ಕುಡಿಯುವ ನೀರಿನ ಸಮಸ್ಯೆ ಎದುರಾದರೆ ಅಧಿಕಾರಿಗಳೇ ಹೊಣೆ: ದ.ಕ. ಜಿಲ್ಲಾಧಿಕಾರಿ ಎಚ್ಚರಿಕೆ

ಮಂಗಳೂರು: ಬೇಸಿಗೆ ಕಾಲದಲ್ಲಿ ಸಾರ್ವಜನಿಕರಿಗೆ ಮತ್ತು ಜಾನುವಾರುಗಳಿಗೆ ಕುಡಿಯುವ ನೀರಿನ ಯಾವುದೇ ಸಮಸ್ಯೆ ಎದುರಾಗದಂತೆ ಅಧಿಕಾರಿಗಳು ಈಗಿನಿಂದಲೇ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸೂಚಿಸಿರುವ ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಸಮಸ್ಯೆ ಎದುರಾದರೆ ಅಧಿಕಾರಿಗಳೇ ಹೊಣೆ ಎಂದು ಎಚ್ಚರಿಸಿದ್ದಾರೆ.
ದ.ಕ.ಜಿಲ್ಲಾಧಿಕಾರಿ ಕಚೇರಿಯಲ್ಲಿ ಬರ ಪರಿಸ್ಥಿತಿ ನಿರ್ವಹಣೆ ಕುರಿತು ಮಂಗಳವಾರ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕುಡಿಯುವ ನೀರಿನ ಲಭ್ಯತೆ ಹಾಗೂ ಸಮಸ್ಯೆಯಿರುವ ಗ್ರಾಮಗಳನ್ನು ಗುರುತಿಸಿಕೊಳ್ಳಬೇಕು. ನೀರು ಪೂರೈಕೆಗೆ ಪರ್ಯಾಯ ಮೂಲಗಳನ್ನು ಗುರುತಿಸಿಡಬೇಕು. ಅಗತ್ಯ ಬಿದ್ದರೆ ಖಾಸಗಿ ಬೋರ್‌ವೆಲ್‌ಗಳಿಂದಲೂ ನೀರು ಪಡೆಯಲು ಕ್ರಮ ವಹಿಸಬೇಕು ಎಂದು ಡಿಸಿ ಹೇಳಿದರು.
ಜಿಲ್ಲೆಯ ಗ್ರಾಮಾಂತರ ಪ್ರದೇಶಗಳ 39 ಗ್ರಾಮಗಳಲ್ಲಿ ಹಾಗೂ ನಗರ ಮತ್ತು ಪಟ್ಟಣ ಪ್ರದೇಶಗಳ 112 ವಾರ್ಡುಗಳಲ್ಲಿ ಕುಡಿಯುವ ನೀರಿನ ಕೊರತೆ ಎದುರಾಗುವ ಸಾಧ್ಯತೆಯ ಬಗ್ಗೆ ಅಂದಾಜಿಸಲಾಗಿದೆ. ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕುಡಿ ಯುವ ನೀರಿನ ಸಮಸ್ಯೆ ಕಂಡು ಬಂದರೆ ಮಾಹಿತಿ ನೀಡಲು ಹೆಲ್ಪ್‌ಲೈನ್ ತೆರೆದು, ಸಿಬ್ಬಂದಿ ನೇಮಕ ಮಾಡಬೇಕು. ಕುಡಿಯುವ ನೀರಿನ ಪೂರೈಕೆ ಮಾಡುವ ನೀರನ್ನು ಅದರ ಶುದ್ಧತೆ, ಗುಣಮಟ್ಟ ಕುರಿತು ಪರಿಶೀಲನೆ ನಡೆಸಬೇಕು ಎಂದರು.
ಹೊಸ ಬೋರ್‌ವೆಲ್‌ಗಳನ್ನು ಕೊರೆಯಲು ಅಗತ್ಯ ಇರುವ ಕಡೆ ಗುರುತಿಸಿಟ್ಟುಕೊಳ್ಳಬೇಕು. ಬರವನ್ನು ಸಮರ್ಥವಾಗಿ ನಿರ್ವಹಿಸಲು ಅಧಿಕಾರಿಗಳು ಕ್ಷೇತ್ರಗಳಿಗೆ ಭೇಟಿ ನೀಡಬೇಕ ಎಂದ ಡಿಸಿ, ತುಂಬೆ ನೇತ್ರಾವತಿ, ಎಎಂಆರ್, ಮಳವೂರು ಅಣೆಕಟ್ಟುಗಳ ನೀರಿನ ಪ್ರಮಾಣದ ಮಾಹಿತಿ ಪಡೆದರಲ್ಲದೆ ನಿರ್ದಿಷ್ಟ ಪ್ರಮಾಣಕ್ಕಿಂತ ಕೆಳಗೆ ನೀರು ಇಳಿದರೆ ಅನುಸರಿಸಬೇಕಾದ ಕ್ರಮಗಳ ಬಗ್ಗೆ ಸಿದ್ಧತೆ ಮಾಡಿಕೊಳ್ಳಲು ತಿಳಿಸಿದರು.
