ಮಾಜಿ ಸಚಿವ ರಾಮಲಿಂಗಾ ರೆಡ್ಡಿ ಮನವೊಲಿಸಲು ಯತ್ನಿಸಿದ ಈಶ್ವರ್ ಖಂಡ್ರೆ
ಬೆಂಗಳೂರು, ಜು.6: ಮಾಜಿ ಸಚಿವ ರಾಮಲಿಂಗಾ ರೆಡ್ಡಿ ರಾಜೀನಾಮೆ ನೀಡುತ್ತಾರೆಂಬ ವದಂತಿಯ ಹಿನ್ನೆಲೆಯಲ್ಲಿ ಅವರನ್ನು ಶನಿವಾರ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಭೇಟಿಯಾಗಿ ಮಾತುಕತೆ ನಡೆಸಿದರು.
ರಾಮಲಿಂಗಾ ರೆಡ್ಡಿ ಸಚಿವ ಸ್ಥಾನ ದೊರೆಯದ ಹಿನ್ನೆಲೆಯಲ್ಲಿ ಅವರ ಅಸಮಾಧಾನಗೊಂಡಿದ್ದರು. ಈ ಕಾರಣದಿಂದಾಗಿ ಅವರು ಶಾಸಕ ಸ್ಥಾನಕ್ಕೆ, ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡುವ ನಿರ್ಧಾರ ಕೈಗೊಂಡಿದ್ದಾರೆ ಎಂಬ ವದಂತಿ ಹರಡಿತ್ತು. ಈ ಕಾರಣಕ್ಕಾಗಿ ಈಶ್ವರ್ ಖಂಡ್ರೆ ಅವರು ರಾಮಲಿಂಗಾ ರೆಡ್ಡಿಯನ್ನು ಅವರ ನಿವಾಸದಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದರು.ಅವರ ಮನವೊಲಿಸುವ ಪ್ರಯತ್ನ ನಡೆಸಿದರು. ಪಕ್ಷ ಬಿಡದಂತೆ ವಿನಂತಿಸಿದರು ಎಂದು ಮನವಿ ಮಾಡಿದರು ಎಂದು ತಿಳಿದು ಬಂದಿದೆ.
ಈ ಸಂದರ್ಭದಲ್ಲಿ ರಾಮಲಿಂಗಾ ರೆಡ್ಡಿ ಪುತ್ರಿ ಹಾಗೂ ಶಾಸಕಿ ಸೌಮ್ಯ ರೆಡ್ಡಿ ಉಪಸ್ಥಿತರಿದ್ದರು.
ಕಾಂಗ್ರೆಸ್-ಜೆಡಿಎಸ್ ಮೈತ್ರಿ ಕೂಟದ 13 ಶಾಸಕರು ರಾಜೀನಾಮೆ ನೀಡುತ್ತಾರೆಂಬ ವದಂತಿಯ ಹಿನ್ನೆಲೆಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಮತ್ತು ಸಚಿವ ಝಮೀರ್ ಅಹ್ಮದ್ ಅವರು ಅತೃಪ್ತ ಶಾಸಕರನ್ನು ಭೇಟಿಯಾಗಿ ಮನವೊಲಿಕೆಯ ಯತ್ನ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.