ಹನೂರು: ಹಿರಿಯ ಕಾಂಗ್ರೆಸ್ ಮುಖಂಡ ದೊಡ್ಡಕುನ್ನನಾಯ್ಕ ನಿಧನ
ಹನೂರು,ಸೆ.11: ಸಮೀಪದ ಬಂಡಳ್ಳಿ ಗ್ರಾಮದ ಕಾಂಗ್ರೆಸ್ ಹಿರಿಯ ಮುಖಂಡ ಹಾಗೂ ಪಿಎಲ್ಡಿ ಬ್ಯಾಂಕ್ ನಿರ್ದೇಶಕರಾಗಿದ್ದ ದೊಡ್ಡಕುನ್ನನಾಯ್ಕ (65) ಅವರು ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಮಂಗಳವಾರ ನಿಧನರಾಗಿದ್ದಾರೆ.
ಮೃತರು ಕಳೆದ ಹಲವು ತಿಂಗಳಿನಿಂದ ಹೃದಯ ಹಾಗೂ ಕಿಡ್ನಿಗೆ ಸಂಬಂಧಿಸಿದಂತೆ ಅನಾರೋಗ್ಯದಿಂದ ಬಳಲುತ್ತಿದ್ದು, ಚಿಕಿತ್ಸೆ ಪಡೆಯುತ್ತಿದ್ದರು. ಸೋಮವಾರ ರಾತ್ರಿ ತೀವ್ರ ನೋವು ಕಾಣಿಸಿಕೊಂಡಿದ್ದು, ಅವರನ್ನು ಸಮೀಪದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಿ ನಂತರ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮಂಗಳವಾರ 3.30ರ ವೇಳೆಗೆ ನಿಧನರಾಗಿದ್ದಾರೆ.
ಮೃತರಿಗೆ ಪತ್ನಿ ಸೇರಿದಂತೆ ಒಬ್ಬ ಪುತ್ರ, ಇಬ್ಬರು ಗಂಡು ಮಕ್ಕಳಿದ್ದಾರೆ. ಮೃತರ ಅಂತ್ಯಕ್ರಿಯೆ ಸೆ.12ರಂದು ಗ್ರಾಮದ ರುದ್ರಭೂಮಿಯಲ್ಲಿ ನೆರವೇರಲಿದೆ ಎಂದು ಕುಟುಂಬದ ಮೂಲಗಳಿಂದ ತಿಳಿದು ಬಂದಿದೆ.
ಸಂತಾಪ: ಮೃತರ ನಿಧನಕ್ಕೆ ಶಾಸಕ ಆರ್.ನರೇಂದ್ರ ಸಂತಾಪ ವ್ಯಕ್ತಪಡಿಸಿದ್ದು, ಬುಧವಾರ ಗ್ರಾಮಕ್ಕೆ ತೆರಳಿ ಅಂತಿಮ ದರ್ಶನ ಪಡೆಯಲಿದ್ದಾರೆ.