ತುಂಬೆ ನೇತ್ರಾವತಿ ಡ್ಯಾಂನಲ್ಲಿ ಪ್ರಸ್ತುತ 6 ಮೀಟರ್ ನೀರಿದ್ದು, ಮಂಗಳೂರು ಮಹಾನಗರಪಾಲಿಕೆ, ೩ ಗ್ರಾಪಂ, ಮುಲ್ಕಿ ಮತ್ತು ಉಳ್ಳಾಲ ನಗರ ಪ್ರದೇಶಗಳಿಗೆ ತುಂಬೆ ಡ್ಯಾಂನಿಂದಲೇ ನೀರು ಪೂರೈಕೆ ಆಗುತ್ತಿದೆ. ತುಂಬೆ ವೆಂಟೆಡ್ ಡ್ಯಾಂ ಕೆಳಭಾಗದ ನೀರನ್ನು ಪ್ರತಿನಿತ್ಯ ತುಂಬೆ ಡ್ಯಾಂಗೆ ಹಾಯಿಸಿ ನದಿ ನೀರಿನ ಮಟ್ಟವನ್ನು ಕಾಯ್ದುಕೊಳ್ಳಲು ಕ್ರಮ ಕೈಗೊಳ್ಳಲಾಗಿದೆ ಎಂದು ಮಹಾನಗರಪಾಲಿಕೆ ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.
ಕುಡಿಯುವ ನೀರಿನ ಸಮಸ್ಯೆ ಇರುವ ನಗರದ ಎತ್ತರ ಪ್ರದೇಶಗಳಿಗೆ 15 ಟ್ಯಾಂಕರ್‌ಗಳ ಮೂಲಕ ಮಹಾನಗರಪಾಲಿಕೆಯ ವತಿಯಿಂದ ನೀರು ಪೂರೈಕೆ ಮಾಡಲಾಗುತ್ತಿದೆ ಎಂದರು.
ಮಳವೂರು ಡ್ಯಾಂನಲ್ಲಿ 1.5 ಮೀ. ನೀರು ಲಭ್ಯವಿದೆ. ಬಹುಗ್ರಾಮ ಕುಡಿಯುವ ನೀರಿನ ಯೋಜನೆಗಳ ಮೂಲಕವೂ ನೀರು ಸರಬರಾಜು ಮಾಡಲಾಗುತ್ತಿದೆ ಎಂದು ಗ್ರಾಮೀಣ ಕುಡಿಯುವ ನೀರು ಇಂಜಿನಿಯರ್ ಸಭೆಗೆ ಮಾಹಿತಿ ನೀಡಿದರು.
ಸಣ್ಣ ನೀರಾವರಿ ಇಲಾಖೆ ವ್ಯಾಪ್ತಿಯಲ್ಲಿರುವ ಅಡ್ಯಾರ್-ಹರೇಕಳ ಡ್ಯಾಂ ಹಾಗೂ ಪುತ್ತೂರು ತಾಲೂಕಿನ ಬಿಳಿಯೂರು ಡ್ಯಾಂನಿಂದಲೂ ಅಗತ್ಯ ಬಿದ್ದರೆ ಕುಡಿಯುವ ನೀರು ಪೂರೈಕೆಗೆ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿಗಳು ಸೂಚಿಸಿದರು.
ಸಭೆಯಲ್ಲಿ ಜಿಪಂ ಸಿಇಒ ಡಾ. ಆನಂದ್, ಮಂಗಳೂರು ಉಪ ವಿಭಾಗಾಧಿಕಾರಿ ಹರ್ಷವರ್ಧನ್, ಪುತ್ತೂರು ಉಪ ವಿಭಾಗಾಧಿಕಾರಿ ಜುಬಿನ್ ಮಹಾಪಾತ್ರ, ಮತ್ತಿತರರು ಉಪಸ್ಥಿತರಿದ್ದರು.







