ರಮೇಶ್ ಬಿಜೆಪಿ ಸೇರ್ಪಡೆಯಾಗಲಿದ್ದಾರೆಂಬುದು ಶುದ್ಧ ಸುಳ್ಳು: ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟನೆ
ಕೊಪ್ಪಳ, ಡಿ. 30: ‘ಮಾಜಿ ಸಚಿವ ರಮೇಶ ಜಾರಕಿಹೊಳಿ ಯಾವುದೇ ಕಾರಣಕ್ಕೂ ಪಕ್ಷ ತೊರೆಯುವುದಿಲ್ಲ. ಅವರು ಬಿಜೆಪಿ ಸೇರ್ಪಡೆಗೊಳ್ಳಲಿದ್ದಾರೆಂಬುದು ಶುದ್ಧ ಸುಳ್ಳು’ ಎಂದು ಅರಣ್ಯ ಸಚಿವ ಸತೀಶ್ ಜಾರಕಿಹೊಳಿ ಇಂದಿಲ್ಲಿ ಸ್ಪಷ್ಟಪಡಿಸಿಸದ್ದಾರೆ.
ರವಿವಾರ ಇಲ್ಲಿನ ಜಿಲ್ಲಾ ಪಂಚಾಯತ್ ನೂತನ ಅಧ್ಯಕ್ಷ ವಿಶ್ವನಾಥ್ ರೆಡ್ಡಿ ಅವರ ನಿವಾಸಕ್ಕೆ ಭೇಟಿ ನೀಡಿದ ಬಳಿಕ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ರಮೇಶ ಜಾರಕಿಹೊಳಿ ಎಲ್ಲೇ ಹೋಗಿದ್ದರು ಅವರು ನಮ್ಮ ಜೊತೆಯಲ್ಲೆ ಇರಲಿದ್ದಾರೆ. ಮೈತ್ರಿ ಸರಕಾರದಲ್ಲಿ ಎಲ್ಲರೂ ಒಟ್ಟಿಗೆ ಸೇರಿ ಕಾರ್ಯ ನಿರ್ವಹಿಸುತ್ತೇವೆ ಎಂದರು.
ಪಕ್ಷದಲ್ಲಿ ಯಾವುದೇ ಸಮಸ್ಯೆ ಇಲ್ಲ. ಮುಖ್ಯಮಂತ್ರಿ ಕುಮಾರಸ್ವಾಮಿ ನೇತೃತ್ವದ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರಕಾರ ಸುಗಮವಾಗಿ ನಡೆಯಲಿದೆ. ಮಾತ್ರವಲ್ಲ, ತನ್ನ ಐದು ವರ್ಷದ ಅಧಿಕಾರಾವಧಿಯನ್ನು ಪೂರ್ಣಗೊಳಿಸಲಿದೆ ಎಂದು ಸತೀಶ್ ಜಾರಕಿಹೊಳಿ ಭರವಸೆ ವ್ಯಕ್ತಪಡಿಸಿದರು.
ಕೊಪ್ಪಳ ಜಿಲ್ಲೆಯ ಕೂಡ್ಲಿಗಿ ಸುತ್ತಮುತ್ತಲಿನ ಪ್ರದೇಶದಲ್ಲಿ ಕಳೆದ ಕೆಲ ದಿನಗಳಿಂದ ಕರಡಿ ದಾಳಿ ಹಿನ್ನೆಲೆಯಲ್ಲಿ ಶೀಘ್ರದಲ್ಲೆ ಅರಣ್ಯ ಇಲಾಖೆ ಅಧಿಕಾರಿಗಳ ಸಭೆ ನಡೆಸಿ ಮಾಹಿತಿ ಪಡೆದು ಕರಡಿಗಳ ಹಾವಳಿ ನಿಯಂತ್ರಣಕ್ಕೆ ಕ್ರಮ ವಹಿಸಲಾಗುವುದು ಎಂದು ಸತೀಶ್ ಜಾರಕಿಹೊಳಿ ಪ್ರತಿಕ್ರಿಯೆ ನೀಡಿದರು.