ಪರಿಹಾರ ವಿತರಣೆಗೆ ಹಣದ ಕೊರತೆ ಇಲ್ಲ: ಸಚಿವ ಆರ್.ವಿ.ದೇಶಪಾಂಡೆ
ಮೈಸೂರು,ಜೂ.18: ರಾಜ್ಯದ ಎಲ್ಲಾ ಕಡೆಗಳಲ್ಲಿ ಉತ್ತಮ ಮಳೆಯಾಗುತ್ತಿದ್ದು, ಮಳೆ ಹಾನಿಗೊಳಗಾದವರಿಗೆ ಪರಿಹಾರ ನೀಡಲು ಹಣದ ಕೊರತೆ ಇಲ್ಲ ಎಂದು ಕಂದಾಯ ಸಚಿವ ಆರ್.ವಿ.ದೇಶಪಾಂಡೆ ತಿಳಿಸಿದರು.
ನಗರದ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಮಠಕ್ಕೆ ಸೋಮವಾರ ಭೇಟಿ ನೀಡಿ ಶ್ರೀಗಳ ಜೊತೆ ಸುಧೀರ್ಘ ಮಾತುಕತೆ ನಡೆಸಿ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.
ಬೆಂಗಳೂರು ಗ್ರಾಮೀಣ ಭಾಗದಲ್ಲಿ ಕಡಿಮೆ ಮಳೆಯಾಗಿರುವುದು ಬಿಟ್ಟರೆ ರಾಜ್ಯದ ಬಹುತೇಕ ಎಲ್ಲಾ ಕಡೆಗಳಲ್ಲಿ ಹೆಚ್ಚು ಮಳೆಯಾಗಿದೆ. ರಾಜ್ಯದ ಪ್ರತಿಯೊಂದು ಜಿಲ್ಲಾಧಿಕಾರಿಗಳ ಖಾತೆಯಲ್ಲಿ ಪರಿಹಾರಕ್ಕೆ 5 ಕೋಟಿ ರೂ. ಹಣ ಮೀಸಲಿಡಲಾಗಿದೆ. ಹಣಕ್ಕೆ ಯಾವುದೇ ರೀತಿಯ ತೊಂದರೆ ಇಲ್ಲ ಎಂದು ಹೇಳಿದರು.
ಜಿಲ್ಲಾಧಿಕಾರಿಗಳು ವಾರದಲ್ಲಿ ಒಮ್ಮೆ ಸಂಬಂಧಪಟ್ಟ ಅಧಿಕಾರಿಗಳ ಜೊತೆ ಸಭೆ ನಡೆಸಿ ಸಮಸ್ಯೆಗಳನ್ನು ಪರಿಹರಿಸಬೇಕು, ಪರಿಹಾರ ವಿತರಣೆ ವಿಳಂಬವಾಗಬಾರದು ಎಂದು ಸೂಚಿಸಿದ್ದೇನೆ, ಕಾವೇರಿ ನದಿ ಪಾತ್ರದಲ್ಲಿ ಉತ್ತಮ ಮಳೆಯಾಗಿದೆ. ಆದರೆ ಕಾವೇರಿ ಜಲಾನಯಲ ಪ್ರದೇಶಕ್ಕೆ ನೀರು ಬಿಡುವ ವಿಚಾರ ನೀರಾವರಿ ಸಚಿವರಿಗೆ ಬಿಟ್ಟಿದ್ದು ಎಂದು ಹೇಳಿದರು. ಮಾಜಿ ಶಾಸಕ ವಾಸು ಸಚಿವರ ಜೊತೆಯಲ್ಲಿದ್ದರು.