ಶಸ್ತ್ರಚಿಕಿತ್ಸೆ ಮೂಲಕ ಕೊರೋನ ಸೋಂಕಿತೆಗೆ ಹೆರಿಗೆ: ತಾಯಿ, ಮಗು ಕ್ಷೇಮ
ಚಾಮರಾಜನಗರ: ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಕೊರೋನ ಸೋಂಕಿತ ಮಹಿಳೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ.
ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಗಾಣಿಗ ಮಂಗಲದ 21 ವರ್ಷದ ಮಹಿಳೆ ಕಳೆದ ಎರಡು ದಿನಗಳ ಹಿಂದೆ ಹೆರಿಗೆಗಾಗಿ ಜಿಲ್ಲಾಸ್ಪತ್ರೆಯಲ್ಲಿ ದಾಖಲಾಗಿದ್ದರು. ಮುನ್ನೆಚ್ಚರಿಕೆ ಕ್ರಮವಾಗಿ ಕೋವಿಡ್ ಪರೀಕ್ಷೆ ಮಾಡಿಸಲಾಗಿತ್ತು. ವರದಿಯಲ್ಲಿ ಸೋಂಕು ದೃಢಪಟ್ಟಿತ್ತು.
ನಂತರ ಆಕೆಯನ್ನು ಕೋವಿಡ್ ಆಸ್ಪತ್ರೆಗೆ ವರ್ಗಾಯಿಸಿ ಶಸ್ತ್ರಚಿಕಿತ್ಸೆ ಮೂಲಕ ಹೆರಿಗೆ ಮಾಡಲಾಗಿದೆ. ಮಗು ಮತ್ತು ತಾಯಿಯ ಆರೋಗ್ಯ ಸ್ಥಿರವಾಗಿದೆ ಎಂದು ಜಿಲ್ಲಾಸ್ಪತ್ರೆ ಸರ್ಜನ್ ಡಾ.ಕೃಷ್ಣಪ್ರಸಾದ್ ತಿಳಿಸಿದ್ದಾರೆ.
ಸೋಂಕು ಪತ್ತೆಗೂ ಮುನ್ನ ಗರ್ಭಿಣಿ ದಾಖಲಾಗಿದ್ದ ಹೆರಿಗೆ ವಾರ್ಡ್ ಅನ್ನು ಸೀಲ್ ಡೌನ್ ಮಾಡಲಾಗಿದೆ. ಹೆರಿಗೆ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಇನ್ನಿತರ ರೋಗಿಗಳ ಗಂಟಲ ದ್ರವವನ್ನ ಪರೀಕ್ಷೆಗೆ ರವಾನೆ ಮಾಡಲಾಗಿದೆ.
Next Story