ಗ್ಯಾರಂಟಿ ಫಲಾನುಭವಿಗಳಿಗೆ ವಿಳಂಬವಿಲ್ಲದೆ ಸೌಲಭ್ಯ ತಲುಪಿಸಿ: ಭರತ್ ಮುಂಡೋಡಿ

ಮಂಗಳೂರು, ಸೆ.10: ರಾಜ್ಯ ಸರಕಾರದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನವನ್ನು ಸಮರ್ಪಕವಾಗಿ ಮಾಡಬೇಕು. ಅರ್ಹ ಫಲಾನುಭವಿಗಳಿಗೆ ಯೋಜನೆಗಳ ಸೌಲಭ್ಯ ತಲುಪಿಸಲು ವಿಳಂಬ ಮಾಡಬಾರದು. ಈ ನಿಟ್ಟಿನಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಸೂಕ್ತ ಕ್ರಮವಹಿಸಬೇಕು ಎಂದು ದ.ಕ.ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆ ಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ಭರತ್ ಮುಂಡೋಡಿ ಹೇಳಿದ್ದಾರೆ.
ದ.ಕ.ಜಿಪಂ ಸಭಾಂಗಣದಲ್ಲಿ ಬುಧವಾರ ನಡೆದ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಫಲಾನುಭವಿಗಳಿಗೆ ಸೌಲಭ್ಯಗಳನ್ನು ನಿಗದಿತ ಸಮಯದಲ್ಲೇ ತಲುಪಿಸಬೇಕು. ಯೋಜನೆಗಳ ಸದುಪಯೋಗವನ್ನು ಎಲ್ಲಾ ಅರ್ಹ ಫಲಾನುಭವಿಗಳಿಗೆ ಮುಟ್ಟಿಸಲು ಅಧಿಕಾರಿಗಳು ಕ್ರಮವಹಿಸಬೇಕು. ತಾಲೂಕು ವ್ಯಾಪ್ತಿಗೆ ಒಳಪಡುವ ಜನರಿಗೆ ಯೋಜನೆಗಳ ಸೌಲಭ್ಯ ದೊರಕುತ್ತಿದೆಯೇ ಎಂಬ ಮಾಹಿತಿ ಪಡೆದು, ಸೌಲಭ್ಯಗಳು ಸಿಗದೇ ಇದ್ದಲ್ಲಿ ಸಂಬಂಧಿಸಿದ ಅಧಿಕಾರಿಗಳ ಗಮನಕ್ಕೆ ತರಬೇಕು ಎಂದು ಭರತ್ ಮುಂಡೋಡಿ ಸೂಚಿಸಿದರು.
ಗೃಹಲಕ್ಷ್ಮಿ ಯೋಜನೆಯಡಿ ಪಡಿತರ ಚೀಟಿ ಹೊಂದಿರುವ ಫಲಾನುವಿಭಗಳ ಪೈಕಿ ಆಗಸ್ಟ್ 16ರಿಂದ ಸೆಪ್ಟೆಂಬರ್ 8ರವರೆಗೆ 184 ಫಲಾನುಭವಿಗಳು ಹೆಸರು ನೋಂದಾಯಿಸಿಕೊಂಡಿದ್ದಾರೆ. ಒಟ್ಟಾರೆಯಾಗಿ ಈವರೆಗೆ 3,79,452 ಫಲಾನುಭವಿಗಳು ಯೋಜನೆಗೆ ನೋಂದಾಯಿಸಿಕೊಂಡಿರುತ್ತಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಸಭೆಗೆ ಮಾಹಿತಿ ನೀಡಿದರು.
ಎಲ್ಲಾ ನ್ಯಾಯಬೆಲೆ ಅಂಗಡಿಗಳಲ್ಲಿ ಅನ್ನ ಭಾಗ್ಯ ಯೋಜನೆಯ ಬ್ಯಾನರ್‌ಗಳನ್ನು ಅಳವಡಿಸಿಲ್ಲ. ಅದನ್ನು ತಕ್ಷಣ ಸರಬರಾಜು ಮಾಡಬೇಕು ಎಂದು ಮುಲ್ಕಿ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಯ ಅನುಷ್ಠ್ಠಾನ ಸಮಿತಿಯ ಅಧ್ಯಕ್ಷರು ಒತ್ತಾಯಿಸಿದರು.
ಕೌಶಲ ತರಬೇತಿ ಕಾರ್ಯಕ್ರಮಗಳನ್ನು ಮಾಡುವುದರಿಂದ ಯುವಜನತೆಯ ಮುಂದಿನ ಭವಿಷ್ಯಕ್ಕೆ ಅನುಕೂಲವಾ ಗುತ್ತದೆ. ಹಾಗೇ ಉದ್ಯೋಗ ಇಲಾಖೆ ಹಾಗೂ ಜಿಲ್ಲಾ ಹಾಗೂ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ವತಿಯಿಂದ ಜಿಲ್ಲೆಯಲ್ಲಿ ಉದ್ಯೋಗ ಮೇಳ ಮಾಡಲು ಸೂಚಿಸಿದರು.
ಸಭೆಯಲ್ಲಿ ದ.ಕ.ಜಿಪಂ ಸಿಇಒ ನರ್ವಾಡೆ ನಾಯಕ ಕಾರ್ಭಾರಿ, ಜಿಪಂ ಮುಖ್ಯ ಯೋಜನಾಧಿಕಾರಿ ಸಂಧ್ಯಾ ಕೆ.ಎಸ್., ಜಿಲ್ಲಾ ಹಾಗೂ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಉಪಸ್ಥಿತರಿದ್ದರು.







