ಆಧುನಿಕ ಶಿಕ್ಷಣ ಮತ್ತು ಮಾಹಿತಿ ತಂತ್ರಜ್ಞಾನದಿಂದ ಮಾನವೀಯ ಮೌಲ್ಯ ಕುಸಿಯುತ್ತಿವೆ: ಉಮರ್ ಯು..ಎಚ್.

ಉಪ್ಪಿನಂಗಡಿ: ದುಡ್ಡು ಸಂಪಾದನೆಯೇ ಮೂಲ ಉದ್ದೇಶವಾಗುತ್ತಿರುವ ಆಧುನಿಕ ಶಿಕ್ಷಣ ವ್ಯವಸ್ಥೆ ಮತ್ತು ನಾಗಾಲೋಟದಲ್ಲಿ ಸಾಗುತ್ತಿರುವ ಮಾಹಿತಿ ತಂತ್ರಜ್ಞಾನದಿಂದಾಗಿ ವಿದ್ಯಾರ್ಥಿ, ಯುವಜನರಲ್ಲಿ ಮಾನವೀಯ ಮೌಲ್ಯಗಳು ಕುಸಿಯುತ್ತಿವೆ ಎಂದು ಬ್ಯಾರಿ ಸಾಹಿತ್ಯ ಅಕಾಡಮಿಯ ಅಧ್ಯಕ್ಷ ಉಮರ್ ಯು.ಎಚ್. ಆತಂಕ ವ್ಯಕ್ತಪಡಿಸಿದರು.
ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿಯು ಆತೂರಿನ ಆಯಿಶಾ ಹೆಣ್ಮಕ್ಕಳ ಪ್ರೌಢಶಾಲೆ ಮತ್ತು ಪಪೂ ಕಾಲೇಜಿನ ಸಹಯೋಗದೊಂದಿಗೆ ಶುಕ್ರವಾರ ವಿದ್ಯಾರ್ಥಿಗಳಿಗಾಗಿ ಹಮ್ಮಿಕೊಂಡಿದ್ದ ಬ್ಯಾರಿ ಸಾಹಿತ್ಯ ಕಮ್ಮಟ ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.
ವಿದ್ಯಾ ಕೇಂದ್ರಗಳು ಮೌಲ್ಯಾಧಾರಿತ ಶಿಕ್ಷಣಕ್ಕೆ ಒತ್ತು ನೀಡುವುದರ ಜೊತೆಗೆ ವಿದ್ಯಾರ್ಥಿಗಳಲ್ಲಿ ಮಾಹಿತಿ ತಂತ್ರಜ್ಞಾನದ ದುರ್ಬಳಕೆ ತಡೆಯುವ ಜನಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕಾದ ಅಗತ್ಯವಿದೆ. ಸಾಮಾಜಿಕ ಸಂಘಟನೆಗಳು ಈ ಬೆಳವಣಿಗೆಯನ್ನು ಗಂಭೀರವಾಗಿ ಪರಿಗಣಿಸಿ ಅಗತ್ಯ ಯೋಜನೆಗಳನ್ನು ಕಾರ್ಯಗತಗೊಳಿಸಬೇಕಿದೆ ಎಂದು ಉಮರ್ ಯು.ಎಚ್. ಅಭಿಪ್ರಾಯಪಟ್ಟರು.
ಅಖಿಲ ಭಾರತ ಬ್ಯಾರಿ ಪರಿಷತ್‌ನ ಮಹಿಳಾ ಘಟಕದ ಅಧ್ಯಕ್ಷೆ, ಲೇಖಕಿ ಶಮೀಮಾ ಕುತ್ತಾರ್ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದರು. ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿಯ ಸದಸ್ಯೆ, ಕಾರ್ಯಕ್ರಮದ ಸದಸ್ಯ ಸಂಚಾಲಕಿ ಶಮೀರಾ ಜಹಾನ್ ಸ್ವಾಗತಿಸಿದರು. ಆಯಿಶಾ ಪಪೂ ಕಾಲೇಜಿನ ಪ್ರಾಂಶುಪಾಲೆ ಆಯಿಶಾ ಫರ್ಝಾನಾ, ಸಂಚಾಲಕ ಅಬ್ದುಲ್ ಹಸೀಬ್ ಅತಿಥಿಯಾಗಿ ಭಾಗವಹಿಸಿದ್ದರು. ವಿದ್ಯಾರ್ಥಿನಿಯರಾದ ಶಹದಾ ರಹ್ಫಾ, ಬೀಬಿ ಫಾತಿಮಾ, ಆಯಿಶಾ ಫರ್ಹಾ, ಆಯಿಶತ್ ಸಫಾ ಬ್ಯಾರಿ ಸ್ತುತಿಗೀತೆ ಹಾಡಿದರು. ಹಲೀಮಾ ತುಹ್ಫಾ ಮತ್ತು ಫಾತಿಮಾ ತಸ್ಕೀನಾ ಕಾರ್ಯಕ್ರಮ ನಿರೂಪಿಸಿದರು. ಉಪ ಪ್ರಾಂಶುಪಾಲೆ ರಮ್ಯ ಎಸ್. ವಂದಿಸಿದರು.







