ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ| ಕಾಲೇಜು ವಿದ್ಯಾರ್ಥಿಗಳಿಗೆ ಮಾದಕವಸ್ತು ಪೂರೈಸುತ್ತಿದ್ದ ಆರೋಪಿ ಸೆರೆ

ಮಂಗಳೂರು, ಆ.29: ಮಂಗಳೂರಿನ ಸಿಸಿಬಿ ಪೊಲೀಸರು ನಡೆಸಿದ ಕಾರ್ಯಾಚರಣೆಯೊಂದರಲ್ಲಿ ನಗರದ ಪ್ರತಿಷ್ಠಿತ ಕಾಲೇಜು ವಿದ್ಯಾರ್ಥಿಗಳಿಗೆ ಮಾದಕ ವಸ್ತುಗಳನ್ನು ಪೂರೈಸುತ್ತಿದ್ದ ಆರೋಪದಲ್ಲಿ ಓರ್ವನನ್ನು ಬಂಧಿಸಿದ್ದಾರೆ.
ಮೂಲತ: ಕೇರಳದ ಎರ್ನಾಕುಲಂ ಮಟ್ಟಂಚೇರಿಯ ಹಾಗೂ ಇದೀಗ ದೇರಳಕಟ್ಟೆಯಲ್ಲಿ ನೆಲೆಸಿರುವ ಮುಹಮ್ಮದ್ ಅರ್ಶದ್ ಖಾನ್(29) ಬಂಧಿತ ಆರೋಪಿ.
ಈತನ ವಶದಿಂದ ರೂ. 10, 85,000 ಮೌಲ್ಯದ ನಿಷೇದಿತ ಮಾದಕ ವಸ್ತುವಾದ ಎಂಡಿಎಂಎ, ಹೈಡ್ರೋವಿಡ್ ಗಾಂಜಾ, ಎಂಡಿಎಂಎ ಮಾತ್ರೆ ಮತ್ತು ಡಿಜಿಟಲ್ ತೂಕ ಮಾಪನ, ಮೊಬೈಲ್ ಫೋನ್ ಸಹಿತ ಸೊತ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಆರೋಪಿಯು ಎಂಡಿಎಂಎ ನ್ನು ಬೆಂಗಳೂರಿನಿಂದ ಖರೀದಿಸಿಕೊಂಡು ಮಂಗಳೂರು ನಗರದ ಪ್ರತಿಷ್ಠಿತ ಕಾಲೇಜು ವಿದ್ಯಾರ್ಥಿಗಳಿಗೆ ಪೂರೈಕೆ ಮಾಡುತ್ತಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಬೆಂಗಳೂರಿನಿಂದ ಮಾದಕ ವಸ್ತುವಾದ ಎಂಡಿಎಂಎ ನ್ನು ಖರೀದಿಸಿಕೊಂಡು ಅದನ್ನು ಮಂಗಳೂರು ನಗರದ ಪ್ರತಿಷ್ಠಿತ ಕಾಲೇಜು ವಿದ್ಯಾರ್ಥಿಗಳಿಗೆ ಪೂರೈಕೆ ಮಾಡುತ್ತಿದ್ದ ಎನ್ನಲಾಗಿದೆ.
ಆರೋಪಿಯು ದೇರಳಕಟ್ಟೆಯ ಪರಿಸರದಲ್ಲಿ ನಿಂತುಕೊಂಡು ಮಾರಾಟ ಮಾಡುತ್ತಿದ್ದಾನೆ ಎಂಬ ಖಚಿತ ಮಾಹಿತಿಯನ್ನು ಪಡೆದ ಮಂಗಳೂರು ಸಿಸಿಬಿ ಪೊಲೀಸರು ದಾಳಿ ನಡೆಸಿ ಆತನನ್ನು ವಶಕ್ಕೆ ತೆಗೆದುಕೊಂಡು ಆತನ ವಶದಲ್ಲಿದ್ದ ಮಾದಕ ವಸ್ತುವನ್ನು ವಶಪಡಿಸಿಕೊಂಡರು.
ಈ ಬಗ್ಗೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
ಈ ಮಾದಕವಸ್ತು ಮಾರಾಟ/ಸಾಗಾಟ ಜಾಲದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು, ಆರೋಪಿಗಳ ಪತ್ತೆ ಕಾರ್ಯ ಮುಂದುವರಿದಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.







