ಅಲ್ಪಸಂಖ್ಯಾತರ ಅಭಿವೃದ್ಧಿ ಅನುದಾನಗಳ ಬಳಕೆ ಪರಿಶೀಲಿಸಿ: ಅಪರ ಜಿಲ್ಲಾಧಿಕಾರಿ ಸೂಚನೆ

ಮಂಗಳೂರು, ಆ.21: ಅಲ್ಪಸಂಖ್ಯಾತರ ಕಲ್ಯಾಣಕ್ಕಾಗಿ ವಿವಿಧ ಯೋಜನೆಯಡಿ ಬಿಡುಗಡೆಯಾಗುವ ಅನುದಾನಗಳು ಸಮರ್ಪಕವಾಗಿ ಬಳಕೆಯಾಗಿರುವ ಬಗ್ಗೆ ಮತ್ತು ಕಾಮಗಾರಿಗಳು ಗುಣಮಟ್ಟದಲ್ಲಿ ಅನುಷ್ಠಾನ ಗೊಂಡಿರುವ ಬಗ್ಗೆ ನಿಖರವಾಗಿ ಪರಿಶೀಲಿಸುವಂತೆ ಅಪರ ಜಿಲ್ಲಾಧಿಕಾರಿ ಕೆ. ರಾಜು ಸೂಚಿಸಿದ್ದಾರೆ.
ದ.ಕ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಗುರುವಾರ ನಡೆದ ಅಲ್ಪಸಂಖ್ಯಾತರ ಕಲ್ಯಾಣಕ್ಕಾಗಿ ಪ್ರಧಾನಮಂತ್ರಿಗಳ ಹೊಸ 15 ಅಂಶಗಳ ಹಾಗೂ ಕೇಂದ್ರ ಪುರಸ್ಕೃತ ಕಾರ್ಯಕ್ರಮಗಳ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಅಲ್ಪಸಂಖ್ಯಾತರ ಶೈಕ್ಷಣಿಕ ಹಾಗೂ ಉದ್ಯೋಗ ಯೋಜನೆಯಡಿ ಫಲಾನುಭವಿಗಳಿಗೆ ಹಾಗೂ ವಿವಿಧ ಸಂಸ್ಥೆಗಳಿಗೆ ಅನುದಾನ ಬಿಡುಗಡೆ ಮಾಡಲಾಗುತ್ತಿದೆ. ಅದರ ಫಲಾನುಭವಿಗಳು ವೆಚ್ಚವನ್ನು ಸಮರ್ಪಕವಾಗಿ ಬಳಸುವಂತೆ ನಿಗಾ ವಹಿಸಬೇಕು. ಅಲ್ಪಸಂಖ್ಯಾತ ಕಲ್ಯಾಣ ಕಾರ್ಯಕ್ರಮಗಳ ಬಗ್ಗೆ ವಿವಿಧ ಗ್ರಾಮಸಭೆಗಳಲ್ಲಿ ಮಾಹಿತಿ ನೀಡಬೇಕು. ಫಲಾನುಭವಿಗಳಿಗೆ ಯೋಜನೆಗಳ ಬಗ್ಗೆ ಹೆಚ್ಚು ಪ್ರಚಾರ ಮಾಡಬೇಕು ಎಂದು ಕೆ.ರಾಜು ತಿಳಿಸಿದರು.
ಅಲ್ಪಸಂಖ್ಯಾತ ಇಲಾಖೆಯ ಅಧೀನದಲ್ಲಿರುವ ಶಿಕ್ಷಣ ಸಂಸ್ಥೆಗಳಿಗೆ ಗುಣಮಟ್ಟದ ಶಿಕ್ಷಣ ದೊರಕಿಸಲು ಆದ್ಯತೆ ನೀಡಬೇಕು. ಉತ್ತಮ ಫಲಿತಾಂಶ ಬರುವಂತೆ ವಹಿಸಬೇಕು. ಇಲ್ಲಿನ ಶೈಕ್ಷಣಿಕ ಗುಣಮಟ್ಟವನ್ನು ಆಗ್ಗಿಂದಾಗೆ ಪರಿಶೀಲಿಸುವಂತೆ ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕರಿಗೆ ಅವರು ಸೂಚಿಸಿದರು.
ವಸತಿ ಶಾಲೆ ಹಾಗೂ ಮೌಲಾನಾ ಆಝಾದ್ ಮಾದರಿ ಶಾಲೆಗಳಲ್ಲಿ ದಾಖಲಾತಿಗಳನ್ನು ಹೆಚ್ಚಿಸಲು ಪರಿಣಾಮಕಾರಿ ಯಾಗಿ ಕ್ರಮ ಕೈಗೊಳ್ಳಬೇಕು. ಜಿಲ್ಲೆಯ 13 ಮೌಲಾನಾ ಆಜಾದ್ ಮಾದರಿ ಶಾಲೆಗಳಲ್ಲಿ 2,700 ಸೀಟುಗಳಿದ್ದರೂ, ಕೇವಲ 1069 ಸೀಟುಗಳು ಭರ್ತಿಯಾಗಿದೆ. ಅಲ್ಪಸಂಖ್ಯಾತರ ಹಾಸ್ಟೆಲ್‌ಗಳಲ್ಲಿ ತ್ವರಿತವಾಗಿ ಸೀಟುಗಳನ್ನು ಭರ್ತಿ ಮಾಡಬೇಕು ಕೆ.ರಾಜು ಸೂಚಿಸಿದರು.
