ಮುಖ್ಯಮಂತ್ರಿ ಹುದ್ದೆಯ ಜವಾಬ್ದಾರಿ ನಿರ್ವಹಿಸಲು ಸಿದ್ಧ: ಡಿಸಿಎಂ ಪರಮೇಶ್ವರ್
ಬೆಳಗಾವಿ, ನ.17: ಕಾಂಗ್ರೆಸ್ ಹೈಕಮಾಂಡ್ ಮುಖ್ಯಮಂತ್ರಿ ಹುದ್ದೆಯ ಜವಾಬ್ದಾರಿ ನೀಡಿದರೆ ಅದನ್ನು ನಿಭಾಯಿಸಲು ಸಿದ್ಧನಿದ್ದೇನೆ ಎಂದು ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.
ಶನಿವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸದ್ಯ ನನಗೆ ಉಪ ಮುಖ್ಯಮಂತ್ರಿಯ ಜವಾಬ್ದಾರಿ ನೀಡಲಾಗಿದೆ. ಅದನ್ನು ಸಮರ್ಪಕವಾಗಿ ನಿಭಾಯಿಸುತ್ತಿದ್ದೇನೆ. ಭವಿಷ್ಯದಲ್ಲಿ ಮುಖ್ಯಮಂತ್ರಿ ಸ್ಥಾನ ಕೊಟ್ಟರೂ ನಿರ್ವಹಿಸುತ್ತೇನೆ ಎಂದರು.
ಮಾಸಾಂತ್ಯಕ್ಕೆ ಸಚಿವ ಸಂಪುಟ ವಿಸ್ತರಣೆಯಾಗಲಿದೆ. ಸಂಪುಟದಲ್ಲಿ ಖಾಲಿ ಇರುವ ಕಾಂಗ್ರೆಸ್ ಪಾಲಿನ ಆರು ಸ್ಥಾನಗಳನ್ನು ಭರ್ತಿ ಮಾಡಲಾಗುವುದು. ಐದು ವರ್ಷ ಸಮ್ಮಿಶ್ರ ಸರಕಾರ ಸುಭದ್ರವಾಗಿ ಆಡಳಿತ ನೀಡಲಿದೆ ಎಂದು ಅವರು ತಿಳಿಸಿದರು.
ಪೊಲೀಸ್ ಇಲಾಖೆಯಲ್ಲಿ ಸುಧಾರಣೆ ಮತ್ತು ಸೌಲಭ್ಯಗಳನ್ನು ಒದಗಿಸುವ ಸಂಬಂಧ ಔರಾದ್ಕರ್ ನೀಡಿರುವ ವರದಿ ಜಾರಿ ಮಾಡುವ ಸಂಬಂಧ ಮುಖ್ಯಮಂತ್ರಿ ಜೊತೆ ಚರ್ಚಿಸಲಾಗಿದೆ. ಪೊಲೀಸರ ವರ್ಗಾವಣೆಯ ಒಂದು ವರ್ಷದ ಅವಧಿಯನ್ನು ಎರಡು ವರ್ಷಕ್ಕೆ ಹೆಚ್ಚಿಸಲಾಗುವುದು ಎಂದು ಅವರು ಹೇಳಿದರು.
Next Story