ಉಡುಪಿ: 282 ಮಂದಿಗೆ ಕೊರೋನ ಪಾಸಿಟಿವ್; 6 ಸಾವಿರ ಗಡಿ ದಾಟಿದ ಸೋಂಕಿತರ ಸಂಖ್ಯೆ
ಉಡುಪಿ, ಆ.9: ನೋವೆಲ್ ಕೊರೋನ ವೈರಸ್ ಸೋಂಕಿನಲ್ಲಿ ಜಿಲ್ಲೆ ರವಿವಾರ ಇನ್ನೊಂದು ಮೈಲಿಗಲ್ಲನ್ನು ದಾಟಿದೆ. ಇಂದು ಒಟ್ಟು 282 ಮಂದಿಯಲ್ಲಿ ಪಾಸಿಟಿವ್ ಕಾಣಿಸಿಕೊಂಡಿದ್ದು, ಈ ಮೂಲಕ ಉಡುಪಿ ಜಿಲ್ಲೆಯಲ್ಲಿ ಕೋವಿಡ್-19 ಸೋಂಕಿಗೆ ಪಾಸಿಟಿವ್ ಬಂದವರ ಸಂಖ್ಯೆ 6,000 ವನ್ನು ದಾಟಿದೆ. ಆದರೂ ದಿನದಲ್ಲಿ 1,343 ಮಂದಿಯ ಗಂಟಲು ದ್ರವ ಮಾದರಿ ಪರೀಕ್ಷಾ ವರದಿಗಳು ನೆಗೆಟಿವ್ ಫಲಿತಾಂಶ ನೀಡಿವೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸುಧೀರ್ ಚಂದ್ರ ಸೂಡ ತಿಳಿಸಿದ್ದಾರೆ.
ಇಂದು ಕೊರೋನ ಸೋಂಕು ಪತ್ತೆಯಾದ 282 ಮಂದಿಯಲ್ಲಿ ಉಡುಪಿ ತಾಲೂಕಿನ 152 ಮಂದಿ, ಕುಂದಾಪುರ ತಾಲೂಕಿನ 86 ಹಾಗೂ ಕಾರ್ಕಳ ತಾಲೂಕಿನ 43 ಮಂದಿ ಸೇರಿದ್ದಾರೆ. ಉಳಿದ ಒಬ್ಬರು ಹೊರಜಿಲ್ಲೆಯವರಾಗಿದ್ದು, ಜಿಲ್ಲೆಯಲ್ಲಿ ಚಿಕಿತ್ಸೆಗೆ ಬಂದು ಪಾಸಿಟಿವ್ ಆಗಿದ್ದಾರೆ. ಮಕ್ಕಳು ಸೇರಿದಂತೆ 147 ಮಂದಿ ಪುರುಷರು ಹಾಗೂ 135 ಮಂದಿ ಮಹಿಳೆಯರಲ್ಲಿ ಸೋಂಕು ಕಂಡು ಬಂದಿದೆ. ಇವರಲ್ಲಿ 99 ಪುರುಷರು ಹಾಗೂ 106 ಮಹಿಳೆಯರಲ್ಲಿ ರೋಗದ ಲಕ್ಷಣಗಳು ಕಂಡುಬಂದಿಲ್ಲ. ಇಂದಿನ 282 ಪಾಸಿಟಿವ್ ಪ್ರಕರಣಗಳೊಂದಿಗೆ ಜಿಲ್ಲೆಯಲ್ಲಿ ಇದುವರೆಗೆ ಸೋಂಕು ಪತ್ತೆಯಾದವರ ಸಂಖ್ಯೆ 6,201ಕ್ಕೇರಿದೆ ಎಂದು ಡಾ.ಸೂಡ ತಿಳಿಸಿದರು.
