ಗೌರಿ-ಗಣೇಶ ಹಬ್ಬ: ಕೆಎಸ್ಸಾರ್ಟಿಸಿಯಿಂದ 1200 ಹೆಚ್ಚುವರಿ ಬಸ್ ವ್ಯವಸ್ಥೆ
ಸಾಂದರ್ಭಿಕ ಚಿತ್ರ
ಬೆಂಗಳೂರು, ಸೆ.7: ಗೌರಿ ಗಣೇಶ ಹಬ್ಬದ ಪ್ರಯುಕ್ತ ರಾಜ್ಯ ರಸ್ತೆ ಸಾರಿಗೆ ನಿಗಮವು, ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಸೆ.11 ಹಾಗೂ 12ರಂದು ಬೆಂಗಳೂರಿನಿಂದ ವಿವಿಧ ಸ್ಥಳಗಳಿಗೆ 1200 ಹೆಚ್ಚುವರಿ ವಾಹನಗಳ ವಿಶೇಷ ಸಾರಿಗೆ ವ್ಯವಸ್ಥೆ ಮಾಡಲಾಗಿದೆ. ನಂತರ ರಾಜ್ಯದ ಮತ್ತು ಅಂತರರಾಜ್ಯದ ವಿವಿಧ ಸ್ಥಳಗಳಿಂದ ಬೆಂಗಳೂರಿಗೆ ಸೆ.16ರಂದು ವಿಶೇಷ ವಾಹನಗಳನ್ನು ಕಾರ್ಯಾಚರಣೆ ಮಾಡಲಾಗುವುದು.
ಕೆಂಪೇಗೌಡ ಬಸ್ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆಸುಬ್ರಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗಿರಿ, ಬೀದರ್, ತಿರುಪತಿ ಮುಂತಾದ ಸ್ಥಳಗಳಿಗೆ ವಿಶೇಷ ಕಾರ್ಯಾಚರಣೆ ನಡೆಯಲಿದೆ.
ಮೈಸೂರು ರಸ್ತೆ ಬಸ್ ನಿಲ್ದಾಣದಿಂದ ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ, ಮಡಿಕೇರಿ ಮಾರ್ಗದ ಕಡೆ ಕಾರ್ಯಾಚರಣೆ ನಡೆಯಲಿದ್ದು, ತಮಿಳುನಾಡು ಮತ್ತು ಆಂಧ್ರಪ್ರದೇಶ/ತೆಲಂಗಾಣ ಕಡೆಗೆ ಅಂದರೆ ಮಧುರೈ, ಕುಂಭಕೋಣಂ, ತಿರುಚಿ, ಚೆನ್ನೈ, ಕೊಯಮತ್ತೂರ್, ತಿರುಪತಿ, ವಿಜಯವಾಡ, ಹೈದರಾಬಾದ್ ಮುಂತಾದ ಸ್ಥಳಗಳಿಗೆ ಹೋಗುವ ಪ್ರತಿಷ್ಠಿತ ಸಾರಿಗೆಗಳನ್ನು ಶಾಂತಿನಗರದಲ್ಲಿನ ಬೆಂಗಳೂರು ಕೇಂದ್ರ ಘಟಕ-4 ಮತ್ತು ಘಟಕ-2 ರ ಮುಂಭಾಗದಿಂದ ವಿಶೇಷ ಕಾರ್ಯಾಚರಣೆ ಮಾಡಲಾಗುವುದು.
ಬೆಂಗಳೂರು ನಗರದ ಶ್ರೀ ಬಸವೇಶ್ವರ ಬಸ್ ನಿಲ್ದಾಣ, ಜಯನಗರ, ಜಯನಗರ 4ನೇ ಬ್ಲಾಕ್, ಜಾಲಹಳ್ಳಿ ಕ್ರಾಸ್, ನವರಂಗ್(ರಾಜಾಜಿನಗರ), ಮಲ್ಲೇಶ್ವರಂ 18ನೇ ಅಡ್ಡ ರಸ್ತೆ, ಬನಶಂಕರಿ, ಜೀವನ್ ಭೀಮಾನಗರ, ಐಟಿಐ ಗೇಟ್, ಗಂಗಾನಗರ, ಕೆಂಗೇರಿ ಉಪನಗರ, ಮುಂತಾದ ಸ್ಥಳಗಳಿಂದ ಪ್ರಯಾಣಿಕರ ಒತ್ತಡಕ್ಕನುಗುಣವಾಗಿ ಶಿವಮೊಗ್ಗ, ದಾವಣಗೆರೆ, ತಿರುಪತಿ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ಕುಕ್ಕೇಸುಬ್ರಮಣ್ಯ, ಧರ್ಮಸ್ಥಳ ಮುಂತಾದ ಮಾರ್ಗಗಳಿಗೆ ಹೆಚ್ಚುವರಿ ಸಾರಿಗೆ ವ್ಯವಸ್ಥೆ ಕಲ್ಪಿಸಲಾಗಿದೆ.
ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಹೆಚ್ಚುವರಿ ಸಾರಿಗೆಗಳಿಗೆ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸುವ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ಪ್ರಯಾಣಿಕರು ಬಸ್ ನಿಲ್ದಾಣಗಳಿಗೆ ತೆರಳುವ ಮುನ್ನ ಮುಂಗಡ ಕಾಯ್ದಿರಿಸಲಾಗಿರುವ ಟಿಕೇಟುಗಳ ಮೇಲೆ ನಮೂದಿಸಲಾಗಿರುವ ಬಸ್ ನಿಲ್ದಾಣ/ಪಿಕ್ಅಪ್ ಪಾಯಿಂಟ್ನ ಹೆಸರನ್ನು ಗಮನಿಸುವಂತೆ ಕೋರಲಾಗಿದೆ.
ಇ-ಟಿಕೇಟ್ ಬುಕಿಂಗ್ ಅನ್ನು ವೆಬ್ಸೈಟ್ www.ksrtc.in ಮುಖಾಂತರ ಮಾಡಬಹುದಾಗಿದೆ. ಸಾರ್ವಜನಿಕ ಪ್ರಯಾಣಿಕರು ಕರ್ನಾಟಕ ಹಾಗೂ ಅಂತರರಾಜ್ಯದಲ್ಲಿ ಇರುವ 707 ಗಣಕೀಕೃತ ಬುಕಿಂಗ್ ಕೌಂಟರ್ಗಳ ಮೂಲಕ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸಬಹುದಾಗಿದೆ.
ನಾಲ್ಕು ಅಥವಾ ಹೆಚ್ಚು ಪ್ರಯಾಣಿಕರು ಒಟ್ಟಾಗಿ ಮುಂಗಡ ಟಿಕೇಟು ಕಾಯ್ದಿರಿಸಿದ್ದಲ್ಲಿ ಶೇ.5ರಷ್ಟು ರಿಯಾಯಿತಿ ನೀಡಲಾಗುವುದು ಹಾಗೂ ಹೋಗುವ ಬರುವ ಪ್ರಯಾಣದ ಟಿಕೇಟ್ನ್ನು ಒಟ್ಟಿಗೆ ಕಾಯ್ದಿರಿಸಿದಾಗ ಬರುವ ಪ್ರಯಾಣ ದರದಲ್ಲಿ ಶೇ.10ರಷ್ಟು ರಿಯಾಯಿತಿ ನೀಡಲಾಗುವುದು.
ನೆರೆ ರಾಜ್ಯಗಳಾದ ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ, ಕೇರಳ, ಗೋವಾ, ಮಹಾರಾಷ್ಟ್ರ ಹಾಗೂ ಪುದುಚೆರಿ ಮುಂತಾದ ಪ್ರಮುಖ ನಗರಗಳಲ್ಲಿ ನಿಗಮದ ಮುಂಗಡ ಆಸನಗಳನ್ನು ಕಾಯ್ದಿರಿಸುವ ಕೌಂಟರ್ಗಳು ಇದ್ದು, ಇವುಗಳ ಮೂಲಕ ಸಹ ಮುಂಗಡವಾಗಿ ಆಸನಗಳನ್ನು ನಿಗಮದ ಸಾರಿಗೆಗಳಿಗೆ ಕಾಯ್ದಿರಿಸಬಹುದಾಗಿದೆ.
ಕಾರ್ಯಾಚರಣೆ ಮಾಡಲಾಗುವ ಹೆಚ್ಚುವರಿ ಸಾರಿಗೆಗಳು, ಅವುಗಳು ಹೊರಡುವ ಸ್ಥಳ ಹಾಗೂ ವೇಳಾ ವಿವರಗಳನ್ನು ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸುವ ಅಂತರ್ಜಾಲ ವ್ಯವಸ್ಥೆಯಲ್ಲಿ ಹಾಗೂ ಕೆಎಸ್ಸಾರ್ಟಿಸಿ ನಿಗಮದ ವೆಬ್ಸೈಟ್ನಲ್ಲಿ ಸಾರ್ವಜನಿಕ ಮಾಹಿತಿಗಾಗಿ ಒದಗಿಸಲಾಗಿದೆ ಹಾಗೂ ಸದರಿ ಹೆಚ್ಚುವರಿ ಸಾರಿಗೆಗಳಲ್ಲಿ ಸಂಚರಿಸುವ ಪ್ರಯಾಣಿಕರು ಕಾಯ್ದಿರಿಸುವ ಮುಂಗಡ ಚೀಟಿಗಳಲ್ಲೂ ವಾಹನ ಹೊರಡುವ ಸ್ಥಳದ ವಿವರ ನಮೂದಿಸಲಾಗಿದೆ.
ಅಲ್ಲದೇ, ನಿಗಮದ ಕಾರ್ಯಾಚರಣೆ ವ್ಯಾಪ್ತಿಯಲ್ಲಿನ ಎಲ್ಲ ತಾಲೂಕು, ಜಿಲ್ಲಾ ಬಸ್ ನಿಲ್ದಾಣಗಳಿಂದ ಸಂಚಾರ ಒತ್ತಡಕ್ಕನುಗುಣವಾಗಿ ವಿಶೇಷ ಸಾರಿಗೆಗಳ ಕಾರ್ಯಾಚರಣೆ ಮಾಡಲಾಗುವುದು ಎಂದು ಕೆಎಸ್ಸಾರ್ಟಿಸಿ ಪ್ರಕಟನೆ ತಿಳಿಸಿದೆ.