ಮಂಗಳೂರು: ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ

ಮಂಗಳೂರು: ಎಲ್ಲರಿಗೂ ಸಮಾನ ಹಕ್ಕು ಮತ್ತು ಕರ್ತವ್ಯಗಳನ್ನು ನೀಡಿದ ಈ ದೇಶದ ಪ್ರಜಾಪ್ರಭುತ್ವವನ್ನು ಗೌರವಿಸಿ ಅದರಂತೆ ನಡೆಯುವುದು ನಮ್ಮೆಲ್ಲರ ಆದ್ಯತೆಯಾಗಬೇಕು ಎಂದು ವಿಧಾನ ಪರಿಷತ್ ಶಾಸಕ ಐವನ್ ಡಿಸೋಜ ಹೇಳಿದ್ದಾರೆ.
ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಸೋಮವಾರ ನಡೆದ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ನಾಗರಿಕರಿಗೆ ಸಾಮಾಜಿಕ, ಆರ್ಥಿಕ ಹಕ್ಕುಗಳನ್ನು ನೀಡುವ ಮೂಲಕ ಪ್ರತಿಯೊಬ್ಬ ಪ್ರಜೆಯ ಘನತೆ ಗೌರವವನ್ನು ಸಂವಿಧಾನವು ಎತ್ತಿ ಹಿಡಿದಿದೆ. ಈ ನಿಟ್ಟಿನಲ್ಲಿ ಪ್ರಜಾಪ್ರಭುತ್ವದ ಪ್ರತಿಯೊಂದು ಕರ್ತವ್ಯಗಳನ್ನು ಪಾಲಿಸಿಕೊಂಡು ದೇಶದ ಏಳಿಗೆಗೆ ಸಹಕರಿಸಬೇಕು ಎಂದು ಹೇಳಿದರು.
ದ.ಕ.ಜಿಲ್ಲಾಧಿಕಾರಿ ಎಚ್.ವಿ. ದರ್ಶನ್ ಸಂವಿಧಾನ ಪೀಠಿಕೆ ಬೋಧಿಸಿದರು. ಕಾರ್ಯಕ್ರಮದಲ್ಲಿ ದ.ಕ. ಜಿಲ್ಲಾ ಉಸ್ತು ವಾರಿ ಕಾರ್ಯದರ್ಶಿ ತುಳಸಿ ಮದ್ದಿನೇನಿ, ಜಿಪಂ ಸಿಇಒ ನರ್ವಾಡೆ ನಾಯಕ್ ಕಾರ್ಬಾರಿ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಹೇಮಲತಾ ಮತ್ತಿತರರು ಉಪಸ್ಥಿತರಿದ್ದರು. ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಸುರೇಶ್ ಅಡಿಗ ಸ್ವಾಗತಿಸಿದರು.
*ಈ ಸಂದರ್ಭ ಕಳೆದ ಸಾಲಿನ ಎಸೆಸೆಲ್ಸಿ ಪರೀಕ್ಷೆಯಲ್ಲಿ ರಾಜ್ಯದ ವಸತಿ ಶಾಲೆಗಳಲ್ಲಿ ಮೊದಲ ಸ್ಥಾನ ಪಡೆದ ಕೆಮ್ಮಾಜೆ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲ ಪುಟ್ಟಸ್ವಾಮಿ ಅವರನ್ನು ಸನ್ಮಾನಿಸಲಾಯಿತು.
*ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ನ.26ರಂದು ಜಿಲ್ಲೆಯ ಎಲ್ಲಾ ಶಾಲಾ ಕಾಲೇಜು ಗಳಲ್ಲಿ ನಡೆಯುವ ಚಿತ್ರಕಲೆ ಮತ್ತು ಭಾಷಣ ಸ್ಪರ್ಧೆಗಳಿಗೆ ಚಾಲನೆ ನೀಡಲಾಯಿತು.
*ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ಜಿಪಂ ಕಚೇರಿಯಿಂದ ಪುರಭವನದವರೆಗೆ ನಡೆದ ಸೈಕಲ್ ರ್ಯಾಲಿಗೆ ಜಿಲ್ಲಾಧಿಕಾರಿ ಹಸಿರು ನಿಶಾನೆ ತೋರಿದರು.







