ಕಾಲುವೆಗೆ ಉರುಳಿ ಬಿದ್ದ ಟ್ರ್ಯಾಕ್ಟರ್: ಕಾರ್ಮಿಕ ಮಹಿಳೆಯರಿಬ್ಬರು ಮೃತ್ಯು
ಯಾದಗಿರಿ, ಆ. 11: ಕೂಲಿ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಟ್ರ್ಯಾಕ್ಟರ್ವೊಂದು ಚಾಲಕನ ನಿಯಂತ್ರಣ ತಪ್ಪಿ ಕಾಲುವೆಗೆ ಉರುಳಿ ಬಿದ್ದ ಪರಿಣಾಮ ಮಹಿಳಾ ಕಾರ್ಮಿಕರಿಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿದ ದುರ್ಘಟನೆ ತಾಲೂಕಿನ ಬಾಡಿಹಾಳ ಗ್ರಾಮದ ಶನಿವಾರ ನಡೆದಿದೆ.
ಮೃತರನ್ನು ಲಲಿತಮ್ಮ ಮತ್ತು ಭಾಗ್ಯಲಕ್ಷ್ಮಿ ಎಂದು ಗುರುತಿಸಲಾಗಿದೆ. ಜಮೀನು ಕೂಲಿ ಕೆಲಸಕ್ಕೆಂದು ತಾಲೂಕಿನ ಬಾಡಿಹಾಳ ಗ್ರಾಮದಿಂದ ಟ್ರ್ಯಾಕ್ಟರ್ನಲ್ಲಿ ಕೂಲಿ ಕಾರ್ಮಿಕರನ್ನು ಕರೆದುಕೊಂಡು ಹೋಗುತ್ತಿದ್ದ ವೇಳೆ ಚಾಲಕನ ನಿರ್ಲಕ್ಷ್ಯದಿಂದ ಟ್ರ್ಯಾಕ್ಟರ್ ಪಲ್ಟಿಯಾಗಿದೆ. ಇದರ ಪರಿಣಾಮ ಟ್ರ್ಯಾಕ್ಟರ್ ಟ್ರಾಲಿಯಲ್ಲಿ ಕೂತಿದ್ದ ಕೂಲಿ ಕಾರ್ಮಿಕರಲ್ಲಿ ಇಬ್ಬರು ಮಹಿಳೆಯರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತದಲ್ಲಿ ನಾಲ್ವರು ಕೂಲಿ ಕಾರ್ಮಿಕರು ಗಾಯಗೊಂಡಿದ್ದು, ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಈ ಸಂಬಂಧ ತಾಲೂಕಿನ ಸೈದಾಪುರ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಲ್ಲದೆ, ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದು, ಟ್ರಾಕ್ಟರ್ ಚಾಲಕನನ್ನು ವಶಕ್ಕೆ ಪಡೆದು ತನಿಖೆ ಕೈಗೊಂಡಿದ್ದಾರೆ.