ಇಂದು ಕೊರೋನ ಪಾಸಿಟಿವ್ ದೃಢಗೊಂಡ 282 ಮಂದಿಯಲ್ಲಿ 132 ಮಂದಿ ಪಾಸಿಟಿವ್ ಬಂದವರ ಸಂಪರ್ಕದಿಂದ, 69 ಮಂದಿ ಶೀತಜ್ವರ ದಿಂದ, 6 ಮಂದಿ ಉಸಿರಾಟ ತೊಂದರೆಯಿಂದ ಬಳಲುತಿದ್ದು ಅವರಲ್ಲಿ ಸೋಂಕು ಕಾಣಿಸಿಕೊಂಡಿದೆ. ಆರು ಮಂದಿ ದೇಶೀಯ ಹಾಗೂ ಮೂವರು ವಿದೇಶಗಳ ಪ್ರವಾಸದಿಂದ ಮರಳಿದ್ದು, ಪಾಸಿಟಿವ್ ಕಾಣಿಸಿಕೊಂಡಿದೆ. 66 ಮಂದಿಯ ಸೋಂಕಿನ ಸಂರ್ಕ ಇನ್ನೂ ತನಿಖೆಯಲ್ಲಿದೆ ಎಂದರು.
97 ಮಂದಿ ಗುಣಮುಖ: ಜಿಲ್ಲೆಯಲ್ಲಿ ರವಿವಾರ ಒಟ್ಟು 97 ಮಂದಿ ಚಿಕಿತ್ಸೆಯ ಬಳಿಕ ಚೇತರಿಸಿಕೊಂಡು ಬಿಡುಗಡೆಗೊಂಡಿದ್ದಾರೆ. ಇವರಲ್ಲಿ 48 ಮಂದಿ ಕೋವಿಡ್ ಆಸ್ಪತ್ರೆಗಳಿಂದ, 49 ಮಂದಿ ಹೋಮ್ ಐಸೋಲೇಷನ್ ನಲ್ಲಿದ್ದು ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ. ಇದರಿಂದ ಜಿಲ್ಲೆಯಲ್ಲಿ ಈವರೆಗೆ ಸೋಂಕಿನಿಂದ ಗುಣಮುಖರಾಗಿ ಬಿಡುಗಡೆಯಾದವರ ಸಂಖ್ಯೆ 3,444ಕ್ಕೇರಿದೆ. ಈಗಾಗಲೇ ಪಾಸಿಟಿವ್ ಬಂದ 2,697 ಮಂದಿ ಚಿಕಿತ್ಸೆಯಲ್ಲಿದ್ದು, ಇವರಲ್ಲಿ 1412 ಮಂದಿ ವಿವಿಧ ಆಸ್ಪತ್ರೆಗಳಲ್ಲಿ ಹಾಗೂ 1285 ಹೋಮ್ ಐಸೋಲೇಷನ್ನಲ್ಲಿ ಚಿಕಿತ್ಸೆ ಪಡೆಯುತಿದ್ದಾರೆ ಎಂದು ಡಿಎಚ್ಓ ಹೇಳಿದರು.
1,383 ಸ್ಯಾಂಪಲ್ ಸಂಗ್ರಹ: ಸೋಂಕಿನ ಪರೀಕ್ಷೆಗಾಗಿ ಇಂದು 1383 ಮಂದಿಯ ಗಂಟಲುದ್ರವದ ಸ್ಯಾಂಪಲ್ಗಳನ್ನು ಪಡೆಯಲಾಗಿದೆ. ಇದರಲ್ಲಿ ಕೋವಿಡ್ ಶಂಕಿತರು 929 ಮಂದಿ, ಕೋವಿಡ್ ಸಂಪರ್ಕಿತರು 175 ಮಂದಿ ಇದ್ದರೆ, ಉಸಿರಾಟ ತೊಂದರೆಯ ನಾಲ್ವರು, ಶೀತಜ್ವರ ದಿಂದ ಬಳಲುವ 45 ಮಂದಿ ಹಾಗೂ ವಿವಿಧ ಕೋವಿಡ್ ಹಾಟ್ಸ್ಪಾಟ್ಗಳಿಂದ ಆಗಮಿಸಿದ 230 ಮಂದಿಯ ಸ್ಯಾಂಪಲ್ಗಳು ಸೇರಿವೆ ಎಂದು ಡಾ.ಸೂಡ ತಿಳಿಸಿದರು.
