ರಾಜ್ಯದಲ್ಲಿ ಜೂ.6-7 ಕ್ಕೆ ಭಾರೀ ಮಳೆಯ ಮುನ್ಸೂಚನೆ
ಸಾಂದರ್ಭಿಕ ಚಿತ್ರ
ಬೆಂಗಳೂರು, ಜೂ. 3: ಅವಧಿಗೂ ಮೊದಲೇ ರಾಜ್ಯದಲ್ಲಿ ಮುಂಗಾರು ಮಳೆ ಆರಂಭವಾಗಿದ್ದು, ಜೂ.6 ಮತ್ತು 7ರಂದು ರಾಜ್ಯಾದ್ಯಂತ ಭಾರೀ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಜೂ. 6ರಂದು ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ, ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಮತ್ತು ಶಿವಮೊಗ್ಗ ಜಿಲ್ಲೆ, ಉತ್ತರ ಒಳನಾಡಿನ ಬಾಗಲಕೋಟೆ, ಬೀದರ್, ಕಲಬುರಗಿ, ರಾಯಚೂರು, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಲಾಗಿದೆ.
ಜೂ.7ರಂದು ಉತ್ತರ ಒಳನಾಡಿನ ಬೀದರ್, ಕಲಬುರಗಿ, ಯಾದಗಿರಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಕರಾವಳಿ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ, ದಕ್ಷಿಣ ಒಳನಾಡಿನ ಪ್ರದೇಶಗಳಾದ ಬಳ್ಳಾರಿ, ಚಿಕ್ಕಮಗಳೂರು, ಹಾಸನ ಹಾಗೂ ಮೈಸೂರು ಜಿಲ್ಲೆಗಳಲ್ಲಿ ಮಳೆಯಾಗಲಿದೆ.
ಉತ್ತರ ಕನ್ನಡ ಜಿಲ್ಲೆಯ ಕೆಲಭಾಗಗಳು, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಕೊಡಗು, ಕೋಲಾರ, ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಸಾಮಾನ್ಯ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಅರಬ್ಬೀ ಸಮುದ್ರ ಹಾಗೂ ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಎದ್ದಿರುವ ಹಿನ್ನೆಲೆಯಲ್ಲಿ ಮುಂಗಾರು ಮತ್ತಷ್ಟು ಚುರುಕುಗೊಂಡಿದೆ. ಕರಾವಳಿ, ಮಲೆನಾಡು, ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಭಾಗದಲ್ಲಿ ಭಾರಿ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಒಂದು ವಾರ ಮಳೆ: ನೈಋತ್ಯ ಮುಂಗಾರು ರಾಜ್ಯ ಪ್ರವೇಶಿಸಿದ ಬೆನ್ನಲ್ಲೇ ಉತ್ತಮ ಮಳೆಯಾಗುತ್ತಿದ್ದು, ಇನ್ನೂ ಒಂದು ವಾರ ರಾಜ್ಯದೆಲ್ಲೆಡೆ ಉತ್ತಮ ಮಳೆಯಾಗುವ ಮುನ್ಸೂಚನೆಗಳಿವೆ ಎಂದು ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ನಿರ್ದೇಶಕ ಡಾ.ಜಿ.ಎಸ್.ಶ್ರೀನಿವಾಸರೆಡ್ಡಿ ತಿಳಿಸಿದ್ದಾರೆ.
ಬಂಗಾಳಕೊಲ್ಲಿ ಹಾಗೂ ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ವಾಯುಭಾರದಲ್ಲಿನ ವ್ಯತ್ಯಾಸದಿಂದಾಗಿ ರಾಜ್ಯದಲ್ಲಿ ಉತ್ತಮ ಮಳೆಯಾಗುತ್ತಿದೆ. ಶನಿವಾರ ಧಾರವಾಡದಲ್ಲಿ ಭಾರೀ ಮಳೆಯಾಗಿದ್ದು, 101 ಮಿ.ಮೀ.ನಷ್ಟು ಮಳೆಯಾದ ವರದಿಯಾಗಿದೆ. ರಾಜ್ಯದ ದಕ್ಷಿಣ ಒಳನಾಡು, ರಾಜಧಾನಿ ಬೆಂಗಳೂರು ಸೇರಿದಂತೆ ಹಲವೆಡೆ ಉತ್ತಮ ಮಳೆಯಾಗಿದೆ. ಕಳೆದ ಜನವರಿಯಿಂದ ಮೇ ಅಂತ್ಯದವರೆಗೆ ವಾಡಿಕೆ ಮಳೆ ಪ್ರಮಾಣ 133 ಮಿ.ಮೀ.ನಷ್ಟಿದ್ದು, 200 ಮಿ.ಮೀ.ನಷ್ಟು ಮಳೆಯಾಗಿದೆ. ಒಟ್ಟಾರೆ ಶೇ.50ರಷ್ಟು ಹೆಚ್ಚು ಮಳೆಯಾಗಿದೆ.
ಮೇ ಕೊನೆ ವಾರದಲ್ಲೂ ವಾಡಿಕೆಗಿಂತ ಶೇ.70ರಷ್ಟು ಮಳೆಯಾಗಿದೆ. ಅಲ್ಲದೆ, ಬೇಸಿಗೆ ಅವಧಿಯ ಮಾರ್ಚ್ ನಿಂದ ಮೇ ಅಂತ್ಯದವರೆಗೆ ರಾಜ್ಯಾದ್ಯಂತ 125ಮಿ.ಮೀ.ನಷ್ಟು ವಾಡಿಕೆ ಮಳೆಯಾಗುತ್ತಿತ್ತು. ಆದರೆ, 193 ಮಿ.ಮೀ.ನಷ್ಟು ಮಳೆಯಾಗಿದ್ದು, ಶೇ.54ರಷ್ಟು ಹೆಚ್ಚಾಗಿ ವರ್ಷಧಾರೆಯಾಗಿದೆ ಎಂದು ಅವರು ಹೇಳಿದ್ದಾರೆ.
ಉತ್ತರ ಒಳನಾಡು, ದಕ್ಷಿಣ ಒಳನಾಡು, ಕರಾವಳಿ ಹಾಗೂ ಮಲೆನಾಡು ಭಾಗದಲ್ಲೂ ಕಳೆದ ಐದು ತಿಂಗಳಲ್ಲಿ ವಾಡಿಕೆಗಿಂತ ಹೆಚ್ಚಿನ ಮಳೆಯಾಗಿರುವ ವರದಿಯಾಗಿದೆ. ಕಳೆದ ಎರಡು-ಮೂರು ವಾರಗಳಿಂದ ರಾಜ್ಯದ ಹಲವೆಡೆ ಉತ್ತಮ ಮಳೆಯಾಗಿದ್ದು, ಮುಂಗಾರು ಹಂಗಾಮಿನ ಕೃಷಿ ಚಟುವಟಿಕೆಗಳು ಭರದಿಂದ ಸಾಗಿವೆ. ಹವಾಮಾನ ಮುನ್ಸೂಚನೆ ಪ್ರಕಾರ ಭಾಗಶಃ ಮೋಡ ಕವಿದ ವಾತಾವರಣ ಕಂಡುಬರುತ್ತಿದ್ದು, ಸಂಜೆ ಹಾಗೂ ರಾತ್ರಿ ವೇಳೆ ರಾಜ್ಯದ ಹಲವೆಡೆ ಮಳೆಯಾಗುವ ಮುನ್ಸೂಚನೆಗಳಿವೆ ಎಂದು ವಿವರಿಸಿದರು.