ಬಳ್ಳಾರಿ ಬಿಜೆಪಿ ಅಭ್ಯರ್ಥಿಯ ಗೆಲುವು ಖಚಿತ: ಶ್ರೀರಾಮುಲು
ಬಳ್ಳಾರಿ, ಮಾ22: ಬಳ್ಳಾರಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವೈ.ದೇವೇಂದ್ರಪ್ಪ ಅವರನ್ನು ಕ್ಷೇತ್ರದ ಜನತೆ ಒಂದು ಲಕ್ಷ ಮತಗಳ ಅಂತರದಿಂದ ಗೆಲ್ಲಿಸಲಿದ್ದಾರೆ ಎಂದು ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ಶ್ರೀರಾಮುಲು ತಿಳಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಗೆಲುವಿಗಾಗಿ ಶ್ರಮಿಸಲು ಪಕ್ಷದ ಕಾರ್ಯಕರ್ತರು ಸಿದ್ಧರಾಗಿದ್ದಾರೆ. ಕ್ಷೇತ್ರದಲ್ಲಿ ಬಿಜೆಪಿ ನಾಯಕರ ನಡುವೆ ಯಾವುದೆ ಭಿನ್ನಾಭಿಪ್ರಾಯವಿಲ್ಲ. ಜಿಲ್ಲಾ ಉಸ್ತುವಾರಿ ಸಚಿವ ಡಿ.ಕೆ.ಶಿವಕುಮಾರ್ ತಂತ್ರಕ್ಕೆ ಪ್ರತಿತಂತ್ರ ರೂಪಿಸಲು ಸಿದ್ದರಾಗಿದ್ದೇವೆ ಎಂದು ತಿಳಿಸಿದರು.
ಎಪ್ರಿಲ್ 1ರಂದು ಬಿಜೆಪಿ ಅಭ್ಯರ್ಥಿ ದೇವೇಂದ್ರಪ್ಪ ನಾಮಪತ್ರ ಸಲ್ಲಿಸಲಿದ್ದು, ಈ ವೇಳೆ ದೊಡ್ಡ ಸಂಖ್ಯೆಯಲ್ಲಿ ಕಾರ್ಯಕರ್ತರು, ಅಭಿಮಾನಿಗಳೊಂದಿಗೆ ರೋಡ್ ಶೋ ನಡೆಸಲಿದ್ದೇವೆ. ನಾಮಪತ್ರ ಸಲ್ಲಿಕೆಯ ವೇಳೆ ಬಿಜೆಪಿಯ ರಾಜ್ಯಮಟ್ಟದ ನಾಯಕರು ಪಾಲ್ಗೊಳ್ಳಲಿದ್ದಾರೆ ಎಂದು ಅವರು ಹೇಳಿದರು.
ಬಿಜೆಪಿ ಅಭ್ಯರ್ಥಿ ದೇವೇಂದ್ರಪ್ಪ ಮಾತನಾಡಿ, ಬಳ್ಳಾರಿ ಜಿಲ್ಲೆ ಬಿಜೆಪಿ ಭದ್ರಕೋಟೆಯಾಗಿದೆ. ಕಳೆದ ಬಾರಿಯ ಉಪಚುನಾವಣೆಯಲ್ಲಿ ಸೋತಿರಬಹುದು. ಆದರೆ, ಈ ಬಾರಿ ಹಾಗೆ ಆಗುವುದಿಲ್ಲ. ಬಿಜೆಪಿ ಕಾರ್ಯಕರ್ತರು ಗೆಲುವಿಗಾಗಿ ಹಗಲಿರುಳು ಶ್ರಮಿಸುತ್ತಿದ್ದಾರೆ. ಹೀಗಾಗಿ ನನ್ನ ಗೆಲುವು ಖಚಿತವೆಂದು ವಿಶ್ವಾಸ ವ್ಯಕ್ತಪಡಿಸಿದರು.