ಗೌರವಧನ ಹೆಚ್ಚಳಕ್ಕೆ ಒತ್ತಾಯ: ಸೆ.23ರಿಂದ ಆಶಾ ಕಾರ್ಯಕರ್ತೆಯರಿಂದ ರಾಜ್ಯ ಮಟ್ಟದ ಹೋರಾಟ
ಬೆಂಗಳೂರು, ಸೆ.22: ರಾಜ್ಯದ ಆಶಾ ಕಾರ್ಯಕರ್ತೆಯರಿಗೆ ಮಾಸಿಕ 12 ಸಾವಿರ ರೂ. ಗೌರವಧನ ನಿಗದಿ ಮಾಡಬೇಕೆಂದು ಒತ್ತಾಯಿಸಿ ಸೆ.23ರಿಂದ ನಗರದ ಫ್ರೀಡಂ ಪಾರ್ಕ್ ನಲ್ಲಿ ರಾಜ್ಯ ಮಟ್ಟದ ಆಶಾ ಕಾರ್ಯಕರ್ತೆಯರ ಹೋರಾಟ ಹಮ್ಮಿಕೊಳ್ಳಲಾಗಿದೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಸಂಘಟನೆಯು, ಆಶಾ ಕಾರ್ಯಕರ್ತೆಯರು ಕಳೆದ 9 ತಿಂಗಳಿನಿಂದ ನಿರಂತರವಾಗಿ ತಮ್ಮ ಬೇಡಿಕೆಗಳ ಈಡೇರಿಕೆಗಾಗಿ ಸರಕಾರವನ್ನು ಒತ್ತಾಯಿಸುತ್ತಲೇ ಬರುತ್ತಿದ್ದಾರೆ. ಆದರೆ, ರಾಜ್ಯ ಸರಕಾರ ಈ ಬಗ್ಗೆ ಮೌನವಹಿಸಿದೆ. ಹೀಗಾಗಿ ಸೆ.23ರಂದು ರಾಜ್ಯ ಮಟ್ಟದ ಹೋರಾಟಕ್ಕೆ ಕರೆ ನೀಡಲಾಗಿದೆ.
ಸೆ.23ರಂದು ಫ್ರೀಡಂ ಪಾರ್ಕ್ ಗೆ ರಾಜ್ಯದ ವಿವಿಧ ಜಿಲ್ಲೆಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಆಶಾ ಕಾರ್ಯಕರ್ತೆಯರು ಆಗಮಿಸುತ್ತಿದ್ದು, ಸರಕಾರ ತಮ್ಮ ಬೇಡಿಕೆಗಳನ್ನು ಈಡೇರಿಸುವವರೆಗೆ ಹೋರಾಟವನ್ನು ಹಿಂಪಡೆಯುವುದಿಲ್ಲವೆಂದು ಆಶಾ ಕಾರ್ಯಕರ್ತೆಯರ ಸಂಘಟನೆ ಎಚ್ಚರಿಕೆ ನೀಡಿದೆ.
Next Story