'ಸೋತವರಿಗೆ ಸಚಿವ ಸ್ಥಾನ'ದ ಬಗ್ಗೆ ಸಚಿವ ಶ್ರೀರಾಮುಲು ಪ್ರತಿಕ್ರಿಯೆ
ಬಳ್ಳಾರಿ, ಜ.25: ಕಳೆದ ಉಪಚುನಾವಣೆಯಲ್ಲಿ ಸೋತ ಅಭ್ಯರ್ಥಿಗಳಿಗೆ ಸಚಿವ ಸ್ಥಾನ ನೀಡುವುದು, ನನಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕೆಂಬುದು ಪಕ್ಷದ ಹೈಕಮಾಂಡ್ ಮತ್ತು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪಗೆ ಬಿಟ್ಟ ವಿಚಾರ ಎಂದು ಆರೋಗ್ಯ ಸಚಿವ ಬಿ.ಶ್ರೀರಾಮುಲು ಹೇಳಿದ್ದಾರೆ.
ಶನಿವಾರ ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಚಿವ ಸಂಪುಟ ವಿಸ್ತರಣೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಯಡಿಯೂರಪ್ಪ ಕೊಟ್ಟ ಮಾತುಗಳನ್ನು ಉಳಿಸಿಕೊಳ್ಳುತ್ತಾರೆ. ಇತ್ತೀಚೆಗೆ 15 ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆಯಲ್ಲಿ ಸೋತವರಿಗೆ ಸಚಿವ ಸ್ಥಾನ ನೀಡುವುದನ್ನು ಹೈಕಮಾಂಡ್ ನಿರ್ಣಯ ಕೈಗೊಳ್ಳಲಿದೆ ಎಂದು ತಿಳಿಸಿದರು.
ನಾನು ಉಪಮುಖ್ಯಮಂತ್ರಿ ಆಗಬೇಕು ಅನ್ನೋದು ಜನರ ಬೇಡಿಕೆ. ಜನರ ಬೇಡಿಕೆಯನ್ನು ನಾನು ಅಲ್ಲಗೆಳೆಯುವುದಿಲ್ಲ. ಆದರೆ, ನನಗೆ ಡಿಸಿಎಂ ಹುದ್ದೆ ನೀಡುವ ವಿಷಯ ಪಕ್ಷದ ಹೈಕಮಾಂಡ್, ಸಿಎಂ ತೀರ್ಮಾನ ತೆಗೆದುಕೊಳ್ಳುತ್ತಾರೆ ಎಂದರು.
ಬಳ್ಳಾರಿ ವಿಮ್ಸ್ ಆಸ್ಪತ್ರೆಯಲ್ಲಿ ವೀಲ್ ಚೇರ್ ನೀಡದ ಅಮಾನವೀಯ ಘಟನೆ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಈ ಬಗ್ಗೆ ತನಿಖೆ ನಡೆಸಲು ಆದೇಶಿಸಲಾಗಿದೆ. ಇಂತಹ ಘಟನೆಗಳನ್ನು ಬಿಹಾರ, ಉತ್ತರ ಪ್ರದೇಶ ರಾಜ್ಯಗಳಲ್ಲಿ ನೋಡಿದ್ದೇವೆ. ಈಗ ಬಳ್ಳಾರಿಯಲ್ಲಿ ಇಂತಹ ಘಟನೆ ನಡೆದಿದೆ. ತಪ್ಪಿತಸ್ಥರು ಯಾರೇ ಇದ್ದರೂ ತನಿಖೆ ನಡೆಸಿ ಕ್ರಮ ಕೈಗೊಳ್ಳುತ್ತೇವೆ ಎಂದು ಇದೇ ವೇಳೆ ಹೇಳಿದರು.