ಸೌಜನ್ಯಾ ಪರ ಹೋರಾಟ ನ್ಯಾಯಯುತವಾಗಿರಲಿ: ಪ್ರದೀಪ್ ಕಲ್ಕೂರ

ಮಂಗಳೂರು, ಆ.3: ಧರ್ಮಸ್ಥಳದ ವಿದ್ಯಾರ್ಥಿನಿ ಸೌಜನ್ಯಾ ಕೊಲೆ ಪ್ರಕರಣವನ್ನು ಮರು ತನಿಖೆ ನಡೆಸುವ ಬಗ್ಗೆ ಸರಕಾರ ಪರಿಶೀಲಿಸಬೇಕು. ಪ್ರಕರಣದಲ್ಲಿ ತಪ್ಪಿತಸ್ಥರು ಯಾರೇ ಆಗಿದ್ದರೂ ಅವರಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ದ.ಕ.ಕನ್ನಡ ಸಾಹಿತ್ಯ ಪರಿಷತ್‌ನ ಮಾಜಿ ಅಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ ಸರಕಾರವನ್ನು ಆಗ್ರಹಿಸಿದ್ದಾರೆ.
ಮಂಗಳೂರು ಪ್ರೆಸ್ ಕ್ಲಬ್‌ನಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಸೌಜನ್ಯಾ ಪರ ಹೋರಾಟ ನ್ಯಾಯಯುತವಾಗಿರಲಿ, ಸೌಜನ್ಯದಿಂದ ಕೂಡಿರಲಿ. ಆದರೆ ಕೆಲವರು ಈ ವಿಚಾರದಲ್ಲಿ ಸಾಮಾಜಿಕ ಜಾಲಾ ತಾಣದಲ್ಲಿ ಸಾಮಾಜಿಕ ಆರೋಗ್ಯವನ್ನು ಕೆಡಿಸುವ ಹೇಳಿಕೆಗಳನ್ನು ನೀಡುತ್ತಿರುವುದನ್ನು ಸರಕಾರ ಗಂಭೀರವಾಗಿ ಪರಿಗಣಿಸಬೇಕು ಎಂದು ಒತ್ತಾಯಿಸಿದರು.
ಸೌಜನ್ಯಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಇತ್ತೀಚಿನ ದಿನಗಳಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳವನ್ನು ಮತ್ತು ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆ ಅವರನ್ನು ಗುರಿಯಾಗಿರಿಸಿ ಸಾಮಾಜಿಕ ಜಾಲಾ ತಾಣದಲ್ಲಿ ಅವಹೇಳನಕಾರಿ ಹೇಳಿಕೆಗಳು ಪ್ರಕಟವಾಗುತ್ತಿರುವುದು ಖಂಡನೀಯ. ಸೌಜನ್ಯಾ ಕೊಲೆ ಪ್ರಕರಣದಲ್ಲಿ ನೈಜ ಆರೋಪಿಗಳು ಸಿಕ್ಕಿಲ್ಲ ಎಂಬ ಕಾರಣಕ್ಕಾಗಿ ಧರ್ಮಕ್ಷೇತ್ರವನ್ನು ದೂಷಿಸುವುದು ಸರಿಯಲ್ಲ ಎಂದು ಅಭಿಪ್ರಾಯಪಟ್ಟರು.
ಧರ್ಮಕ್ಷೇತ್ರಗಳು ನಮ್ಮ ಬದುಕಿಗೆ ಸುಸಂಸ್ಕೃತಿಯ ದಾರಿ ತೋರಿಸುವ ತಾಣಗಳು. ಹಿಂದೂ, ಮುಸ್ಲಿಂ, ಕ್ರೈಸ್ತ ಅಥವಾ ಯಾವುದೇ ಧರ್ಮಕ್ಷೇತ್ರದ ಬಗ್ಗೆ ಅವಹೇಳನಕಾರಿ ಹೇಳಿಕೆಗಳು ಸಲ್ಲದು. ಮೊದಲು ಉಡುಪಿ ಬಳಿಕ ಸುಬ್ರಹ್ಮಣ್ಯ ಇದೀಗ ಧರ್ಮಸ್ಥಳ ಬಗ್ಗೆ ಕೆಲವರು ಅಪಪ್ರಚಾರ ಮಾಡುತ್ತಿದ್ದಾರೆ. ಇದು ಮನಸ್ಸಿಗೆ ನೋವುಂಟು ಮಾಡಿದೆ ಎಂದರು.
ಸುದ್ದಿಗೋಷ್ಠಿಯಲ್ಲಿ ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ಹರಿಕೃಷ್ಣ ಪುನರೂರು, ಉದ್ಯಮಿ ಶ್ರೀಪತಿ ಭಟ್, ಸಾಹಿತಿ ಸದಾಶಿವ ಶೆಟ್ಟಿ, ಚಂದ್ರಶೇಖರ ಮೂಲ್ಯ ಉಪಸ್ಥಿತರಿದ್ದರು.







