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಉರುಳಿಬಿದ್ದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ತಾಲೂಕಿನ ಕರ್ತಿಕೆರೆ ಎಂಬಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದೆ.
ಮೃತರನ್ನು ಬೆಂಗಳೂರು ಮೂಲದ ಮಂಜುನಾಥ್(30) ಮತ್ತು ಮುತ್ತುರಾಜ್ (28) ಎಂದು ಗುರುತಿಸಲಾಗಿದೆ. ಇನ್ನಿಬ್ಬರು ಗಂಭೀರ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಮಂಜುನಾಥ್, ಮುತ್ತುರಾಜ್ ಸೇರಿದಂತೆ ನಾಲ್ವರು ಕಾರಿನಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆಂದು ಬೆಂಗಳೂರಿನಿಂದ ಹೊರಟಿದ್ದರೆನ್ನಲಾಗಿದೆ. ಇವರಿದ್ದ ಕಾರು ಚಿಕ್ಕಮಗಳೂರು ತಾಲೂಕಿನ ಕರ್ತಿಕೆರೆ ಗ್ರಾಮದ ಬಳಿ ತಲುಪಿದಾಗ ಚಾಲಕನ ನಿಯಂತ್ರಣ ತಪ್ಪಿ ಉರುಳಿಬಿತ್ತೆನ್ನಲಾಗಿದೆ. ಇದರಿಂದ ಗಂಭೀರ ಗಾಯಗೊಂಡ ಇಬ್ಬರು ಸ್ಥಳದಲ್ಲೇ ಕೊನೆಯುಸಿರೆಳೆದರೆ, ಇನ್ನಿಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.
ಈ ಬಗ್ಗೆ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story