ಬೆಳಗಾವಿ: ಕೆರೆಯಲ್ಲಿ ಈಜಲು ತೆರಳಿದ್ದ ನಾಲ್ವರು ವಿದ್ಯಾರ್ಥಿಗಳು ಮೃತ್ಯು
ಸಾಂದರ್ಭಿಕ ಚಿತ್ರ
ಬೆಳಗಾವಿ, ನ. 21: ಕೆರೆಯೊಂದಕ್ಕೆ ಈಜಲು ತೆರಳಿದ್ದ ನಾಲ್ವರು ಶಾಲಾ ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಇಲ್ಲಿನ ಸಾವಗಾಂವ್ನಲ್ಲಿ ಬುಧವಾರ ಸಂಭವಿಸಿದೆ.
ಮೃತಪಟ್ಟ ವಿದ್ಯಾರ್ಥಿಗಳನ್ನು ಸಾಹಿಲ್ ಬೆನಕೆ, ಅಮನ್ ಸಿಂಗ್, ಗೌತಮ್, ಚೇತನ ಬಾಂದುರ್ಗೆ ಎಂದು ಗುರುತಿಸಲಾಗಿದೆ. ನಾಲ್ವರು ವಿದ್ಯಾರ್ಥಿಗಳ ಶವವನ್ನು ಹೊರ ತೆಗೆದಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಜಿಲ್ಲಾಸ್ಪತ್ರೆಗೆ ಸಾಗಿಸಲಾಗಿದೆ.
ಬಟ್ಟೆಯನ್ನು ಕೆರೆ ದಂಡೆಯಲ್ಲಿಟ್ಟು ಕೆರೆ ನೀರಿಗೆ ಇಳಿದಿದ್ದ ವಿದ್ಯಾರ್ಥಿಗಳು ಗಂಟೆಗಳಾದರೂ ನೀರಿನಿಂದ ಹೊರ ಬಾರದೆ ಇದ್ದುದ್ದನ್ನು ಕಂಡ ಗ್ರಾಮಸ್ಥರು ಪೊಲೀಸರಿಗೆ ಸುದ್ದಿ ಮುಟ್ಟಿಸಿದ್ದಾರೆ. ಕೂಡಲೇ ಘಟನಾ ಸ್ಥಳಕ್ಕೆ ದೌಡಾಯಿಸಿದ ಬೆಳಗಾವಿ ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸರು, ಅಗ್ನಿಶಾಮಕ ದಳದ ಸಿಬ್ಬಂದಿ ಬಾಲಕರ ಶೋಧ ಕಾರ್ಯ ನಡೆಸಿದರು. ಈ ವೇಳೆ ನಾಲ್ವರು ಬಾಲಕರ ಶವ ಪತ್ತೆಯಾಗಿದೆ.
ಘಟನಾ ಸ್ಥಳಕ್ಕೆ ಬೆಳಗಾವಿ ಮಹಾನಗರದ ಪೊಲೀಸ್ ಆಯುಕ್ತ ಡಾ.ಡಿ.ಸಿ.ರಾಜಪ್ಪಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಪ್ರಕರಣ ಸಂಬಂಧ ಬೆಳಗಾವಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು ತನಿಖೆ ಕೈಗೊಂಡಿದ್ದಾರೆ.