ಮೇ 27ರಿಂದ ಜೂನ್ 1ರವರೆಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್ ಜಿಲ್ಲಾ ಪ್ರವಾಸ
ಬೆಂಗಳೂರು, ಮೇ 26: ಪಕ್ಷ ಸಂಘಟನೆ ದೃಷ್ಟಿಯಿಂದ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(ಕೆಪಿಸಿಸಿ) ಕಾರ್ಯಾಧ್ಯಕ್ಷ ಸಲೀಂ ಅಹಮದ್ ಅವರು, ನಾಳೆ(ಮೇ 27)ಯಿಂದ ಜೂನ್ 1ರ ವರೆಗೆ ಮಂಡ್ಯ, ಚಾಮರಾಜನಗರ, ಮೈಸೂರು, ಕೊಡಗು, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಹಾಸನ ಜಿಲ್ಲೆಗಳಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.
ಮೇ 27ರಂದು ಮಂಡ್ಯ ಮತ್ತು ಚಾಮರಾಜನಗರ, ಮೇ 28ಕ್ಕೆ ಮೈಸೂರು ಮತ್ತು ಕೊಡಗು, ಮೇ 29ಕ್ಕೆ ದಕ್ಷಿಣ ಕನ್ನಡ ಮತ್ತು ಉಡುಪಿ, ಮೇ 30ಕ್ಕೆ ಶಿವಮೊಗ್ಗ ಮತ್ತು ಚಿಕ್ಕಮಗಳೂರು, ಜೂನ್ 1ಕ್ಕೆ ಹಾಸನ ಜಿಲ್ಲೆಯ ಕಾಂಗ್ರೆಸ್ ಪದಾಧಿಕಾರಿಗಳು, ಶಾಸಕರು, ಮಾಜಿ ಶಾಸಕರು ಹಾಗೂ ಮುಂಚೂಣಿ ಘಟಕಗಳ ಮುಖಂಡರೊಂದಿಗೆ ಸಮಾಲೋಚನೆ ನಡೆಸಲಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸೇರಿ ನೂತನ ಪದಾಧಿಕಾರಿಗಳ ಅಧಿಕಾರ ಸ್ವೀಕಾರ ಹಾಗೂ ಕೊರೋನ ಸೋಂಕು ತಡೆಗಟ್ಟಲು ಹೇರಿದ್ದ ಲಾಕ್ಡೌನ್ ಅವಧಿಯಲ್ಲಿ ಜಿಲ್ಲಾ ಮಟ್ಟದಲ್ಲಿ ರೈತರು ಮತ್ತು ಕಾರ್ಮಿಕರ ಸಮಸ್ಯೆಗಳು, ಸರಕಾರದ ವೈಫಲ್ಯಗಳ ಬಗ್ಗೆ ಹಾಗೂ ಮುಂದಿನ ಹೋರಾಟದ ರೂಪುರೇಷೆಗಳ ಬಗ್ಗೆ ಚರ್ಚಿಸಲಿದ್ದಾರೆಂದು ಗೊತ್ತಾಗಿದೆ.