ರಾಜ್ಯ ಸರಕಾರದ ವಿರುದ್ಧ ದ.ಕ.ಜಿಲ್ಲಾ ಬಿಜೆಪಿ ಪ್ರತಿಭಟನೆ

ಮಂಗಳೂರು: ರಾಜ್ಯದಲ್ಲಿ ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ಹಾಗೂ ಬಿಜೆಪಿ ಸರಕಾರದ ಅವಧಿಯಲ್ಲಿ ಜಾರಿ ಯಾಗಿದ್ದ ಅನೇಕ ರೈತಪರ ಯೋಜನೆಗಳನ್ನು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಸ್ಥಗಿತಗೊಳಿಸುವ ಮೂಲಕ ರೈತರಿಗೆ ಅನ್ಯಾಯ ಎಸಗಿದೆ ಎಂದು ಬಿಜೆಪಿ ದ.ಕ. ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಆರೋಪಿಸಿದರು.
ರಾಜ್ಯ ಕಾಂಗ್ರೆಸ್ ಸರಕಾರವು ಹಾಲು ಉತ್ಪಾದಕರಿಗೆ ಪ್ರೋತ್ಸಾಹಧನ ನೀಡದಿರುವುದರ ವಿರುದ್ಧ ಹಾಗೂ ರೈತರಿಗೆ ನೀಡಬೇಕಾದ ಬಾಕಿ ಹಣ ಉಳಿಸಿಕೊಂಡಿರುವುದನ್ನು ಖಂಡಿಸಿ ಬಿಜೆಪಿ ದ.ಕ. ಜಿಲ್ಲಾ ಸಮಿತಿಯ ಚತಿಯಿಂದ ನಗರದ ಮಿನಿ ವಿಧಾನಸೌಧ ಮುಂದೆ ಬುಧವಾರ ನಡೆದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.
ರಾಜ್ಯ ಸರಕಾರ ರೈತರಿಗೆ, ಹೈನುಗಾರರಿಗೆ ವರದಾನವಾಗಿದ್ದ ಎಲ್ಲ ಯೋಜನೆಗಳನ್ನು ಸ್ಥಗಿತಗೊಳಿಸಿದ ಕಾರಣ ರೈತರು ಹಾಗೂ ಹೈನುಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ. ರಾಜ್ಯದಲ್ಲಿ ೮೦ರಿಂದ ೮೫ ಲಕ್ಷ ಲೀ.ನಷ್ಟು ಹಾಲು ಸಂಗ್ರಹಣೆ ಯಾಗುತ್ತಿತ್ತು. ಈಗ 10 ಲಕ್ಷ ಲೀ. ಇಳಿಕೆಯಾಗಿದೆ. ಮೇವಿನ ಕೊರತೆಯಿಂದ ಜಾನುವಾರುಗಳು ಸಾಯುತ್ತಿವೆ. ಸರಕಾರ ಬರ ಪರಿಹಾರ ನೀಡಿಲ್ಲ ಎಂದು ಸತೀಶ್ ಕುಂಪಲ ಆರೋಪಿಸಿದರು.
ವಿಧಾನ ಪರಿಷತ್ ಮಾಜಿ ಸದಸ್ಯ ಮೋನಪ್ಪ ಭಂಡಾರಿ, ಬಿಜೆಪಿ ನಿಕಟಪೂರ್ವ ಜಿಲ್ಲಾಧ್ಯಕ್ಷ ಸುದರ್ಶನ ಮೂಡುಬಿದಿರೆ ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು, ಬಿಜೆಪಿ ಜಿಲ್ಲಾ ಸಹಪ್ರಭಾರಿ ರಾಜೇಶ್ ಕಾವೇರಿ ಮಾತನಾಡಿದರು.
ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಕಿಶೋರ್ ಕುಮಾರ್ ಬೊಟ್ಯಾಡಿ, ಯತೀಶ್ ಆರ್ವಾರ್, ಪ್ರೇಮಾನಂದ ಶೆಟ್ಟಿ, ಪ್ರಮುಖರಾದ ನಿತಿನ್ ಕುಮಾರ್, ರವಿಶಂಕರ್ ಮಿಜಾರು, ರವೀಂದ್ರ ಶೆಟ್ಟಿ ಉಳಿದೊಟ್ಟು, ತಿಲಕ್ ರಾಜ್ ಕೃಷ್ಣಾಪುರ, ಉಪ ಮೇಯರ್ ಸುನೀತಾ, ಯುವ ಮೋರ್ಚಾ ಜಿಲ್ಲಾಧ್ಯಕ್ಷ ನಂದನ್ ಮಲ್ಯ, ಜಿಲ್ಲಾ ವಕ್ತಾರರಾದ ರಾಜಗೋಪಾಲ ರೈ, ಅರುಣ್ ಶೇಟ್, ಜಿಲ್ಲಾ ಮಾಧ್ಯಮ ಪ್ರಮುಖ್ ವಸಂತ ಪೂಜಾರಿ ಮತ್ತಿತರರು ಪಾಲ್ಗೊಂಡಿದ್ದರು.







