ರಾಜ್ಯದ ಹಲವೆಡೆ ಸೆ.10 ರಿಂದ ಭಾರಿ ಮಳೆ ಸಾಧ್ಯತೆ
ಬೆಂಗಳೂರು, ಸೆ.8: ದಕ್ಷಿಣ ಒಳನಾಡಿನ ಕೆಲ ಜಿಲ್ಲೆಗಳು ಸೇರಿದಂತೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಪ್ರದೇಶಗಳಲ್ಲಿ ಸೆ.10 ರಿಂದ ಸಾಧಾರಣದಿಂದ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ತಮಿಳುನಾಡಿನಲ್ಲಿ ನೈಋತ್ಯ ಮುಂಗಾರು ಚುರುಕಾಗಲಿದ್ದು, ಇದರ ಪ್ರಭಾವದಿಂದ ರಾಜ್ಯದಲ್ಲೂ ಮಳೆ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ. ಒಂದು ವಾರದಿಂದ ರಾಜ್ಯಾದ್ಯಂತ ಮುಂಗಾರು ಕ್ಷೀಣವಾಗಿದ್ದು, ಕರಾವಳಿಯ ಕೆಲ ಪ್ರದೇಶಗಳಲ್ಲಷ್ಟೆ ತುಂತುರು, ಸಾಧಾರಣ ಮಳೆಯಾಗುತ್ತಿದೆ.
ಬೆಂಗಳೂರು ನಗರ ಸೇರಿ ದಕ್ಷಿಣ ಒಳನಾಡು, ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿದ್ದು ಬಿಸಿಲ ಬೇಗೆ ಹೆಚ್ಚುತ್ತಿದೆ. ಜೂ.1ರಿಂದ ಸೆ.7ರವರೆಗಿನ ಮಳೆ ಪ್ರಮಾಣ ಗಮನಿಸಿದರೆ ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ, ರಾಯಚೂರು, ಬಾಗಲಕೋಟೆ, ಗದಗ, ಕೊಪ್ಪಳ, ಬಳ್ಳಾರಿ, ಹಾವೇರಿ, ತುಮಕೂರು, ಮಂಡ್ಯ, ಬೆಂಗಳೂರು ನಗರ ಹಾಗೂ ಗ್ರಾಮಾಂತರ, ಚಿಕ್ಕಬಳ್ಳಾಪುರ ಹಾಗೂ ಕೋಲಾರ ಜಿಲ್ಲೆಗಳ ಅಂದಾಜು 89 ತಾಲೂಕುಗಳಲ್ಲಿ ಮಳೆ ಕೊರತೆಯಾಗಿದೆ ಎಂದು ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಮಾಹಿತಿ ನೀಡಿದೆ.