ಸಮನ್ವಯದಿಂದ ಕಾರ್ಯಾಚರಿಸಲು ದ.ಕ. ಜಿಲ್ಲಾಧಿಕಾರಿ ದರ್ಶನ್ ಸೂಚನೆ

ಮಂಗಳೂರು, ಸೆ.11: ಮಾದಕ ದ್ರವ್ಯ ಚಟುವಟಿಕೆಗಳನ್ನು ನಿಯಂತ್ರಿಸಲು ಮತ್ತು ಜಾಗೃತಿ ಮೂಡಿಸಲು ವಿವಿಧ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಲು ಜಿಲ್ಲಾಧಿಕಾರಿ ಎಚ್.ವಿ. ದರ್ಶನ್ ಸೂಚಿಸಿದ್ದಾರೆ.
ದ.ಕ.ಜಿಲ್ಲಾಧಿಕಾರಿ ಕಚೇರಿಯಲ್ಲಿ ಬುಧವಾರ ನಡೆದ ಮಾದಕ ದ್ರವ್ಯ ಸಮನ್ವಯದ ದ.ಕ. ಜಿಲ್ಲಾ ಮಟ್ಟದ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಮಾದಕ ದ್ರವ್ಯ ಕಳ್ಳಸಾಗಣೆ ಮತ್ತು ದುರುಪಯೋಗವನ್ನು ನಿಯಂತ್ರಿಸಲು ಕೇಂದ್ರ ಮತ್ತು ರಾಜ್ಯ ಸರಕಾರದ ವಿವಿಧ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಲು ಈ ಸಮಿತಿ ರಚಿಸಲಾಗಿದೆ. ಈ ನಿಟ್ಟಿನಲ್ಲಿ ವಿವಿಧ ಇಲಾಖೆಗಳ ಹಂತದಲ್ಲಿ ನಡೆಯುವ ತಪಾಸಣೆ ಮತ್ತು ಪರಿಶೀಲನೆಗಳನ್ನು ಕಟ್ಟುನಿಟ್ಟಾಗಿ ನಿರ್ವಹಿಸಿ ವರದಿ ಸಲ್ಲಿಸಬೇಕು ಎಂದು ಡಿಸಿ ಅಧಿಕಾರಿಗಳಿಗೆ ನಿರ್ದೇಶಿಸಿದರು.
ಮಾದಕ ದ್ರವ್ಯಗಳ ಅಪಾಯ ಮತ್ತು ದಂಡನೆಗಳ ಕುರಿತು ಜಾಗೃತಿ ಮತ್ತು ಅರಿವು ಕಾರ್ಯಕ್ರಮಗಳನ್ನು ಶಾಲಾ ಕಾಲೇಜುಗಳಲ್ಲಿ ಸ್ಥಳೀಯ ಪೊಲೀಸ್ ಅಧಿಕಾರಿಗಳ ಸಹಕಾರ ಪಡೆದು ಆಯೋಜಿಸಬೇಕು. ಪ್ರವಾಸೋದ್ಯಮ ಇಲಾಖೆ ವತಿಯಿಂದ ಪ್ರವಾಸಿ ತಾಣಗಳಲ್ಲಿ ಮಾದಕ ಚಟುವಟಿಕೆಗಳ ಬಗ್ಗೆ ಜಾಗೃತಿ ಮೂಡಿಸಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು.
ಪದವಿ ಕಾಲೇಜುಗಳಲ್ಲಿ ಸ್ಥಾಪಿಸಲಾಗಿರುವ ಮಾದಕದ್ರವ್ಯ ವಿರೋಧಿ ಸಮಿತಿಗಳನ್ನು ಸಕ್ರಿಯಗೊಳಿಸಬೇಕು. ಸಂಶಯಾಸ್ಪದ ವಿದ್ಯಾರ್ಥಿಗಳ ಚಟುವಟಿಕೆಗಳ ಮೇಲೆ ನಿಗಾ ಇಡಬೇಕು ಎಂದು ಕಾಲೇಜು ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.
ಅಂಚೆ ಮತ್ತು ಕೆಎಸ್ಸಾರ್ಟಿಸಿ ಪಾರ್ಸಲ್‌ಗಳನ್ನು ಕೂಲಂಕಷವಾಗಿ ಪರಿಶೀಲಿಸಬೇಕು. ಸಂಶಯಾಸ್ಪದ ಪಾರ್ಸಲ್‌ಗಳ ಬಗ್ಗೆ ಕೂಡಲೇ ಪೊಲೀಸರಿಗೆ ಮಾತಿ ನೀಡಬೇಕು. ಮಾದಕ ದ್ರವ್ಯ ಚಟುವಟಿಕೆಗಳು ನಡೆಯುವ ಸಂಶಯಾಸ್ಪದ ಪ್ರದೇಶಗಳಲ್ಲಿ ಸಿಸಿಟಿವಿ ಅಳವಡಿಸಲು ಜಿಲ್ಲಾಧಿಕಾರಿ ನಿರ್ದೇಶಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣ್ ಕೆ. ಮಾತನಾಡಿ ಜಿಲ್ಲಾ ಮಟ್ಟದ ಸಮಿತಿಯಲ್ಲಿರುವ ಇಲಾಖೆಗಳು ತಮ್ಮ ವ್ಯಾಪ್ತಿಯ ಸಾರ್ವಜನಿಕರಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ನಿರಂತರವಾಗಿ ನಡೆಸಬೇಕು. ಈ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಅಗತ್ಯ ನೆರವು ನೀಡಲಿದೆ ಎಂದರು.
ಸಭೆಯಲ್ಲಿ ಉಪ ಪೊಲೀಸ್ ಆಯುಕ್ತ ಮಿಥುನ್ ಎಚ್.ಎನ್. ಮತ್ತಿತರ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.







