ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ SDPI ಸ್ಪರ್ಧೆ: ಪಕ್ಷದ ಸಭೆಯಲ್ಲಿ ತೀರ್ಮಾನ

ಮಂಗಳೂರು: ಮುಂಬರುವ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯ ವಿಶೇಷ ಮತ್ತು ಮಹತ್ವದ ಸಭೆಯು ಇಂದು ಬಿ ಸಿ ರೋಡಿನ ಪಕ್ಷದ ಕಚೇರಿಯಲ್ಲಿ ರಾಜ್ಯಾಧ್ಯಕ್ಷರಾದ ಅಬ್ದುಲ್ ಮಜೀದ್ ಅವರ ನೇತೃತ್ವದಲ್ಲಿ ನಡೆಯಿತು.
ಲೋಕಸಭಾ ಚುನಾವಣೆಯಲ್ಲಿ ದೇಶಾದ್ಯಂತ ಪಕ್ಷವು ಕೈಗೊಂಡ ನಿರ್ಧಾರಗಳನ್ನು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಇಲ್ಯಾಸ್ ಮಹಮ್ಮದ್ ತುಂಬೆ ವಿವರಿಸಿದರು.
ಮುಂಬರುವ ಲೋಕಸಭಾ ಚುನಾವಣೆಗೆ ಪಕ್ಷದ ಅಭ್ಯರ್ಥಿ ಆಯ್ಕೆ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಚರ್ಚೆ ನಡೆದು ದ.ಕ ಲೋಕಸಭಾ ಕ್ಷೇತ್ರದಲ್ಲಿ ಸ್ಫರ್ದಿಸುವ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳಲಾಗಿದೆ. ಹಲವಾರು ಅಭ್ಯರ್ಥಿಗಳ ಹೆಸರು ಪ್ರಸ್ತಾವನೆಗೆ ಬಂದಿದ್ದು, ಈ ವಿಚಾರದಲ್ಲಿ ನಾಯಕರಿಂದ ಪೂರಕ ಅಭಿಪ್ರಾಯ ವ್ಯಕ್ತವಾಗಿ ಮುಂದಿನ ದಿನಗಳಲ್ಲಿ ಅಂತಿಮ ತೀರ್ಮಾನವನ್ನು ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಕೈಗೊಳ್ಳಲಾಗುವುದು ಎಂದು ಅಬ್ದುಲ್ ಮಜೀದ್ ತಿಳಿಸಿದ್ದಾರೆ.
ಸಭೆಯಲ್ಲಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಅಶ್ರಫ್, ರಾಷ್ಟ್ರೀಯ ಕಾರ್ಯದರ್ಶಿಗಳಾದ ರಿಯಾಝ್ ಫರಂಗಿಪೇಟೆ ಮತ್ತು ಅಲ್ಫೋನ್ಸ್ ಫ್ರಾಂಕೋ, ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಅಬ್ದುಲ್ ಲತೀಫ್, ಅಬ್ದುಲ್ ಮಜೀದ್ ತುಂಬೆ, ರಾಜ್ಯ ಚುನಾವಣಾ ಉಸ್ತುವಾರಿ ಅಬ್ದುಲ್ ಹನ್ನಾನ್ ಹಾಗೂ ಇತರ ರಾಜ್ಯ ಸಮಿತಿ ನಾಯಕರು, ಜಿಲ್ಲಾ ಪದಾಧಿ ಕಾರಿಗಳು, ಜಿಲ್ಲಾ ಸಮಿತಿ ಸದಸ್ಯರು, ಕ್ಷೇತ್ರ ಸಮಿತಿಯ ಅಧ್ಯಕ್ಷರು, ಕಾರ್ಯದರ್ಶಿಗಳು ಭಾಗವಹಿಸಿದ್ದರು. ಜಿಲ್ಲಾಧ್ಯಕ್ಷರಾದ ಅನ್ವರ್ ಸಾದತ್ ಸ್ವಾಗತಿಸಿದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಶ್ರಫ್ ಅಡ್ಡೂರು ವಂದಿಸಿದರು.







