ಮಧು ಬಂಗಾರಪ್ಪ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್-ಜೆಡಿಎಸ್ ಅಭ್ಯರ್ಥಿ: ಎಚ್.ಡಿ.ದೇವೇಗೌಡ
ಮಧು ಬಂಗಾರಪ್ಪ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್-ಜೆಡಿಎಸ್ ಅಭ್ಯರ್ಥಿ: ಎಚ್.ಡಿ.ದೇವೇಗೌಡ
ವಿಜಯಪುರ, ಅ.10: ಶಿವಮೊಗ್ಗ ಲೋಕಸಭಾ ಕ್ಷೇತ್ರದ ಉಪ ಚುನಾವಣೆಗೆ ಕಾಂಗ್ರೆಸ್-ಜೆಡಿಎಸ್ ಅಭ್ಯರ್ಥಿಯಾಗಿ ಮಾಜಿ ಶಾಸಕ ಮಧು ಬಂಗಾರಪ್ಪರನ್ನು ಕಣಕ್ಕಿಳಿಸಲು ನಿರ್ಧರಿಸಲಾಗಿದೆ ಎಂದು ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ತಿಳಿಸಿದ್ದಾರೆ.
ಬುಧವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷದ ಮುಖಂಡರು ನಿನ್ನೆ ನಡೆಸಿದ ಸಭೆಯಲ್ಲಿ ಈ ಸಂಬಂಧ ಒಮ್ಮತದ ನಿರ್ಧಾರ ಕೈಗೊಂಡಿದ್ದು, ಮಧು ಬಂಗಾರಪ್ಪರನ್ನೆ ಕಣಕ್ಕಿಳಿಸಲು ತೀರ್ಮಾನಿಸಲಾಗಿದೆ ಎಂದರು.
ವಿದೇಶ ಪ್ರವಾಸದಲ್ಲಿರುವ ಮಧು ಬಂಗಾರಪ್ಪ ರಾಜ್ಯಕ್ಕೆ ಹಿಂದಿರುಗುತ್ತಿದ್ದಂತೆ ಅವರೊಂದಿಗೆ ಈ ಬಗ್ಗೆ ಚರ್ಚೆ ನಡೆಸಲಾಗುವುದು. ಒಂದು ವೇಳೆ ಅವರು ಸ್ಪರ್ಧೆಗೆ ಹಿಂದೇಟು ಹಾಕಿದರೆ, ಕಾಂಗ್ರೆಸ್ ಮುಖಂಡರೊಂದಿಗೆ ಮತ್ತೊಮ್ಮೆ ಚರ್ಚಿಸಿ ಶಿವಮೊಗ್ಗ ಕ್ಷೇತ್ರಕ್ಕೆ ಅಭ್ಯರ್ಥಿಯನ್ನು ಆಯ್ಕೆ ಮಾಡಲಾಗುವುದು ಎಂದು ದೇವೇಗೌಡ ಹೇಳಿದರು.
ಮಂಡ್ಯ ಲೋಕಸಭಾ ಕ್ಷೇತ್ರ ಹಾಗೂ ರಾಮನಗರ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಗಳನ್ನು ಶೀಘ್ರವೇ ಘೋಷಣೆ ಮಾಡಲಾಗುವುದು. ಮಂಡ್ಯದಲ್ಲಿ ನನ್ನ ಮೊಮ್ಮಕ್ಕಳ ಪೈಕಿ ಯಾರು ಕೂಡ ಸ್ಪರ್ಧೆ ಮಾಡುತ್ತಿಲ್ಲ. ಅದರ ಬದಲು ಸ್ಥಳೀಯ ಮುಖಂಡರಿಗೆ ಅವಕಾಶ ಮಾಡಿಕೊಡಲಾಗುವುದು ಎಂದು ಅವರು ತಿಳಿಸಿದರು.
ಬಳ್ಳಾರಿ ಲೋಕಸಭಾ ಕ್ಷೇತ್ರಕ್ಕೂ ಕಾಂಗ್ರೆಸ್ ಮುಖಂಡರ ಜೊತೆ ಚರ್ಚಿಸಿ ಅಭ್ಯರ್ಥಿಯನ್ನು ಅಂತಿಮಗೊಳಿಸಲಾಗುತ್ತದೆ. ವಿಧಾನಸಭಾ ಹಾಗೂ ಲೋಕಸಭಾ ಕ್ಷೇತ್ರಗಳಿಗೆ ನಡೆಯುತ್ತಿರುವ ಉಪ ಚುನಾವಣೆ ಸಂಬಂಧ ಈಗಾಗಲೆ ಮುಖ್ಯಮಂತ್ರಿ ಕುಮಾರಸ್ವಾಮಿ, ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ಕೆಪಿಸಿಸಿ ಅಧ್ಯಕ್ಷ ದಿನೇಶ್ಗುಂಡೂರಾವ್ ಜೊತೆ ಚರ್ಚಿಸಲಾಗಿದೆ ಎಂದು ಅವರು ಹೇಳಿದರು.
ಕಾಂಗ್ರೆಸ್ ಸರಕಾರದ ಕಾರ್ಯಕ್ರಮಗಳನ್ನು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ಸಮ್ಮಿಶ್ರ ಸರಕಾರದಲ್ಲಿ ಮುಂದುವರೆಸಿಕೊಂಡು ಹೋಗುತ್ತಿದ್ದಾರೆ. ಕಾಂಗ್ರೆಸ್ ಹಾಗೂ ಜೆಡಿಎಸ್ ಎರಡು ಪಕ್ಷಗಳ ನಡುವೆ ಒಗ್ಗಟ್ಟಿದೆ. ರಾಜ್ಯ ಸರಕಾರವು ಉತ್ತಮವಾಗಿ ಜನಪರವಾಗಿ ಆಡಳಿತ ನೀಡುತ್ತಿದೆ ಎಂದು ದೇವೇಗೌಡ ಹೇಳಿದರು.
ಇದಕ್ಕೂ ಮುನ್ನ ಇಂಡಿ ತಾಲೂಕಿನ ತಾಂಬಾ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ದಸರಾ ಉತ್ಸವವನ್ನು ದೇವೇಗೌಡ ಉದ್ಘಾಟಿಸಿದರು. ಅಲ್ಲದೆ, ಕೃಷಿ ಮೇಳಕ್ಕೂ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ನಾಗಠಾಣ ಕ್ಷೇತ್ರದ ಜೆಡಿಎಸ್ ಶಾಸಕ ದೇವಾನಂದ್ ಚವ್ಹಾಣ್, ಜಿಲ್ಲಾ ಉಸ್ತುವಾರಿ ಸಚಿವ ಎಂ.ಸಿ.ಮನಗೂಳಿ, ಆರೋಗ್ಯ ಸಚಿವ ಶಿವಾನಂದ ಪಾಟೀಲ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.