ಬ್ಯಾಂಕಿಂಗ್ ಸಿಬ್ಬಂದಿ ನೇಮಕದಲ್ಲಿ ಸ್ಥಳೀಯರಿಗೆ ಉದ್ಯೋಗ: ನಿಯಮಾವಳಿ ತಿದ್ದುಪಡಿ ಮಾಡಲು ಸಿಎಂ ಮನವಿ
ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ರನ್ನು ಭೇಟಿಯಾದ ಕುಮಾರಸ್ವಾಮಿ
ಹೊಸದಿಲ್ಲಿ, ಜೂ.15: ಪ್ರಾದೇಶಿಕ ಗ್ರಾಮೀಣ ಬ್ಯಾಂಕುಗಳಿಗೆ ಸಿಬ್ಬಂದಿ ನೇಮಕ ವೇಳೆ ಸ್ಥಳೀಯ ಭಾಷಾ ಜ್ಞಾನ ಹೊಂದಿರುವವರಿಗೆ ಆದ್ಯತೆ ನೀಡುವ ಸಂಬಂಧ ಬ್ಯಾಂಕಿಂಗ್ ಸಿಬ್ಬಂದಿ ನೇಮಕಾತಿ ಸಂಸ್ಥೆ (ಐಬಿಪಿಎಸ್) ನಿಯಮಗಳಿಗೆ ತಿದ್ದುಪಡಿ ಮಾಡಬೇಕು ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ, ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಮನವಿ ಸಲ್ಲಿಸಿದ್ದಾರೆ.
ಶನಿವಾರ ದಿಲ್ಲಿಯಲ್ಲಿ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿದ ಬಳಿಕ ಮಾತನಾಡಿದ ಅವರು, ಬ್ಯಾಂಕಿಂಗ್ ಪ್ರವೇಶ ಪರೀಕ್ಷೆಗಳು ಸಂವಿಧಾನ ಮಾನ್ಯತೆ ನೀಡಿರುವ ಎಲ್ಲ 22 ಭಾಷೆಗಳಲ್ಲಿ ನಡೆಸಬೇಕು ಹಾಗೂ ಕೇಂದ್ರ ಸರಕಾರದ ಎಲ್ಲ ಇಲಾಖೆಗಳ ನೇಮಕಾತಿಯಲ್ಲೂ ಸ್ಥಳೀಯರಿಗೆ ಅವಕಾಶ ಒದಗಿಸುವ ಕುರಿತು ಕಟ್ಟುನಿಟ್ಟಿನ ನಿಯಮಗಳನ್ನು ಜಾರಿಗೆ ತರಬೇಕೆಂದು ಕೋರಿದರು.
ಅಲ್ಲದೆ ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಪಂಚಾಯತ್ ರಾಜ್ ಸಂಸ್ಥೆಗಳಿಗೆ 2018-19ನೆ ಸಾಲಿಗೆ ಬಾಕಿ ಇರುವ 233 ಕೋಟಿ ರೂ. ಅನುದಾನ ಬಿಡುಗಡೆ ಮಾಡುವಂತೆ ಕೋರಿದರು. ರಾಜ್ಯ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯು ನಿರ್ಮಾಣ ಕಾರ್ಮಿಕರ ಕ್ಷೇಮಾಭಿವೃದ್ಧಿಗಾಗಿ ಶ್ರಮಿಸುತ್ತಿರುವ ಸಂಸ್ಥೆಯಾಗಿದೆ. ಈ ಸಂಸ್ಥೆಯ ಬ್ಯಾಂಕ್ ಖಾತೆಯಲ್ಲಿರುವ ಮೊತ್ತ ಹಾಗೂ ಬಡ್ಡಿ ಮೊತ್ತವನ್ನು ಕಾರ್ಮಿಕರ ಕಲ್ಯಾಣಕ್ಕಾಗಿ ವಿನಿಯೋಗಿಸಲಾಗುತ್ತದೆ. ಈ ಹಿನ್ನೆಲೆಯಲ್ಲಿ ಆದಾಯ ತೆರಿಗೆ ಕಾಯ್ದೆ 1961 ರ ನಿಯಮ 10(29ಎ) ಅಡಿ ಮಂಡಳಿಯನ್ನು ಸೇರ್ಪಡೆಗೊಳಿಸಿ, ಕಾಫಿ, ರಬ್ಬರ್ ಮಂಡಳಿಗಳಂತೆ ಕಾರ್ಮಿಕ ಕಲ್ಯಾಣ ಮಂಡಳಿಗೂ ಆದಾಯ ತೆರಿಗೆ ವಿನಾಯಿತಿ ನೀಡುವಂತೆ ಮನವಿ ಮಾಡಿದರು.
ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಡಿ ರಾಜ್ಯವು ಅತ್ಯುತ್ತಮ ಸಾಧನೆ ಮಾಡಿದ್ದು, ಕೇಂದ್ರದಿಂದ ಕೂಲಿ ಮುಂಗಡವೂ ಸೇರಿದಂತೆ 1,500 ಕೋಟಿ ರೂ. ಬಿಡುಗಡೆಯಾಗಬೇಕಿದೆ. ಈ ಅನುದಾನವನ್ನು ಕೂಡಲೇ ಬಿಡುಗಡೆ ಮಾಡುವಂತೆ ಕುಮಾರಸ್ವಾಮಿ, ನಿರ್ಮಲಾ ಸೀತಾರಾಮನ್ ಅವರಿಗೆ ಕೋರಿದರು.
ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್, ಸಿಎಂ ಅಪರ ಮುಖ್ಯ ಕಾರ್ಯದರ್ಶಿ ಡಾ.ಇ.ವಿ.ರಮಣ ರೆಡ್ಡಿ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.