ಭಾರತದ ಸ್ಪಪ್ಟ ಸಂದೇಶ ವಿಶ್ವಕ್ಕೆ ತಲುಪಿಸಲು ಅವಕಾಶ ಸಿಕ್ಕಿರುವುದು ನನ್ನ ಪಾಲಿನ ಹೆಮ್ಮೆ: ಸಂಸದ ಕ್ಯಾ. ಬ್ರಿಜೇಶ್ ಚೌಟ
ಹೊಸದಿಲ್ಲಿಯಿಂದ ದ.ಕ. ಸಂಸದರನ್ನೊಳಗೊಂಡ ಸರ್ವಪಕ್ಷ ನಿಯೋಗ ರಶ್ಯಕ್ಕೆ ಪ್ರಯಾಣ

ಕ್ಯಾ. ಬ್ರಿಜೇಶ್ ಚೌಟ (Photo:X/@CaptBrijesh)
ಮಂಗಳೂರು: ’ಆಪರೇಷನ್ ಸಿಂದೂರ್’ ಕಾರ್ಯಾಚರಣೆಯ ನಂತರದ ರಾಜತಾಂತ್ರಿಕ ಕಾರ್ಯತಂತ್ರದ ಭಾಗವಾಗಿ, ಪಾಕಿಸ್ತಾನ ಪ್ರಚೋದಿತ ಭಯೋತ್ಪಾದನೆ ಬಗ್ಗೆ ಜಾಗತಿಕ ಸಮುದಾಯಕ್ಕೆ ವಾಸ್ತವಾಂಶಗಳನ್ನು ವಿವರಿಸಲು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರನ್ನು ಒಳಗೊಂಡ ಡಿಎಂಕೆ ಕನಿಮೊಳಿ ನೇತೃತ್ವದ ಸರ್ವಪಕ್ಷಗಳ ನಿಯೋಗವು ಗುರುವಾರ ಬೆಳಗ್ಗೆ ವಿದೇಶಕ್ಕೆ ಪ್ರಯಾಣ ಬೆಳೆಸಿದೆ.
ಹೊಸದಿಲ್ಲಿ ವಿಮಾನ ನಿಲ್ದಾಣದಿಂದ ವಿಮಾನ ಮೂಲಕ ಬೆಳಗ್ಗೆ 11 ಗಂಟೆಗೆ ಹೊರಟ ಸರ್ವಪಕ್ಷದ ನಿಯೋಗದಲ್ಲಿ ಕ್ಯಾ. ಚೌಟ ಅವರ ಜತೆಗೆ ಡಿಎಂಕೆ ಪಕ್ಷದ ಸಂಸದೆ ಕನಿಮೋಳಿ, ಸಮಾಜವಾದಿ ಪಕ್ಷದ ರಾಜೀವ್ ರೈ, ನ್ಯಾಷನಲ್ ಕಾನ್ಫರೆನ್ಸ್ ಸಂಸದ ಮಿಯಾನ್ ಅಲ್ತಾಫ್ ಅಹ್ಮದ್, ಆರ್ಜೆಡಿ ಪಕ್ಷದ ಪ್ರೇಮ್ ಚಂದ್ ಗುಪ್ತಾ, ಎಎಪಿ ಪಕ್ಷದ ಅಶೋಕ್ ಮಿತ್ತಲ್, ನೇಪಾಳದ ಮಾಜಿ ರಾಯಭಾರಿ ಮಂಜೀವ್ ಪುರಿ ಹಾಗೂ ಫ್ರಾನ್ಸ್ನ ಮಾಜಿ ರಾಯಭಾರಿ ಜಾವೇದ್ ಅಶ್ರಫ್ ಇದ್ದಾರೆ. ಈ ನಿಯೋಗವು ಮೊದಲು ರಶ್ಯ ದೇಶಕ್ಕೆ ತೆರಳಲಿದೆ. ನಂತರ ಸ್ಲೊವೇನಿಯಾ (ಮೇ 25), ಗ್ರೀಸ್ (ಮೇ 27), ಲಾಟ್ವಿಯಾ (ಮೇ 29) ಮತ್ತು ಸ್ಪೇನ್ (ಮೇ 31) ಭೇಟಿ ನೀಡಲಿದ್ದಾರೆ.
