ಮಂಗಳೂರು| ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

ಮಂಗಳೂರು: ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಯ ವತಿಯಿಂದ 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಇನೋಳಿಯ ಬ್ಯಾರೀಸ್ ನಾಲೆಡ್ಜ್ ಕ್ಯಾಂಪಸ್‌ನಲ್ಲಿ ಆಚರಿಸಲಾಯಿತು.
ಮಂಗಳೂರು ವಿಶ್ವವಿದ್ಯಾಲಯದ ಎಲೆಕ್ಟ್ರಾನಿಕ್ಸ್ ಮತ್ತು ಸೈಬರ್ ಭದ್ರತಾ ವಿಭಾಗದ ಮುಖ್ಯಸ್ಥರಾದ ಪ್ರೊ. ನವೀನ್ ಚಂದ್ರ ಕುಮಾರ್ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಬ್ಯಾರೀಸ್ ಅಕಾಡೆಮಿ ಆಫ್ ಲರ್ನಿಂಗ್‌ನ ಮುಖ್ಯಸ್ಥರು ಮತ್ತು ಮ್ಯಾನೇಜಿಂಗ್ ಟ್ರಸ್ಟಿ ಸೈಯದ್ ಮುಹಮ್ಮದ್ ಬ್ಯಾರಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಕಾರ್ಯಕ್ರಮದಲ್ಲಿ ಮಾತನಾಡಿದ ಸೈಯದ್ ಮುಹಮ್ಮದ್ ಬ್ಯಾರಿ, ರಾಷ್ಟ್ರಕ್ಕೆ ಬೆದರಿಕೆಯಾದ ಭ್ರಷ್ಟಾಚಾರ ಮತ್ತು ಕೋಮುವಾದ ಬಗ್ಗೆ ಮಾತನಾಡಿದರು. ಪ್ರತಿಯೊಬ್ಬರೂ ಅವುಗಳ ವಿರುದ್ಧ ಜಾಗರೂಕರಾಗಿರುವಂತೆ ಸೂಚಿಸಿದರು. ಇದಲ್ಲದೆ ಪ್ರತಿಯೊಬ್ಬ ನಾಗರಿಕನಿಗೆ ದಿನಕ್ಕೆ ಮೂರು ಹೊತ್ತಿನ ಊಟ, ಉತ್ತಮ ಆರೋಗ್ಯ ಮತ್ತು ಆಶ್ರಯ ಸಿಕ್ಕಾಗ ನಿಜವಾದ ಸ್ವಾತಂತ್ರ್ಯ ಸಾಧಿಸಿದಂತಾಗುತ್ತದೆ ಎಂದು ಹೇಳಿದರು.
ಈ ವೇಳೆ ಮಾತನಾಡಿದ ಪ್ರೊ. ನವೀನ್ ಚಂದ್ರ ಕುಮಾರ್, ಸ್ವಾತಂತ್ರ್ಯ ಹೋರಾಟದಲ್ಲಿ ಮಂಗಳೂರಿಗರ ಕೊಡುಗೆ ಗಳನ್ನು ಸ್ಮರಿಸಿದರು. ವಿದ್ಯಾರ್ಥಿಗಳಲ್ಲಿ ದೇಶಭಕ್ತಿಯ ಮನೋಭಾವವನ್ನು ಬೆಳೆಸಿದ್ದಕ್ಕಾಗಿ ಮತ್ತು ಸ್ವಾತಂತ್ರ್ಯ ದಿನದ ಅಂಗವಾಗಿ ವಿವಿಧ ಸ್ಪರ್ಧೆಗಳನ್ನು ಆಯೋಜಿಸಿದ್ದಕ್ಕಾಗಿ ಅವರು ಸಂಸ್ಥೆಯನ್ನು ಶ್ಲಾಘಿಸಿದರು.
ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಬ್ಯಾರೀಸ್ ಸಮೂಹ ಸಂಸ್ಥೆಗಳ ಅಧೀನದಲ್ಲಿ ವಿದ್ಯಾರ್ಥಿಗಳಿಗೆ ಭಾಷಣ, ಚಿತ್ರಕಲೆ ಮತ್ತು ಸಂಗೀತ ಸೇರಿದಂತೆ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ. ಸ್ಪರ್ಧೆಯಲ್ಲಿ ವಿಜೇತ ವಿದ್ಯಾರ್ಥಿ ಗಳಿಗೆ ಬಹುಮಾನವನ್ನು ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿ ಸುಮಯ್ಯ ನಾಸಿರ್ ಸ್ವಾಗತಿಸಿದರು. ಮುಹಮ್ಮದ್ ಹಾಶಿಮ್ ನಿರೂಪಿಸಿದರು. ಕಾರ್ಯಕ್ರಮದಲ್ಲಿ ಬಿಐಟಿ, ಬೀಡ್ಸ್, ಬಿಐಇಎಸ್, ಬಿಐಟಿ ಪಾಲಿಟೆಕ್ನಿಕ್ ಮತ್ತು ಬಿಐಪಿಯುಸಿಯ ಪ್ರಾಂಶುಪಾಲರು, ಅಧ್ಯಾಪಕರು, ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.







