ಮಂಗಳೂರು| ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ಮಹಿಳೆ ಸೆರೆ

ಮಂಗಳೂರು: ಮನೆ ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ಹೊಳೆನರಸೀಪುರ ಮೂಲದ ಶಿವಾಗಮಿ ಎಂಬಾಕೆಯನ್ನು ನಗರದ ಗೋರಿಗುಡ್ಡ್ಡದಲ್ಲಿ ಕಂಕನಾಡಿ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಈಕೆಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ.
ಬುಧವಾರ ಬೆಳಗ್ಗೆ 9:45ರ ವೇಳೆಗೆ ಗೋರಿಗುಡ್ಡ ಪರಿಸರದಲ್ಲಿ ನಾಲ್ವರು ಮಹಿಳೆಯರು ಶಂಕಾಸ್ಪದ ರೀತಿಯಲ್ಲಿ ತಿರುಗಾಡುತ್ತಿರುವ ಬಗ್ಗೆ ಸ್ಥಳೀಯರೊಬ್ಬರು 112ಕ್ಕೆ ಕರೆ ಮಾಡಿ ತಿಳಿಸಿದರು. ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು ಸ್ಥಳಕ್ಕೆ ಧಾವಿಸಿ ಮಹಿಳೆಯರನ್ನು ವಶಕ್ಕೆ ಪಡೆದಿದ್ದಾರೆ. ವಿಚಾರಣೆ ವೇಳೆ ಓರ್ವ ಮಹಿಳೆ ಈ ಹಿಂದೆ ಕದ್ರಿ ಠಾಣೆಯಲ್ಲಿ ನಡೆದ ಮನೆ ದರೋಡೆ ಪ್ರಕರಣವೊಂದರ ಆರೋಪಿಯಾಗಿದ್ದು, ತಲೆಮರೆಸಿಕೊಂಡಿರುವುದು ಬೆಳಕಿಗೆ ಬಂದಿದೆ. ಬಳಿಕ ಆಕೆಯನ್ನು ಬಂಧಿಸಿ ಕ್ರಮ ಕೈಗೊಳ್ಳಲಾಗಿದೆ. ಉಳಿದ ಮೂವರು ಯಾವುದೇ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿಲ್ಲದ ಕಾರಣ ಎಚ್ಚರಿಕೆ ನೀಡಿ ಅವರನ್ನು ಬಿಟ್ಟು ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸಾರ್ವಜನಿಕರು ಪೊಲೀಸ್ ಇಲಾಖೆಯೊಂದಿಗೆ ನೇರ ಸಂಪರ್ಕದಲ್ಲಿದ್ದುಕೊಂಡು ಇಂತಹ ಮಾಹಿತಿಗಳನ್ನು ಹಂಚಿಕೊಂಡರೆ ಶಾಂತಿ- ಸುವ್ಯವಸ್ಥೆ ಕಾಪಾಡುವಲ್ಲಿ ನೆರವಾಗಲಿದೆ ಎಂದು ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.