ಕಳೆದ ವರ್ಷ ಜಿಲ್ಲೆಯಲ್ಲಿ 63,102 ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ 16.18 ಕೋ.ರೂ. ಮೊತ್ತದ ವಿದ್ಯಾರ್ಥಿವೇತನ ಬಿಡುಗಡೆ ಮಾಡಲಾಗಿದೆ. ಇನ್ನೂ 13,924 ಮಂದಿಗೆ ಮಂಜೂರಾತಿ ಬಾಕಿ ಇದೆ. ವಿದೇಶಿ ಅಧ್ಯಯನ ವಿದ್ಯಾರ್ಥಿ ವೇತನ ಯೋಜನೆಯಡಿ 120 ವಿದ್ಯಾರ್ಥಿಗಳಿಗೆ 11.39 ಕೋ.ರೂ. ಬಿಡುಗಡೆ ಮಾಡಲಾಗಿದೆ. ಪ್ರಸಕ್ತ ವರ್ಷದಲ್ಲಿ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ನಡೆಯುತ್ತಿದ್ದು, ಸೆಪ್ಟೆಂಬರ್ 30ರವರೆಗೆ ಕಾಲಾವಕಾಶ ಇದೆ ಎಂದು ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.
ಕ್ರಿಶ್ಚಿಯನ್ ಸಮುದಾಯದ ಅಭಿವೃದ್ಧಿ ಯೋಜನೆಯಡಿ 2024-25ನೇ ಸಾಲಿನಲ್ಲಿ ಜಿಲ್ಲೆಯಲ್ಲಿ ಚರ್ಚ್ ದುರಸ್ತಿ, ಕಾಂಪೌಂಡ್ ನಿರ್ಮಾಣ, ಸ್ಮಶಾನ ಭೂಮಿ ಅಭಿವೃದ್ಧಿ ಯೋಜನೆಗಳಿಗೆ 86 ಸಂಸ್ಥೆಗಳಿಗೆ 12.82 ಕೋ.ರೂ ಬಿಡುಗಡೆ ಮಾಡಲಾಗಿದೆ. ಜೈನ ಬಸದಿ ಮತ್ತು ಸಮುದಾಯ ಭವನಗಳ ಅಭಿವೃದ್ಧಿಗೆ 21 ಸಂಸ್ಥೆಗಳಿಗೆ 5.52 ಕೋ.ರೂ. ಹಾಗೂ ಮದ್ರಸಗಳಿಗೆ ಕಂಪ್ಯೂಟರ್ ಹಾಗೂ ಇನ್ನಿತರ ಸೌಕರ್ಯಕ್ಕಾಗಿ 19 ಸಂಸ್ಥೆಗಳಿಗೆ 95 ಲಕ್ಷ ರೂ.ಬಿಡುಗಡೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದರು.
ಕರ್ನಾಟಕ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಡಿ ಕಳೆದ ವರ್ಷ ಜಿಲ್ಲೆಯಲ್ಲಿ 1,066 ಫಲಾನುಭವಿಗಳಿಗೆ 10.67 ಕೋ.ರೂ. ಮೊತ್ತದ ಸೌಲಭ್ಯಗಳನ್ನು ವಿತರಿಸಲಾಗಿದೆ ಎಂದು ನಿಗಮದ ಅಧಿಕಾರಿಗಳು ತಿಳಿಸಿದರು. ಅಲ್ಪಸಂಖ್ಯಾತರ ಕಾಲನಿ ಅಭಿವೃದ್ಧಿ ಯೋಜನೆಯಡಿ ಜಿಲ್ಲೆಯ 6 ವಿಧಾನಸಭಾ ಕ್ಷೇತ್ರಗಳಲ್ಲಿ ವಿವಿಧ ಕಾಮಗಾರಿಗಳಿಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದ್ದು, ಕಾಮಗಾರಿ ಪ್ರಗತಿಯಲ್ಲಿದೆ ಎಂದರು.
ಸಭೆಯಲ್ಲಿ ನಗರಾಭಿವೃದ್ಧಿ ಯೋಜನಾ ನಿರ್ದೇಶಕ ಸಂತೋಷ್ ಕುಮಾರ್, ಜಿಪಂ ಉಪ ಕಾರ್ಯದರ್ಶಿ ಜಯಲಕ್ಷ್ಮಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಜಿನೇಂದ್ರ ಕೋಟ್ಯಾನ್, ಸಮಿತಿ ಸದಸ್ಯರಾದ ಸುಭಾಷ್ ಚೌಟ, ಮನ್ಸೂರ್ ಆಝಾದ್, ಅಫ್ತಾಬ್ ಹುಸೇನ್, ಪೀಟರ್, ವಿಸ್ತರಣಾಧಿಕಾರಿ ಮುಹಮ್ಮದ್ ಫಾರೂಕ್ ಮತ್ತಿತರರು ಉಪಸ್ಥಿತರಿದ್ದರು.