ಇಂದು ಪಡೆದ 1383 ಸ್ಯಾಂಪಲ್ಗಳೊಂದಿಗೆ ಜಿಲ್ಲೆಯಲ್ಲಿ ಈವರೆಗೆ ಸಂಗ್ರಹಿಸಿದ ಮಾದರಿಗಳ ಒಟ್ಟು ಸಂಖ್ಯೆ 44,824ಕ್ಕೇರಿದೆ. ಇವುಗಳಲ್ಲಿ ಈವರೆಗೆ 37,325 ನೆಗೆಟಿವ್, 6201 ಪಾಸಿಟಿವ್ ಬಂದಿವೆ. ಜಿಲ್ಲೆಯಲ್ಲಿ ಈವರೆಗೆ 60 ಮಂದಿ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದಾರೆ. ಇನ್ನು ಒಟ್ಟು 1298 ಸ್ಯಾಂಪಲ್ಗಳ ಪರೀಕ್ಷಾ ವರದಿ ಬರಬೇಕಿದೆ ಎಂದು ಡಾ.ಸೂಡ ವಿವರಿಸಿದರು.
ಜಿಲ್ಲೆಯಲ್ಲಿ ರವಿವಾರ 282 ಮಂದಿಯನ್ನು ಆಸ್ಪತ್ರೆಗಳ ಐಸೋಲೇಷನ್ ವಾರ್ಡ್ಗೆ ದಾಖಲಿಸಲಾಗಿದೆ.ಇವರಲ್ಲಿ ಒಟ್ಟು 173 ಮಂದಿ ವಿವಿಧ ಕೋವಿಡ್ ಆಸ್ಪತ್ರೆಗಳಲ್ಲಿ ಹಾಗೂ 109 ಮಂದಿ ಹೋಮ್ ಐಸೋಲೇಷನ್ನಲ್ಲಿ ಇದ್ದಾರೆ. ಜಿಲ್ಲೆಯಲ್ಲಿ ಈಗ ಒಟ್ಟು 1705 ಮಂದಿ ಹೋಮ್ ಐಸೋಲೇಷನ್ ಚಿಕಿತ್ಸೆಯಲ್ಲಿ ದ್ದಾರೆ ಎಂದು ಅವರು ಹೇಳಿದರು.
ಕೋವಿಡ್ಗೆ 14ರ ಬಾಲಕ ಬಲಿ
ಉಡುಪಿ ಜಿಲ್ಲೆಯಲ್ಲಿ ಇದೇ ಮೊದಲ ಬಾರಿ 14 ವರ್ಷ ಪ್ರಾಯದ ಬಾಲಕನೊಬ್ಬ ಕೋವಿಡ್-19 ಸೋಂಕಿನೊಂದಿಗೆ ಮೃತಪಟ್ಟಿದ್ದಾರೆ. ಬೇರೆ, ಬೇರೆ ಸಮಸ್ಯೆಗಳ ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದ ಕಿರಿಮಂಜೇಶ್ವರದ ಈ ಬಾಲಕನಲ್ಲಿ ಕೊರೋನ ಸೋಂಕು ಸಹ ಪತ್ತೆಯಾಗಿತ್ತು. ಇದರಿಂದ ಚಿಕಿತ್ಸೆ ಫಲಕಾರಿಯಾಗದೇ ಆತ ಮೃತಪಟ್ಟನೆಂದು ತಿಳಿದುಬಂದಿದೆ.
ಇದರೊಂದಿಗೆ ಮಣಿಪಾಲ ಕೆಎಂಸಿಯಲ್ಲಿ ಶಿವಮೊಗ್ಗ, ಬೆಂಗಳೂರು ಹಾಗೂ ಕೇರಳದಿಂದ ಆಗಮಿಸಿದ ರೋಗಿಗಳೂ ಕೊರೋನ ಪಾಸಿಟಿವ್ ನೊಂದಿಗೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.