ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹಿಸಿ ಹೋರಾಟವನ್ನು ಇನ್ನಷ್ಟು ತೀವ್ರಗೊಳಿಸಲು ನಿರ್ಧಾರ

ಮಂಗಳೂರು : ಹಲವು ದಶಕಗಳ ಕನಸಾಗಿರುವ ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಸಂಬಂಧಿಸಿ ನಡೆಯುತ್ತಿರುವ ಹೋರಾಟವನ್ನು ಇನ್ನಷ್ಟು ತೀವ್ರಗೊಳಿಸಲು ಸೋಮವಾರ ನಡೆದ ದ.ಕ. ಹಾಗೂ ಉಡುಪಿ ಜಿಲ್ಲೆಗಳ ವಕೀಲರುಗಳ ಸಂಘಗಳ ಪದಾಧಿಕಾರಿಗಳ ಸಮಾಲೋಚನಾ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ.
ಮಂಗಳೂರು ವಕೀಲರ ಸಂಘದ ಸಭಾಭವನದಲ್ಲಿ ನಡೆದ ಸಭೆಯ ಅಧ್ಯಕ್ಷತೆಯನ್ನು ಮಂಗಳೂರು ವಕೀಲರ ಸಂಘದ ಅಧ್ಯಕ್ಷ ಎಚ್.ವಿ.ರಾಘವೇಂದ್ರ ವಹಿಸಿದ್ದರು.
ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹಿಸಿ ದ.ಕ ಮತ್ತು ಉಡುಪಿ ಜಿಲ್ಲೆಗಳ ಎಲ್ಲ ತಾಲೂಕುಗಳಲ್ಲಿ ಅ.23ರಂದು ಅಂಚೆ ಕಾರ್ಡ್ ಚಳವಳಿ ಕೈಗೊಳ್ಳುವುದು ಮತ್ತು ಅ.27ರಂದು ಮಂಗಳೂರಿಗೆ ಆಗಮಿಸಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮತ್ತೊಮ್ಮೆ ಮಂಗಳೂರಿಗೆ ಹೈಕೋರ್ಟ್ ಪೀಠ ಸ್ಥಾಪನೆಗೆ ಮನವಿ ಸಲ್ಲಿಸುವ ಬಗ್ಗೆ ತೀರ್ಮಾನಿಸಲಾಗಿದೆ.
ವಿವಿಧ ಸಂಘ ಸಂಸ್ಥೆಗಳು, ಜನಪ್ರತಿನಿಧಿಗಳು, ವಿದ್ಯಾರ್ಥಿಗಳನ್ನು ಸೇರಿಸಿಕೊಂಡು ಜಾಥಾ ಮತ್ತು ಸಾಮಾಜಿಕ ಜಾಲತಾಣಗಳ ಮೂಲಕ ಜನಾಭಿಪ್ರಾಯ ರೂಪಿಸುವ ಬಗ್ಗೆ ನಿರ್ಧರಿಸಲಾಗಿದೆ.
ಸಮಿತಿಯ ಸಂಚಾಲಕ, ವಿಧಾನ ಪರಿಷತ್ ಸದಸ್ಯ ಐವನ್ ಡಿ ಸೋಜ ಅವರು ಮಾತನಾಡಿ, ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ ಬೇಡಿಕೆಗೆ ಸಂಬಂಧಿಸಿ ಈಗಾಗಲೇ ಕಾನೂನು ಸಚಿವ ಎಚ್.ಕೆ.ಪಾಟೀಲ್, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿ ಮನವಿ ಮಾಡಲಾಗಿದೆ. ಅಧಿವೇಶನದಲ್ಲಿಯೂ ಚರ್ಚೆ ನಡೆಸಲಾಗಿದೆ. ಸಂಚಾರಿ ಪೀಠ ಹಾಗೂ ಶಾಶ್ವತ ಪೀಠಕ್ಕೆ ಮೂಲಸೌಕರ್ಯ, ಜಾಗದ ಕೊರತೆ ಇಲ್ಲ ಎಂದು ತಿಳಿಸಿದರು.
ಮಂಗಳೂರು ವಕೀಲರ ಸಂಘದ ಕಾರ್ಯದರ್ಶಿ ಶ್ರೀಧರ ಎಚ್., ನಿಕಟಪೂರ್ವ ಅಧ್ಯಕ್ಷ ಪೃಥ್ವಿರಾಜ ರೈ, ವಿಧಾನಪರಿಷತ್ ಮಾಜಿ ಸದಸ್ಯ ಮೋನಪ್ಪ ಭಂಡಾರಿ, ಬೆಳ್ತಂಗಡಿ ವಕೀಲರ ಸಂಘದ ಅಧ್ಯಕ್ಷ ವಸಂತ ಮರಕಡ, ಕುಂದಾಪುರ ವಕೀಲರ ಸಂಘದ ಅಧ್ಯಕ್ಷ ಗೋಪಾಲ ಶೆಟ್ಟಿ, ಬಂಟ್ವಾಳ ವಕೀಲರ ಸಂಘದ ಅಧ್ಯಕ್ಷ ರಿಚರ್ಡ್ ಕ್ರಾಸ್ತಾ, ಮೂಡುಬಿದಿರೆ ವಕೀಲರ ಸಂಘದ ಅಧ್ಯಕ್ಷ ಹರೀಶ್, ಸ್ಥಾಪಕಾಧ್ಯಕ್ಷ ಬಾಹುಬಲಿ ಪ್ರಸಾದ್, ಹಿರಿಯ ನ್ಯಾಯವಾದಿ ಟಿ.ಎನ್.ಪೂಜಾರಿ ಮತ್ತಿತರರು ಉಪಸ್ಥಿತರಿದ್ದರು. ನ್ಯಾಯವಾದಿಗಳಾದ ಬಿ.ಎ ಮೊಹಮ್ಮದ್ ಹನೀಫ್, ಮನೋರಾಜ್, ಎಸ್ ಡಿ ಎಂ ಕಾನೂನು ಮಹಾವಿದ್ಯಾಲಯದ ಡಾ. ಸುಮಾ ಮೊದಲಾದವರು ಸಲಹೆಗಳನ್ನು ನೀಡಿದರು.
ಜಗದೀಶ್ ಕಾರ್ಯಕ್ರಮ ನಿರೂಪಿಸಿದರು.