ವಿದೇಶಕ್ಕೆ ತೆರಳುವ ಮುನ್ನ ಮಾಧ್ಯಮದ ಜತೆಗೆ ಮಾತನಾಡಿದ ದಕ್ಷಿಣ ಕನ್ನಡ ಸಂಸದ ಕ್ಯಾ. ಚೌಟ, ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದಲ್ಲಿ ಮುನ್ನಡೆಯುತ್ತಿರುವ ಭಾರತದ ದೃಢ ಮತ್ತು ಒಗ್ಗಟ್ಟಿನ ಸಂದೇಶವನ್ನು ಜಾಗತಿಕ ಮಟ್ಟದಲ್ಲಿ ಸಾರುವುದಕ್ಕೆ ಈ ಅಪರೂಪದ ಅವಕಾಶ ದೊರಕಿರುವುದು ಹಾಗೂ ನಿಯೋಗದ ಭಾಗವಾಗಿರುವುದು ಬಹಳ ಹೆಮ್ಮೆ ಮತ್ತು ಸೌಭಾಗ್ಯದ ಸಂಗತಿ ಎಂದು ಹೇಳಿದ್ದಾರೆ.
ಪ್ರಧಾನಮಂತ್ರಿ ಮೋದಿ ಅವರ ಅಭಿಪ್ರಾಯದಂತೆ ಭಯೋತ್ಪಾದನೆ ಮತ್ತು ಮಾತುಕತೆ ಒಟ್ಟಿಗೆ ನಡೆಯಲು ಸಾಧ್ಯವಿಲ್ಲ. ಹಾಗೆಯೇ ಭಯೋತ್ಪಾದನೆ ಮತ್ತು ವ್ಯಾಪಾರ ಒಟ್ಟಿಗೆ ಸಾಗಲು ಸಾಧ್ಯವಿಲ್ಲ. ಅಷ್ಟೇಅಲ್ಲ, ನೀರು ಮತ್ತು ರಕ್ತ ಎಂದಿಗೂ ಒಟ್ಟಿಗೆ ಹರಿಯಲು ಸಾಧ್ಯವಿಲ್ಲ ಎಂಬುದನ್ನು ಸ್ಪಷ್ಟವಾಗಿ ಹೇಳಿದ್ದಾರೆ.
ಭಾರತದ ನಿಲುವು ಬಹಳ ಸ್ಪಷ್ಟವಾಗಿದ್ದು, ಹೀಗಿರುವಾಗ ನಮ್ಮ ಸರ್ವಪಕ್ಷ ನಿಯೋಗವು ಪಾಕಿಸ್ತಾನ ಹರಡಲು ಯತ್ನಿಸುತ್ತಿರುವ ಸುಳ್ಳಿನ ಕಥೆಯನ್ನು ಜಾಗತಿಕವಾಗಿಯೂ ಬಯಲಿಗೆಳೆಯಲಿದೆ. ಪಾಕಿಸ್ತಾನ ಪ್ರೇರಿತ ಭಯೋತ್ಪಾದನೆಯ ವಿರುದ್ಧ ಹೋರಾಡುವ ನಮ್ಮ ಸಂಕಲ್ಪ ದೃಢವಾಗಿದೆ. ನಮ್ಮ ದೇಶವು ವಿಕಸಿತ ಭಾರತದತ್ತ ಹೆಜ್ಜೆ ಹಾಕುತ್ತಿರುವ ಈ ಮಹತ್ವದ ಕಾಲಘಟ್ಟದಲ್ಲಿ, ನಮ್ಮ ದೇಶದ ಜನತೆ, ಭವಿಷ್ಯ ಮತ್ತು ಪ್ರಗತಿಯ ಮೇಲೆ ಭಯೋತ್ಪಾದನೆಯ ಕರಿನೆರಳು ಬೀಳಲು ನಾವೆಂದಿಗೂ ಬಿಡುವುದಿಲ್ಲ ಎಂದು ಹೇಳಿದ್ದಾರೆ.
This is not just a delegation, this is the united voice of Bharat led by PM Shri @narendramodi.
— Captain Brijesh Chowta ಕ್ಯಾಪ್ಟನ್ ಬ್ರಿಜೇಶ್ ಚೌಟ (@CaptBrijesh) May 22, 2025
And at this threshold of time, when our country is striving towards being Viksit Bharat, there is no way we can let terror target our people, prospects or progress.
The world needs… pic.twitter.com/oT4sDNe057







